
ಬೆಂಗಳೂರು, 30 ಮೇ (ಹಿ.ಸ.) :
ಆ್ಯಂಕರ್ : ರಾಜ್ಯದ ರಾಜಕೀಯ ಬೆಳವಣಿಗೆಗೆ ಮಹತ್ವದ ತಿರುವು ನೀಡುವಂತೆ ಕರ್ನಾಟಕ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್ಪಿ) ನೂತನ ನಾಯಕರಾಗಿ ಡಿ.ಕೆ. ಶಿವಕುಮಾರ್ ಅವರನ್ನು ಶನಿವಾರ ಅಧಿಕೃತವಾಗಿ ಆಯ್ಕೆ ಮಾಡಲಾಯಿತು. ವಿಧಾನ ಸೌಧದ ಮೂರನೇ ಮಹಡಿಯ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಪ್ರಕಟಗೊಂಡಿತು.
ಸಭೆ ಆರಂಭವಾಗುತ್ತಿದ್ದಂತೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯ ಅವರು ಮಾತನಾಡಿ, ಶಾಸಕಾಂಗ ಪಕ್ಷದ ನಾಯಕನ ಸ್ಥಾನದಿಂದಲೂ ತಾವು ನಿರ್ಗಮಿಸಿರುವುದಾಗಿ ತಿಳಿಸಿದರು. ಹೊಸ ನಾಯಕನ ಆಯ್ಕೆಯನ್ನು ಪಕ್ಷದ ಹೈಕಮಾಂಡ್ಗೆ ಬಿಟ್ಟಿರುವುದಾಗಿ ಹೇಳಿದ ಅವರು, ಸಭೆಯಿಂದ ಹೊರನಡೆದರು.
ಇದಾದ ಬಳಿಕ ಪಕ್ಷದ ವೀಕ್ಷಕರು ಹಾಗೂ ಹೈಕಮಾಂಡ್ ಪ್ರತಿನಿಧಿಗಳೊಂದಿಗೆ ಸಮಾಲೋಚನೆ ನಡೆಯಿತು. ಸುಮಾರು ಇಪ್ಪತ್ತು ನಿಮಿಷಗಳ ವಿರಾಮದ ನಂತರ ಪುನರಾರಂಭಗೊಂಡ ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಅವರನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಅಧಿಕೃತವಾಗಿ ಘೋಷಿಸಲಾಯಿತು. ಸಭೆಯಲ್ಲಿ ಉಪಸ್ಥಿತರಿದ್ದ ಶಾಸಕರು ಈ ಆಯ್ಕೆಯನ್ನು ಸರ್ವಾನುಮತದಿಂದ ಅನುಮೋದಿಸಿದರು.
ಈ ಮೂಲಕ ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕರಿಸಲಿದ್ದಾರೆ. ಹಲವು ದಿನಗಳಿಂದ ರಾಜ್ಯ ರಾಜಕೀಯದಲ್ಲಿ ಕುತೂಹಲಕ್ಕೆ ಕಾರಣವಾಗಿದ್ದ ನಾಯಕತ್ವ ಬದಲಾವಣೆಯ ಪ್ರಕ್ರಿಯೆಗೆ ಶಾಸಕಾಂಗ ಪಕ್ಷದ ಸಭೆಯೊಂದಿಗೆ ಅಧಿಕೃತ ತೆರೆ ಬಿದ್ದಿದೆ.
ಜೂನ್ 3ರಂದು ಲೋಕಭವನದಲ್ಲಿ ಪದಗ್ರಹಣ
ಇದೇ ವೇಳೆ ಮುಖ್ಯಮಂತ್ರಿ ಪದಗ್ರಹಣ ಸಮಾರಂಭದ ಸ್ಥಳ ಹಾಗೂ ಸ್ವರೂಪದ ಕುರಿತ ಗೊಂದಲಕ್ಕೂ ಕಾಂಗ್ರೆಸ್ ಸ್ಪಷ್ಟನೆ ನೀಡಿದೆ. ಆರಂಭದಲ್ಲಿ ವಿಧಾನ ಸೌಧದ ಮೆಟ್ಟಿಲುಗಳ ಮೇಲೆ ಪದಗ್ರಹಣ ನಡೆಯಲಿದೆ ಎಂಬ ಸುದ್ದಿಗಳು ಹರಿದಾಡಿದ್ದರೂ, ಅಂತಹ ಯಾವುದೇ ಕಾರ್ಯಕ್ರಮ ನಿಗದಿಯಾಗಿಲ್ಲ ಎಂದು ಪಕ್ಷ ತಿಳಿಸಿದೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್, ಜೂನ್ 3ರಂದು ಬೆಂಗಳೂರಿನ ಲೋಕಭವನದ ಗಾಜಿನ ಮನೆಯಲ್ಲಿ ನೂತನ ಮುಖ್ಯಮಂತ್ರಿಯ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ಹೇಳಿದರು. ಕಾರ್ಯಕ್ರಮದ ನಿಖರ ಸಮಯವನ್ನು ಇನ್ನೂ ಅಂತಿಮಗೊಳಿಸಿಲ್ಲ. ಶೀಘ್ರದಲ್ಲೇ ಅಧಿಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ತಿಳಿಸಿದರು.
ಪದಗ್ರಹಣ ಸಮಾರಂಭವನ್ನು ಸರಳ ಮತ್ತು ಸಾಂದರ್ಭಿಕವಾಗಿ ನಡೆಸಲು ಕಾಂಗ್ರೆಸ್ ತೀರ್ಮಾನಿಸಿದೆ. ಸಾರ್ವಜನಿಕರಿಗೆ ತೊಂದರೆಯಾಗದಂತೆ ಹಾಗೂ ಅನಗತ್ಯ ವೆಚ್ಚವನ್ನು ತಪ್ಪಿಸುವ ಉದ್ದೇಶದಿಂದ ದೊಡ್ಡ ಮಟ್ಟದ ಆಚರಣೆಗಳು ಮತ್ತು ಆಡಂಬರದ ಕಾರ್ಯಕ್ರಮಗಳನ್ನು ಕೈಬಿಡಲಾಗಿದೆ ಎಂದು ಪಕ್ಷದ ನಾಯಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.