
ವಿಜಯಪುರ, 11 ಜೂನ್ (ಹಿ.ಸ.) :
ಆಂಕರ್ : ವಿಜಯಪುರ ನಗರದ ಹರಣಶಿಕಾರಿ ಕಾಲೋನಿಯಲ್ಲಿ ಅಕ್ರಮವಾಗಿ ಕಳ್ಳಬಟ್ಟಿ ತಯಾರಿಸುತ್ತಿದ್ದ ಅಡ್ಡೆ ಮೇಲೆ ಗೋಲಗುಂಬಜ್ ಪೊಲೀಸ್ ಠಾಣೆಯ ಪೊಲೀಸರು ದಾಳಿ ನಡೆಸಿ, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ನಗರದಲ್ಲಿ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಗೋಲಗುಂಬಜ್ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಖಚಿತ ಮಾಹಿತಿಯ ಮೇರೆಗೆ ಹರಣಶಿಕಾರಿ ಕಾಲೋನಿಯಲ್ಲಿದ್ದ ಕಳ್ಳಬಟ್ಟಿ ತಯಾರಿ ಘಟಕದ ಮೇಲೆ ದಾಳಿ ನಡೆಸಿದರು.
ದಾಳಿಯ ವೇಳೆ ಕಳ್ಳಬಟ್ಟಿ ತಯಾರಿಸಲು ಬಳಸುತ್ತಿದ್ದ ಸಾಮಗ್ರಿಗಳು ಹಾಗೂ ತಯಾರಿಸಿದ ಅಕ್ರಮ ಮದ್ಯವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸ್ಥಳದಲ್ಲಿದ್ದ ಮೂವರು ಆರೋಪಿಗಳನ್ನು ಬಂಧಿಸಿ, ಅವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಅಕ್ರಮ ಮದ್ಯ ತಯಾರಿಕೆ ಮತ್ತು ಮಾರಾಟದಿಂದ ಸಾರ್ವಜನಿಕರ ಆರೋಗ್ಯ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಹಿನ್ನೆಲೆಯಲ್ಲಿ ಪೊಲೀಸರು ನಿರಂತರ ನಿಗಾ ವಹಿಸಿದ್ದು, ಇಂತಹ ಚಟುವಟಿಕೆಗಳಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಗೋಲಗುಂಬಜ್ ಪೊಲೀಸ್ ಠಾಣೆಯ ಸಿಬ್ಬಂದಿ ಭಾಗವಹಿಸಿದ್ದರು. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರೆದಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande