
ನವದೆಹಲಿ, 12 ಜೂನ್ (ಹಿ.ಸ.):
ಆ್ಯಂಕರ್:
ಕರ್ನಾಟಕ ರಾಜ್ಯದ ಭದ್ರತಾ ಮೂಲಸೌಕರ್ಯವನ್ನು ಮತ್ತಷ್ಟು ಬಲಪಡಿಸಲು ಹಾಗೂ ಪೊಲೀಸ್ ಇಲಾಖೆಯ ಕಾರ್ಯಕ್ಷಮತೆಯನ್ನು ಹೆಚ್ಚಿಸಲು ಅಗತ್ಯ ನೆರವು ಒದಗಿಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮನವಿ ಸಲ್ಲಿಸಿದ್ದಾರೆ.
ದೆಹಲಿಯಲ್ಲಿ ಕೇಂದ್ರ ಗೃಹ ಸಚಿವರೊಂದಿಗೆ ನಡೆದ ಸಮಾಲೋಚನಾ ಸಭೆಯಲ್ಲಿ ಮುಖ್ಯಮಂತ್ರಿ ಅವರು ಪೊಲೀಸ್ ಇಲಾಖೆಯ ಆಧುನೀಕರಣ, ಹೆಚ್ಚುವರಿ ಇಂಡಿಯಾ ರಿಸರ್ವ್ ಬೆಟಾಲಿಯನ್ಗಳ ಸ್ಥಾಪನೆ, ಕಾರಾಗೃಹಗಳ ಅಭಿವೃದ್ಧಿ, ಸೈಬರ್ ಅಪರಾಧ ನಿಯಂತ್ರಣ ಹಾಗೂ ಪೊಲೀಸ್ ತರಬೇತಿ ಸಂಸ್ಥೆಗಳ ಮೂಲಸೌಕರ್ಯ ಸುಧಾರಣೆ ಸೇರಿದಂತೆ ಹಲವು ಮಹತ್ವದ ಪ್ರಸ್ತಾವನೆಗಳನ್ನು ಮಂಡಿಸಿದರು.
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಗೆ ರಾಷ್ಟ್ರಪತಿಗಳ ಅತ್ಯುನ್ನತ ಗೌರವವಾದ ‘ಪ್ರೆಸಿಡೆಂಟ್ಸ್ ಕಲರ್’ ಪ್ರಶಸ್ತಿ ನೀಡುವ ಕುರಿತ ಪ್ರಸ್ತಾವನೆ ಕೇಂದ್ರ ಸರ್ಕಾರದ ಪರಿಶೀಲನೆಯಲ್ಲಿದ್ದು, ಅದನ್ನು ಶೀಘ್ರ ಅನುಮೋದಿಸುವಂತೆ ಮುಖ್ಯಮಂತ್ರಿ ಮನವಿ ಮಾಡಿದರು. ರಾಜ್ಯ ಪೊಲೀಸ್ ಇಲಾಖೆಯು ಈ ಪ್ರತಿಷ್ಠಿತ ಗೌರವವನ್ನು ಇನ್ನೂ ಪಡೆದಿಲ್ಲ ಎಂಬುದನ್ನು ಅವರು ಉಲ್ಲೇಖಿಸಿದರು.
ವಿಜಯನಗರ ಹಾಗೂ ರಾಮನಗರ ಜಿಲ್ಲೆಗಳಲ್ಲಿ ಎರಡು ಹೆಚ್ಚುವರಿ ಇಂಡಿಯಾ ರಿಸರ್ವ್ ಬೆಟಾಲಿಯನ್ಗಳನ್ನು ಸ್ಥಾಪಿಸಲು 243.87 ಕೋಟಿ ರೂ.ಗಳ ವೆಚ್ಚದ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿದ್ದು, ಅದಕ್ಕೆ ತ್ವರಿತ ಮಂಜೂರಾತಿ ನೀಡುವಂತೆ ಕೋರಿದರು. ರಾಜ್ಯದಲ್ಲಿ ಹೆಚ್ಚುತ್ತಿರುವ ಭದ್ರತಾ ಅಗತ್ಯತೆಗಳನ್ನು ಗಮನದಲ್ಲಿಟ್ಟುಕೊಂಡು ಈ ಬೆಟಾಲಿಯನ್ಗಳ ಸ್ಥಾಪನೆ ಅಗತ್ಯವಾಗಿದೆ ಎಂದು ತಿಳಿಸಿದರು.
ಪೊಲೀಸ್ ವ್ಯವಸ್ಥೆ ಆಧುನೀಕರಣ ಯೋಜನೆಯಡಿ ನಾಲ್ಕು ಪ್ರಮುಖ ನಗರಗಳಲ್ಲಿ ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್ಗಳನ್ನು ಸ್ಥಾಪಿಸುವ ಹಾಗೂ ಸುಧಾರಿತ ಸಂವಹನ ವ್ಯವಸ್ಥೆಗಳನ್ನು ಅಳವಡಿಸುವ ಉದ್ದೇಶದಿಂದ 280 ಕೋಟಿ ರೂ.ಗಳ ಯೋಜನೆಗೆ ಅನುಮೋದನೆ ನೀಡುವಂತೆ ಮನವಿ ಮಾಡಲಾಯಿತು.
