ಚಂದ್ರನಾಥ್ ರಥ್ ಹತ್ಯೆ ಪೂರ್ವ ಯೋಜಿತ : ಸುವೇಂದು ಅಧಿಕಾರಿ
ಕೋಲ್ಕತ್ತಾ, 07 ಮೇ (ಹಿ.ಸ.) : ಆ್ಯಂಕರ್ : ಹಿರಿಯ ಬಿಜೆಪಿ ನಾಯಕ ಹಾಗೂ ವಿಧಾನ ಸಭೆಯ ಪ್ರತಿಪಕ್ಷದ ನಾಯಕ ಸುವೇಂದು ಅಧಿಕಾರಿ ಅವರ ವೈಯಕ್ತಿಕ ಸಹಾಯಕ ಚಂದ್ರನಾಥ್ ರಥ್ ಹತ್ಯೆ ಪ್ರಕರಣ ಪಶ್ಚಿಮ ಬಂಗಾಳ ರಾಜಕೀಯದಲ್ಲಿ ತೀವ್ರ ಸಂಚಲನಕ್ಕೆ ಕಾರಣವಾಗಿದೆ. ಈ ಹತ್ಯೆ ಪೂರ್ವ ಯೋಜಿತ ಸಂಚು ಎಂದು ಸುವೇಂದು ಅಧಿಕಾರಿ
ಸುವೇಂದು ಅಧಿಕಾರಿ


ಕೋಲ್ಕತ್ತಾ, 07 ಮೇ (ಹಿ.ಸ.) :

ಆ್ಯಂಕರ್ : ಹಿರಿಯ ಬಿಜೆಪಿ ನಾಯಕ ಹಾಗೂ ವಿಧಾನ ಸಭೆಯ ಪ್ರತಿಪಕ್ಷದ ನಾಯಕ ಸುವೇಂದು ಅಧಿಕಾರಿ ಅವರ ವೈಯಕ್ತಿಕ ಸಹಾಯಕ ಚಂದ್ರನಾಥ್ ರಥ್ ಹತ್ಯೆ ಪ್ರಕರಣ ಪಶ್ಚಿಮ ಬಂಗಾಳ ರಾಜಕೀಯದಲ್ಲಿ ತೀವ್ರ ಸಂಚಲನಕ್ಕೆ ಕಾರಣವಾಗಿದೆ. ಈ ಹತ್ಯೆ ಪೂರ್ವ ಯೋಜಿತ ಸಂಚು ಎಂದು ಸುವೇಂದು ಅಧಿಕಾರಿ ಆರೋಪಿಸಿದ್ದು, ಪಕ್ಷದ ಕಾರ್ಯಕರ್ತರು ಯಾವುದೇ ಪ್ರಚೋದನೆಗೆ ಒಳಗಾಗದೆ ಶಾಂತಿ ಮತ್ತು ಸಂಯಮ ಕಾಪಾಡಿಕೊಳ್ಳುವಂತೆ ಮನವಿ ಮಾಡಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸುವೇಂದು ಅಧಿಕಾರಿ, “ನನ್ನ ವೈಯಕ್ತಿಕ ಸಹಾಯಕ ಚಂದ್ರನಾಥ್ ರಥ್ ಅವರನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡಲಾಗಿದೆ. ಇದು ಸಾಮಾನ್ಯ ಅಪರಾಧವಲ್ಲ. ಪೂರ್ವಭಾವಿಯಾಗಿ ರೂಪಿಸಲಾದ ಸಂಚಿನ ಭಾಗವಾಗಿದೆ” ಎಂದು ಹೇಳಿದರು. ಮೃತ ರಥ್ ಅವರ ಕುಟುಂಬದ ಸಂಪೂರ್ಣ ಜವಾಬ್ದಾರಿಯನ್ನು ಬಿಜೆಪಿ ತಂಡವೇ ವಹಿಸಿಕೊಳ್ಳಲಿದ್ದು, ಗಾಯಗೊಂಡಿರುವ ಚಾಲಕರ ಚಿಕಿತ್ಸೆಯ ವೆಚ್ಚವನ್ನೂ ಭರಿಸಲಾಗುವುದು ಎಂದು ಭರವಸೆ ನೀಡಿದರು.

ಈ ಪ್ರಕರಣಕ್ಕೆ ರಾಜಕೀಯ ಹಿನ್ನೆಲೆ ಇರಬಹುದೆಂಬ ಅನುಮಾನ ವ್ಯಕ್ತಪಡಿಸಿದ ಅವರು, ತನಿಖೆ ನಡೆಯುತ್ತಿರುವ ಕಾರಣ ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಲು ಇಚ್ಛಿಸಿಲ್ಲ ಎಂದರು. ರಾಜ್ಯ ಪೊಲೀಸ್ ಮಹಾನಿರ್ದೇಶಕ ಸಿದ್ಧನಾಥ್ ಗುಪ್ತಾ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿರುವುದಾಗಿ ತಿಳಿಸಿದ ಸುವೇಂದು, ಪೊಲೀಸರು ಪ್ರಕರಣದ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಿದರು.

