
ದಾಂಡೇಲಿ, 31 ಮೇ (ಹಿ.ಸ.) :
ಆ್ಯಂಕರ್ : ಹುಬ್ಬಳ್ಳಿ–ಧಾರವಾಡ ಮಹಾನಗರ ಜಿಲ್ಲಾ ಬಿಜೆಪಿ ವತಿಯಿಂದ ಆಯೋಜಿಸಲಾದ ಪಂಡಿತ್ ದೀನದಯಾಳ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಚಾಲನೆ ನೀಡಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಅಭಿವೃದ್ಧಿ ಮತ್ತು ಸುಶಾಸನದ ಸಂಕಲ್ಪವನ್ನು ಮನೆಮನೆಗೂ ತಲುಪಿಸುವ ಅಗತ್ಯವಿದೆ ಎಂದು ಹೇಳಿದರು. ಪಕ್ಷದ ಸಿದ್ಧಾಂತಗಳು, ತತ್ವಗಳು ಮತ್ತು ಜನಪರ ಯೋಜನೆಗಳನ್ನು ಸಾಮಾನ್ಯ ಜನರಿಗೆ ಪರಿಣಾಮಕಾರಿಯಾಗಿ ತಲುಪಿಸುವುದರ ಜೊತೆಗೆ ಸಂಘಟನಾ ಬಲವರ್ಧನೆಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಕರೆ ನೀಡಿದರು.
ಬಿಜೆಪಿಯ ಕಾರ್ಯಕರ್ತರು ಜನರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಕೇಂದ್ರ ಸರ್ಕಾರದ ಸಾಧನೆಗಳು ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು ವ್ಯಾಪಕ ಜಾಗೃತಿ ಮೂಡಿಸಬೇಕೆಂದು ಅವರು ತಿಳಿಸಿದರು. ಪಕ್ಷವನ್ನು ಮತ್ತಷ್ಟು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಪ್ರಶಿಕ್ಷಣ ಕಾರ್ಯಕ್ರಮಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಪ್ರಚಾರಕರಾದ ಸು. ರಾಮಣ್ಣ ಅವರು “ನಮ್ಮ ಸಿದ್ಧಾಂತ” ವಿಷಯದ ಕುರಿತು ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡಿದರು. ಪಕ್ಷದ ತತ್ವ, ಸಂಘಟನಾ ಮೌಲ್ಯಗಳು ಹಾಗೂ ರಾಷ್ಟ್ರ ನಿರ್ಮಾಣದಲ್ಲಿ ಕಾರ್ಯಕರ್ತರ ಪಾತ್ರದ ಕುರಿತು ಅವರು ವಿವರಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ಅರವಿಂದ ಬೆಲ್ಲದ್ ಹಾಗೂ ಮಹೇಶ್ ಟೆಂಗಿನಕಾಯಿ, ಮಹಾನಗರ ಪಾಲಿಕೆಯ ಮಹಾಪೌರರಾದ ಜ್ಯೋತಿ ಪಾಟೀಲ, ಉಪಮಹಾಪೌರ ಸಂತೋಷ ಚವ್ಹಾಣ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್, ಬಿಜೆಪಿ ಜಿಲ್ಲಾಧ್ಯಕ್ಷ ತಿಪ್ಪಣ್ಣ ಮಜ್ಜಗಿ, ಉತ್ತರ ಕನ್ನಡ ಜಿಲ್ಲಾ ಅಧ್ಯಕ್ಷ ಎನ್.ಎಸ್. ಹೆಗಡೆ ಸೇರಿದಂತೆ ಹಲವು ಗಣ್ಯರು, ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh.M.B.