ಪೊಲೀಸ್ ಇಲಾಖೆಯ ಅಭಿವೃದ್ಧಿ ಹಾಗೂ ಸಾರ್ವಜನಿಕ ಭದ್ರತಾ ಚಟುವಟಿಕೆಗಳಿಗೆ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (ಸಿಎಸ್ಆರ್) ನಿಧಿಯನ್ನು ಬಳಸಲು ಅವಕಾಶ ಕಲ್ಪಿಸುವಂತೆ ಕಂಪನಿಗಳ ಕಾಯ್ದೆಯ ಶೆಡ್ಯೂಲ್–VII ಅಡಿಯಲ್ಲಿ ಪೊಲೀಸ್ ಸಂಬಂಧಿತ ಚಟುವಟಿಕೆಗಳನ್ನು ಸೇರ್ಪಡೆಗೊಳಿಸುವ ಪ್ರಸ್ತಾವನೆಯನ್ನೂ ಮುಖ್ಯಮಂತ್ರಿ ಮುಂದಿಟ್ಟರು.
ರಾಜ್ಯದ ಪೊಲೀಸ್ ತರಬೇತಿ ಸಂಸ್ಥೆಗಳಲ್ಲಿ ಮೂಲಸೌಕರ್ಯಗಳನ್ನು ಸುಧಾರಿಸಲು ಹಾಗೂ ಆಧುನಿಕ ತರಬೇತಿ ಸೌಲಭ್ಯಗಳನ್ನು ಕಲ್ಪಿಸಲು 258.53 ಕೋಟಿ ರೂ.ಗಳ ಯೋಜನೆಗೆ ಕೇಂದ್ರದ ಅನುಮೋದನೆ ಕೋರಲಾಗಿದೆ. ಪೊಲೀಸ್ ಸಿಬ್ಬಂದಿಯ ವೃತ್ತಿಪರ ಕೌಶಲ್ಯ ವೃದ್ಧಿಗೆ ಇದು ನೆರವಾಗಲಿದೆ ಎಂದು ತಿಳಿಸಿದರು.
ಕಾರಾಗೃಹಗಳ ಭದ್ರತಾ ವ್ಯವಸ್ಥೆ ಸುಧಾರಣೆಗೆ ಸಿಸಿಟಿವಿ ಕ್ಯಾಮೆರಾಗಳು, ವಾಕಿ-ಟಾಕಿ ಹಾಗೂ ಇತರ ಭದ್ರತಾ ಉಪಕರಣಗಳ ಖರೀದಿಗಾಗಿ 2025-26ನೇ ಸಾಲಿನಲ್ಲಿ 20 ಕೋಟಿ ರೂ. ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರವನ್ನು ಕೋರಿದರು.
ಕೇಂದ್ರ ಮೋಟಾರು ವಾಹನಗಳ ನಿಯಮಗಳು, 1989ರ ನಿಯಮ 52-ಎ ಜಾರಿಗೆ ಕರ್ನಾಟಕಕ್ಕೆ ಹೆಚ್ಚಿನ ಕಾಲಾವಕಾಶ ನೀಡುವಂತೆ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದೊಂದಿಗೆ ಚರ್ಚಿಸಿ ಅನುಮೋದನೆ ದೊರಕಿಸಿಕೊಡುವಂತೆ ಕೇಂದ್ರ ಗೃಹ ಸಚಿವರಿಗೆ ಮನವಿ ಮಾಡಲಾಗಿದೆ.
ಸುಪ್ರೀಂ ಕೋರ್ಟ್ ನಿರ್ದೇಶನಗಳ ಅನುಸಾರ ರಾಜ್ಯದ ಪೊಲೀಸ್ ಠಾಣೆಗಳಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾಗಳನ್ನು ಮೇಲ್ದರ್ಜೆಗೆ ಏರಿಸಲು 278.26 ಕೋಟಿ ರೂ.ಗಳ ಪ್ರಸ್ತಾವನೆಯನ್ನೂ ಕೇಂದ್ರ ಸರ್ಕಾರದ ಪರಿಗಣನೆಗೆ ಸಲ್ಲಿಸಲಾಗಿದೆ.
ಇದಲ್ಲದೆ, ಸೈಬರ್ ಅಪರಾಧಗಳನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಸುಮಾರು 360 ಕೋಟಿ ರೂ.ಗಳ ವೆಚ್ಚದಲ್ಲಿ ‘ಕರ್ನಾಟಕ ಸೈಬರ್ ಕ್ರೈಮ್ ಕಂಟ್ರೋಲ್ ಅಂಡ್ ಕೋಆರ್ಡಿನೇಷನ್ ಯುನಿಟ್ (ಕೆ4ಸಿ)’ ಸ್ಥಾಪಿಸಲು ರಾಜ್ಯ ಸರ್ಕಾರ ಉದ್ದೇಶಿಸಿದೆ. ಈ ಸಂಬಂಧದ ವಿವರವಾದ ಯೋಜನಾ ವರದಿಯನ್ನು ಶೀಘ್ರದಲ್ಲೇ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.
ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವುದು, ಆಧುನಿಕ ತಂತ್ರಜ್ಞಾನಗಳ ಬಳಕೆಯನ್ನು ಹೆಚ್ಚಿಸುವುದು ಹಾಗೂ ಸೈಬರ್ ಭದ್ರತೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ಉದ್ದೇಶದಿಂದ ಈ ಎಲ್ಲಾ ಪ್ರಸ್ತಾವನೆಗಳನ್ನು ಕೇಂದ್ರ ಸರ್ಕಾರದ ಮುಂದೆ ಮಂಡಿಸಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.