ಈ ವೇಳೆ ಪಕ್ಷದ ಕಾರ್ಯಕರ್ತರು ಹಾಗೂ ಬೆಂಬಲಿಗರಿಗೆ ವಿಶೇಷ ಮನವಿ ಮಾಡಿದ ಅವರು, “ಯಾವುದೇ ಕಾರಣಕ್ಕೂ ಕಾನೂನನ್ನು ಕೈಗೆತ್ತಿಕೊಳ್ಳಬೇಡಿ. ಶಾಂತಿ ಕಾಪಾಡಿ, ಪೊಲೀಸರ ತನಿಖೆಗೆ ಸಹಕರಿಸಿ” ಎಂದು ಕರೆ ನೀಡಿದರು.

ಮಧ್ಯರಾತ್ರಿ ನಡೆದ ಗುಂಡಿನ ದಾಳಿ

ಬುಧವಾರ ರಾತ್ರಿ ಸುಮಾರು 11.15ರ ವೇಳೆಗೆ ಚಂದ್ರನಾಥ್ ರಥ್ ತಮ್ಮ ಕಾರಿನಲ್ಲಿ ಮಧ್ಯಮಗ್ರಾಮ್ ಪ್ರದೇಶದ ಮೂಲಕ ಪ್ರಯಾಣಿಸುತ್ತಿದ್ದರು. ಅವರೊಂದಿಗೆ ಚಾಲಕ ಬುದ್ಧದೇವ್ ಬೇಡಾ ಕೂಡ ಇದ್ದರು. ಇದೇ ವೇಳೆ ಬೈಕ್ನಲ್ಲಿ ಬಂದಿದ್ದ ಕೆಲ ಅಪರಿಚಿತ ದುಷ್ಕರ್ಮಿಗಳು ಕಾರನ್ನು ಅಡ್ಡಗಟ್ಟಿ ನಿಲ್ಲಿಸಿದ್ದಾರೆ. ಕಾರು ನಿಂತ ತಕ್ಷಣವೇ ಹತ್ತಿರದಿಂದ ಗುಂಡಿನ ದಾಳಿ ನಡೆಸಲಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ದಾಳಿಯಲ್ಲಿ ಚಂದ್ರನಾಥ್ ರಥ್ ಎದೆಯಲ್ಲಿ ಹಲವು ಗುಂಡೇಟುಗಳು ತಗುಲಿದ್ದು, ಗಂಭೀರ ಸ್ಥಿತಿಯಲ್ಲಿ ಅವರನ್ನು ಸಮೀಪದ ವಿವಾ ಸಿಟಿ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದರು. ಚಾಲಕ ಬುದ್ಧದೇವ್ ಬೇಡಾ ಕೂಡ ಗುಂಡೇಟಿಗೆ ಒಳಗಾಗಿದ್ದು, ಗಂಭೀರ ಸ್ಥಿತಿಯಲ್ಲಿ ಕೋಲ್ಕತ್ತಾದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆಸ್ಪತ್ರೆಗೆ ಧಾವಿಸಿದ ಬಿಜೆಪಿ ನಾಯಕರು

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸುವೇಂದು ಅಧಿಕಾರಿ ಸೇರಿದಂತೆ ಹಲವು ಬಿಜೆಪಿ ನಾಯಕರು ತಡರಾತ್ರಿ ಆಸ್ಪತ್ರೆಗೆ ಭೇಟಿ ನೀಡಿದರು. ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ ಸುಕಾಂತ ಮಜುಂದಾರ್, ಸಂಸದ ಅರ್ಜುನ್ ಸಿಂಗ್ ಸೇರಿದಂತೆ ಪಕ್ಷದ ಹಿರಿಯ ನಾಯಕರು ಮೃತರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

ರಾಜ್ಯ ಪೊಲೀಸ್ ಮಹಾನಿರ್ದೇಶಕ ಸಿದ್ಧನಾಥ್ ಗುಪ್ತಾ ಕೂಡ ಘಟನಾ ಸ್ಥಳಕ್ಕೆ ಭೇಟಿ ನೀಡಿ ಹಿರಿಯ ಪೊಲೀಸ್ ಅಧಿಕಾರಿಗಳಿಂದ ವರದಿ ಪಡೆದರು. ಪ್ರದೇಶದಲ್ಲಿ ಭಾರೀ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಆರೋಪಿಗಳ ಪತ್ತೆಗೆ ವಿಶೇಷ ಶೋಧ ಕಾರ್ಯ ಮುಂದುವರಿದಿದೆ.

ರಾಜಕೀಯ ಆರೋಪ-ಪ್ರತ್ಯಾರೋಪ ತೀವ್ರ

ಈ ದಾಳಿಯ ಹಿಂದೆ ತೃಣಮೂಲ ಕಾಂಗ್ರೆಸ್ ಕೈವಾಡವಿದೆ ಎಂದು ಬಿಜೆಪಿ ಬೆಂಬಲಿಗರು ಆರೋಪಿಸಿದ್ದಾರೆ. ಆದರೆ ತೃಣಮೂಲ ಕಾಂಗ್ರೆಸ್ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದು, ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆ ನಡೆಸುವಂತೆ ಒತ್ತಾಯಿಸಿದೆ.

“ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ರಾಜಕೀಯ ಹಿಂಸಾಚಾರಕ್ಕೆ ಯಾವುದೇ ಸ್ಥಾನವಿಲ್ಲ. ತಪ್ಪಿತಸ್ಥರನ್ನು ಶೀಘ್ರವೇ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು” ಎಂದು ತೃಣಮೂಲ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಪ್ರಕಟಣೆಯಲ್ಲಿ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande