ರಾಜ್ಯದಲ್ಲಿ ಅನ್ನದಾತನ ಹೆಣದ ಮೇಲೆ ಗ್ಯಾರಂಟಿ ರಾಜಕೀಯ : ಅಶೋಕ ಆಕ್ರೋಶ
ಬೆಂಗಳೂರು, 08 ಮೇ (ಹಿ.ಸ.) : ಆ್ಯಂಕರ್ : ರೈತರ ಆತ್ಮಹತ್ಯೆ ಪ್ರಕರಣಗಳ ಹೆಚ್ಚಳ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ವಿಧಾನ ಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ್ರಕಟಿಸಿರುವ ಹೇಳಿಕೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ
Ashok


ಬೆಂಗಳೂರು, 08 ಮೇ (ಹಿ.ಸ.) :

ಆ್ಯಂಕರ್ : ರೈತರ ಆತ್ಮಹತ್ಯೆ ಪ್ರಕರಣಗಳ ಹೆಚ್ಚಳ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ವಿಧಾನ ಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ್ರಕಟಿಸಿರುವ ಹೇಳಿಕೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ರೈತ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ ಎಂದು ಆರೋಪಿಸಿದ್ದಾರೆ.

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್ಸಿಆರ್ಬಿ) ವರದಿ ರಾಜ್ಯ ಸರ್ಕಾರದ ವೈಫಲ್ಯಕ್ಕೆ ಕನ್ನಡಿ ಹಿಡಿದಂತಿದೆ ಎಂದು ಹೇಳಿರುವ ಅಶೋಕ, ದೇಶದ ಅನೇಕ ರಾಜ್ಯಗಳಲ್ಲಿ ರೈತರ ಆತ್ಮಹತ್ಯೆ ಪ್ರಮಾಣ ಕಡಿಮೆಯಾಗುತ್ತಿರುವ ಸಂದರ್ಭದಲ್ಲಿ ಕರ್ನಾಟಕದಲ್ಲಿ ಮಾತ್ರ ಶೇ.22.61ರಷ್ಟು ಏರಿಕೆಯಾಗಿದೆ ಎಂದು ಪ್ರಶ್ನಿಸಿದ್ದಾರೆ.

ಒಂದು ವರ್ಷದಲ್ಲೇ ರೈತರ ಆತ್ಮಹತ್ಯೆ ಸಂಖ್ಯೆ 2,423ರಿಂದ 2,971ಕ್ಕೆ ಏರಿಕೆಯಾಗಿದೆ ಎಂದು ಉಲ್ಲೇಖಿಸಿರುವ ಅವರು, ರೈತರ ಸಾವಿನ ಸಂಖ್ಯೆಯಲ್ಲಿ ಕರ್ನಾಟಕ ದೇಶದಲ್ಲೇ ಎರಡನೇ ಸ್ಥಾನದಲ್ಲಿರುವುದು ರಾಜ್ಯ ಸರ್ಕಾರದ ಆಡಳಿತ ವೈಫಲ್ಯವನ್ನು ತೋರಿಸುತ್ತದೆ ಎಂದು ಟೀಕಿಸಿದ್ದಾರೆ.

ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ವೆಚ್ಚ ಮಾಡಿ ಜಾಹೀರಾತು ನೀಡಲಾಗುತ್ತಿದೆ. ಆದರೆ ಮತ್ತೊಂದೆಡೆ ಬೆಳೆ ನಷ್ಟ, ಸಾಲದ ಬಾಧೆ, ವಿದ್ಯುತ್ ದರ ಏರಿಕೆ ಹಾಗೂ ನೀರಿನ ಸಮಸ್ಯೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿದ್ದಾರೆ.

“ರೈತನಿಗೆ ಬೆಳೆಗೂ ಬೆಲೆ ಇಲ್ಲ, ರೈತನ ಜೀವಕ್ಕೂ ಬೆಲೆ ಇಲ್ಲ. ಇದೇನಾ ಜನಪರ ಸರ್ಕಾರ?” ಎಂದು ಪ್ರಶ್ನಿಸಿರುವ ಅಶೋಕ, ಅನ್ನದಾತನ ಕಣ್ಣೀರಿನ ಮೇಲೆ ರಾಜಕೀಯ ಹೆಚ್ಚು ದಿನ ಉಳಿಯುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ರೈತರ ಸಮಸ್ಯೆಗಳಿಗೆ ಸರ್ಕಾರ ತಕ್ಷಣ ಸ್ಪಂದಿಸಿ, ಬೆಳೆ ನಷ್ಟ ಪರಿಹಾರ, ಸಾಲ ಸೌಲಭ್ಯ ಹಾಗೂ ಸಮರ್ಪಕ ಬೆಂಬಲ ಬೆಲೆ ಒದಗಿಸುವ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande