
ಬೆಂಗಳೂರು, 31 ಮೇ (ಹಿ.ಸ.) :
ಆ್ಯಂಕರ್ : ಬೆಂಗಳೂರಿನಲ್ಲಿ ‘ದಲಿತ ಸ್ವಾಭಿಮಾನಿ ಸೇವಾ ಸಮಿತಿ’ ವತಿಯಿಂದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಬಸವಣ್ಣ ಹಾಗೂ ಬಾಬು ಜಗಜೀವನ್ ರಾಮ್ ಅವರ ಜಯಂತಿ ಮಹೋತ್ಸವವನ್ನು ಅತ್ಯಂತ ಅದ್ದೂರಿಯಾಗಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಮಾಜಿ ಸಚಿವ ಆರ್.ಬಿ. ತಿಮ್ಮಾಪುರ ಭಾಗವಹಿಸಿ ಮಹನೀಯರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, ಸಮಾನತೆ, ಸಾಮಾಜಿಕ ನ್ಯಾಯ ಹಾಗೂ ಶೋಷಿತರ ಏಳಿಗೆಗಾಗಿ ಈ ಮೂವರು ಮಹಾನ್ ನಾಯಕರು ನೀಡಿರುವ ಕೊಡುಗೆಗಳು ದೇಶದ ಸಾಮಾಜಿಕ ವ್ಯವಸ್ಥೆಗೆ ಅಪಾರ ಮಾರ್ಗದರ್ಶನ ನೀಡಿವೆ ಎಂದು ಹೇಳಿದರು.
ಡಾ. ಅಂಬೇಡ್ಕರ್ ಅವರು ಸಾಮಾಜಿಕ ನ್ಯಾಯ ಮತ್ತು ಸಂವಿಧಾನಿಕ ಮೌಲ್ಯಗಳ ಮೂಲಕ ಶೋಷಿತ ವರ್ಗಗಳ ಸಬಲೀಕರಣಕ್ಕೆ ಶ್ರಮಿಸಿದರೆ, ಬಸವಣ್ಣ ಅವರು ಸಮಾನತೆ ಮತ್ತು ಮಾನವೀಯ ಮೌಲ್ಯಗಳ ಸಂದೇಶವನ್ನು ಸಮಾಜಕ್ಕೆ ನೀಡಿದರು. ಬಾಬು ಜಗಜೀವನ್ ರಾಮ್ ಅವರು ಹಿಂದುಳಿದ ಸಮುದಾಯಗಳ ಅಭಿವೃದ್ಧಿ ಮತ್ತು ಸಾಮಾಜಿಕ ಪ್ರಗತಿಗಾಗಿ ಮಹತ್ವದ ಸೇವೆ ಸಲ್ಲಿಸಿದ್ದಾರೆ ಎಂದು ತಿಮ್ಮಾಪುರ ಸ್ಮರಿಸಿದರು.
ಅವರ ಆದರ್ಶಗಳು ಹಾಗೂ ಆಶಯಗಳಂತೆ ಸರ್ವರಿಗೂ ಸಮಬಾಳು ಮತ್ತು ಸಮಪಾಲು ದೊರೆಯುವ ಸಮಾನತೆಯ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಬದ್ಧರಾಗಬೇಕು ಎಂದು ಕರೆ ನೀಡಿದರು.
ಹಿಂದೂಸ್ತಾನ್ ಸಮಾಚಾರ್ / Rakesh.M.B.