
ಕೋಲ್ಕತ್ತಾ, 06 ಮೇ (ಹಿ.ಸ.) :
ಆ್ಯಂಕರ್ : ಪಶ್ಚಿಮ ಬಂಗಾಳದಲ್ಲಿ ವಿಧಾನ ಸಭಾ ಚುನಾವಣೆಯ ಫಲಿತಾಂಶಗಳ ಬಳಿಕ ಉಂಟಾಗಿರುವ ಹಿಂಸಾಚಾರ ಮತ್ತು ವಿಧ್ವಂಸಕ ಘಟನೆಗಳ ಹಿನ್ನೆಲೆದಲ್ಲಿ ಕೇಂದ್ರ ಚುನಾವಣಾ ಆಯೋಗ ಕಠಿಣ ಕ್ರಮಕ್ಕೆ ಸೂಚನೆ ನೀಡಿದೆ.
ಹಿಂಸಾಚಾರದಲ್ಲಿ ಭಾಗಿಯಾಗಿರುವವರ ವಿರುದ್ಧ ಯಾವುದೇ ರೀತಿಯ ಸಡಿಲಿಕೆ ಇಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ತಿಳಿಸಿದ್ದಾರೆ.
ಕೋಲ್ಕತ್ತಾದ ನ್ಯೂಟೌನ್ ಪ್ರದೇಶದಲ್ಲಿ ಮಂಗಳವಾರ ಬಿಜೆಪಿ ಕಾರ್ಯಕರ್ತ ಮಧು ಮೊಂಡಲ್ ಅವರನ್ನು ಥಳಿಸಿ ಹತ್ಯೆ ಮಾಡಿರುವ ಘಟನೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಘಟನೆಗೆ ಸಂಬಂಧಿಸಿದಂತೆ ಕುಟುಂಬ ಸದಸ್ಯರು ಹಾಗೂ ಸ್ಥಳೀಯರು ಪ್ರತಿಭಟನೆ ನಡೆಸಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ.
ಚುನಾವಣಾ ಫಲಿತಾಂಶಗಳ ಘೋಷಣೆಯ ನಂತರ ರಾಜ್ಯದ ವಿವಿಧ ಭಾಗಗಳಿಂದ ಹಿಂಸಾಚಾರ ಮತ್ತು ಆಸ್ತಿ ಹಾನಿ ಪ್ರಕರಣಗಳ ವರದಿಗಳು ಬರುತ್ತಿರುವುದಾಗಿ ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತರು ರಾಜ್ಯದ ಮುಖ್ಯ ಕಾರ್ಯದರ್ಶಿ, ಪೊಲೀಸ್ ಮಹಾನಿರ್ದೇಶಕ, ಕೋಲ್ಕತ್ತಾ ಪೊಲೀಸ್ ಆಯುಕ್ತರು ಮತ್ತು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ ಹಿರಿಯ ಅಧಿಕಾರಿಗಳಿಗೆ ತಕ್ಷಣವೇ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಿದ್ದಾರೆ.
ಜಿಲ್ಲಾ ಮಟ್ಟದಲ್ಲಿ ಎಲ್ಲಾ ಮ್ಯಾಜಿಸ್ಟ್ರೇಟ್ಗಳು ಮತ್ತು ಪೊಲೀಸ್ ಅಧಿಕಾರಿಗಳಿಗೆ ನಿರಂತರ ಗಸ್ತು ತಿರುಗುವಂತೆ ಹಾಗೂ ಪರಿಸ್ಥಿತಿಯ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸುವಂತೆ ಸೂಚಿಸಲಾಗಿದೆ. ಮತದಾನದ ನಂತರದ ಹಿಂಸಾಚಾರಕ್ಕೆ ‘ಶೂನ್ಯ ಸಹಿಷ್ಣುತೆ’ ನೀತಿಯನ್ನು ಅನುಸರಿಸಲಾಗುವುದು ಎಂದು ಆಯೋಗ ಸ್ಪಷ್ಟಪಡಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa