
ಗದಗ, 30 ಮೇ (ಹಿ.ಸ.) :
ಆ್ಯಂಕರ್ : ಗದಗ ಜಿಲ್ಲೆಯಲ್ಲಿ ಮಟ್ಕಾ ಪ್ರಕರಣಗಳಲ್ಲಿ ಭಾಗಿಯಾಗುವವರ ಮೇಲೆ ಕಾನೂನು ರೀತಿಯಾಗಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ತಿಳಿಸಿದರು.
ಗದಗ ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ದಲ್ಲಿ 2025-26 ನೇ ಸಾಲಿನ ನಾಲ್ಕನೇ ತ್ರೈಮಾಸಿಕ (ಜನೇವರಿ 2026 ರಿಂದ ಮಾರ್ಚ್ 2026 ರವರೆಗೆ) ಪ್ಲೇಯಿಂಗ್ ಸ್ಕ್ಯಾಡ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮಟ್ಕಾ ಪ್ರಕರಣಗಳಲ್ಲಿ ಬಾಕಿ ಇರುವ ಪ್ರಕರಣಗಳು ವಿಚಾರಣೆ ಹಂತದಲ್ಲಿದ್ದು, ಅವುಗಳನ್ನು ಶೀಘ್ರ ಇತ್ಯರ್ಥಪಡಿಸಬೇಕು. ವಾಣಿಜ್ಯ ತೆರಿಗೆ ಇಲಾಖೆಯು ಜಿಎಸ್ಟಿ ಕಾಯ್ದೆಯಡಿ ಕಾರ್ಯನಿರ್ವಹಿಸುತ್ತಿದ್ದು ಗಡಿಪಾರು ಮಾಡಿರುವ ಆರೋಪಿತರ ಆರ್ಥಿಕ ಸ್ಥಿತಿಗತಿಯ ಬಗ್ಗೆ ಪರಿಶೀಲನೆ ನಡೆಸಿ ತಮ್ಮ ಕಾರ್ಯವ್ಯಾಪ್ತಿಯಡಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳು ವಾಣಿಜ್ಯ ತೆರಿಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಡಿವೈಎಸ್ಪಿ ಮಹಾಂತೇಶ ಸಜ್ಜನ ಅವರು ಮಾತನಾಡಿ ಜನೆವರಿ 2026 ರ ಮಾಹೆಯಲ್ಲಿ ಮುಂಡರಗಿ ಪೊಲೀಸ್ ಠಾಣೆ ವ್ಯಾಪ್ತಿಯ ಬಸವರಾಜ ತಂದೆ ಮೈಲಪ್ಪ ದೊಡ್ಡಮನಿ ಸಾ:ಡಂಬಳ, ವಯಸ್ಸು 21 ಇವರನ್ನು ವಿಜಯನಗರ ಜಿಲ್ಲೆ ಕೂಡ್ಲಿಗಿ ಪೋಲೀಸ್ ಠಾಣೆಗೆ ಮತ್ತು ಶಿರಹಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯ ವಿರುಪಾಕ್ಷಪ್ಪ ತಂದೆ ಶಂಕ್ರಪ್ಪ ಸಂಗಪ್ಪ ಶೆಟ್ಟರ, ಸಾ:ಶಿರಹಟ್ಟಿ ವಯಸ್ಸು 58 ಇವರನ್ನು ವಿಜಯನಗರ ಜಿಲ್ಲೆ ಕೊಟ್ಟೂರು ಪೋಲೀಸ್ ಠಾಣೆಗೆ ಗಡಿಪಾರು ಮಾಡಿ ಆದೇಶಿಸಿರುವ ಬಗ್ಗೆ ಸಭೆಗೆ ಮಾಹಿತಿ ಸಲ್ಲಿಸಿದರು ಹಾಗೂ ಮೂರಕ್ಕಿಂತ ಹೆಚ್ಚು ಮಟಕಾ ಪ್ರಕರಣಗಳಲ್ಲಿ ಭಾಗಿಯಾದ ಆರೋಪಿತರನ್ನು ಗಡಿಪಾರು ಶಿಕ್ಷೆಗೆ ಒಳಪಡಿಸುತ್ತಿರುವ ಹಿನ್ನೆಲೆಯಲ್ಲಿ ಮಟಕಾ ಪ್ರಕರಣಗಳು ಇಳಿಮುಖವಾಗುತ್ತಿವೆ ಎಂದು ತಿಳಿಸಿದರು.
ಸಭೆಯಲ್ಲಿ ಪಿಂಚಣಿ, ಸಣ್ಣ ಉಳಿತಾಯ ಮತ್ತು ಆಸ್ತಿ-ಋಣ ನಿರ್ವಹಣೆ ಇಲಾಖೆ ಸಹಾಯಕ ನಿರ್ದೇಶಕ ಶ್ರೀಧರ ಚಿನಗುಂಡಿ, ಅಭಿವೃದ್ಧಿ ಅಧಿಕಾರಿ ನಾಗರಾಜ ಉಪ್ಪಾರ, ವಾಣಿಜ್ಯ ತೆರಿಗೆ ಇಲಾಖೆ (ಜಾರಿ-2) ರಾಜಶೇಖರಯ್ಯ ಕಾಲವಾಡಮಠ ಸೇರಿದಂತೆ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
ಹಿಂದೂಸ್ತಾನ್ ಸಮಾಚಾರ್ / lalita MP