ಪ್ರಧಾನಿ ಮೋದಿ 12 ವರ್ಷಗಳ ಆಡಳಿತ ಪೂರ್ಣ ; ರಾಜ್ಯಾದ್ಯಂತ ವಿಶೇಷ ಪೂಜೆ
ನಾನಾ
PM-12Years-Special-pooja


ಬೆಂಗಳೂರು, 10 ಜೂನ್ (ಹಿ.ಸ.) :

ಆ್ಯಂಕರ್ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದೇಶದ ಆಡಳಿತದ ಚುಕ್ಕಾಣಿ ಹಿಡಿದು 12 ವರ್ಷಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ರಾಜ್ಯದ ನಾನಾ ಭಾಗಗಳಲ್ಲಿ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ವಿಶೇಷ ಪೂಜೆ, ಪ್ರಾರ್ಥನೆಗಳನ್ನು ನಡೆಸಿ ಸಂಭ್ರಮಾಚರಣೆ ಮಾಡಿದರು.

ಬೆಂಗಳೂರಿನ ವಿಜಯನಗರದ ಆರ್ಪಿಸಿ ಲೇಔಟ್ನಲ್ಲಿರುವ ಸಂಕಷ್ಟಹರ ಗಣಪತಿ ದೇವಸ್ಥಾನದಲ್ಲಿ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ವಿಶೇಷ ಪೂಜೆ ಸಲ್ಲಿಸಿದರು. ಪ್ರಧಾನಿ ಮೋದಿ ಅವರ ಆರೋಗ್ಯ, ಆಯುಷ್ಯ ವೃದ್ಧಿ ಹಾಗೂ ದೇಶದ ಸಮೃದ್ಧಿಗಾಗಿ ಪ್ರಾರ್ಥನೆ ಸಲ್ಲಿಸಿದ ಅವರು, ವಿಜಯನಗರ ಮತ್ತು ಗೋವಿಂದರಾಜನಗರ ಕ್ಷೇತ್ರಗಳ ನೂರಾರು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಂಭ್ರಮದಲ್ಲಿ ಭಾಗವಹಿಸಿದರು.

ಪೂಜೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ವಿ. ಸೋಮಣ್ಣ, ಪ್ರಧಾನಿ ಮೋದಿ ಅವರ ದೂರದೃಷ್ಟಿಯ ನಾಯಕತ್ವವನ್ನು ಶ್ಲಾಘಿಸಿದರು.

ಇದೇ ವೇಳೆ ವಿಧಾನಸೌಧದ ಅರಳಿಕಟ್ಟೆ ಮುನೇಶ್ವರ ದೇವಾಲಯದಲ್ಲಿ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು ಪ್ರಧಾನಿ ಮೋದಿ ಅವರ ಒಳಿತಿಗಾಗಿ ವಿಶೇಷ ಪೂಜೆ ಸಲ್ಲಿಸಿದರು. ಶಾಸಕ ಚನ್ನಬಸಪ್ಪ ಸೇರಿದಂತೆ ಹಲವು ಬಿಜೆಪಿ ನಾಯಕರು ಮತ್ತು ಬೆಂಬಲಿಗರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರ ದಾಖಲೆಯನ್ನು ಪ್ರಧಾನಿ ಮೋದಿ ಮೀರಿರುವ ಹಿನ್ನೆಲೆಯಲ್ಲಿ ಈ ಪೂಜೆಯನ್ನು ಆಯೋಜಿಸಲಾಗಿತ್ತು. ದೇವರ ಸನ್ನಿಧಿಯಲ್ಲಿ ಪ್ರಧಾನಿ ಮೋದಿ ಅವರ ಭಾವಚಿತ್ರ ಇಟ್ಟು ಪೂಜೆ ನೆರವೇರಿಸಲಾಯಿತು. ಈ ವೇಳೆ ಮೋದಿ ಪರ ಜಯಘೋಷಗಳು ಮೊಳಗಿದವು.

ಇನ್ನು ರಾಜ್ಯ ಉಸ್ತುವಾರಿಗಳಾದ ಡಾ. ರಾಧಾಮೋಹನದಾಸ ಅಗರವಾಲ ಮತ್ತು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಶೇಷಾದ್ರಿಪುರಂನಲ್ಲಿರುವ ಶ್ರೀ ರಾಮಲಿಂಗೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪ್ರಧಾನಿ ಮೋದಿ ಅವರ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಸಾರ್ವಜನಿಕರಿಗೆ ಸಿಹಿ ವಿತರಿಸಿದರು.

ಗದಗ ನಗರದ ಶ್ರೀ ವೀರನಾರಾಯಣ ದೇವಸ್ಥಾನದಲ್ಲಿಯೂ ಭಾರತೀಯ ಜನತಾ ಪಕ್ಷದ ವತಿಯಿಂದ ವಿಶೇಷ ಪೂಜೆ ನಡೆಯಿತು. ದೇಶದ ಅತಿ ದೀರ್ಘಾವಧಿ ಚುನಾಯಿತ ಪ್ರಧಾನಿಯಾಗಿ 4,399 ದಿನಗಳ ಆಡಳಿತದ ಐತಿಹಾಸಿಕ ಮೈಲುಗಲ್ಲು ಸಾಧಿಸಿರುವ ಪ್ರಧಾನಿ ಮೋದಿ ಅವರ ಸಾಧನೆಯನ್ನು ಸ್ಮರಿಸಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಈ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶಾಸಕ ಸಿ.ಸಿ. ಪಾಟೀಲ್, ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಬಿಜೆಪಿ ಜಿಲ್ಲಾಧ್ಯಕ್ಷ ರಾಜು ಕುರಡಗಿ ಸೇರಿದಂತೆ ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 12 ವರ್ಷಗಳ ಆಡಳಿತ ಪೂರ್ಣಗೊಳಿಸಿದ ಐತಿಹಾಸಿಕ ಸಂದರ್ಭದಲ್ಲಿ ರಾಜ್ಯದ ನಾನಾ ದೇವಾಲಯಗಳಲ್ಲಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿ, ಅವರ ಆರೋಗ್ಯ, ದೀರ್ಘಾಯುಷ್ಯ ಹಾಗೂ ದೇಶದ ಅಭಿವೃದ್ಧಿಗಾಗಿ ಪ್ರಾರ್ಥನೆ ನಡೆಸಿದರು. ಮೋದಿ ಅವರ ನಾಯಕತ್ವದಲ್ಲಿ ಭಾರತ ಇನ್ನಷ್ಟು ಅಭಿವೃದ್ಧಿ, ಸಮೃದ್ಧಿ ಮತ್ತು ಜಾಗತಿಕ ಪ್ರಗತಿಯ ಹೊಸ ಶಿಖರಗಳನ್ನು ತಲುಪಲಿ ಎಂದು ಹಾರೈಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande