ಕೃಷ್ಣಾ ನದಿಯ ಆರ್ಭಟ ಜೋರು ; ತುಂಬಿ ತುಳುಕಿದ ಜಲಧಾರೆ, ರೈತರ ಮೊಗದಲ್ಲಿ ಮಂದಹಾಸ
ಉಂಟಾಗಿದೆ
Nadi


ಬಾಗಲಕೋಟೆ, 13 ಜೂನ್ (ಹಿ.ಸ.) :

ಆಂಕರ್ : ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಮಳೆಯಿಂದಾಗಿ ಕೃಷ್ಣಾ ನದಿಯಲ್ಲಿ ನೀರಿನ ಹರಿವು ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ನದಿ ಮೈದುಂಬಿ ಹರಿಯುತ್ತಿದ್ದು, ಕೃಷ್ಣಾ ತೀರದ ಜನರಲ್ಲಿ ಹರ್ಷದ ವಾತಾವರಣ ಉಂಟಾಗಿದೆ.

ಕಳೆದ ಕೆಲ ದಿನಗಳಿಂದ ಮಹಾರಾಷ್ಟ್ರ ಭಾಗದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕೃಷ್ಣಾ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ಒಳಹರಿವು ಬರುತ್ತಿದೆ. ಪರಿಣಾಮವಾಗಿ ನದಿಯ ನೀರಿನ ಮಟ್ಟ ಏರಿಕೆಯಾಗಿದ್ದು, ನದಿ ಪಾತ್ರದ ದೃಶ್ಯಗಳು ಮನಮೋಹಕವಾಗಿ ಕಾಣುತ್ತಿವೆ.

ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಕೃಷ್ಣಾ ನದಿಯ ನೀರಿನ ಹರಿವು ಹೆಚ್ಚಾಗಿರುವುದು ರೈತರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ. ಕಳೆದ ಕೆಲವು ದಿನಗಳಿಂದ ಮಳೆಯ ಕೊರತೆಯಿಂದ ಆತಂಕದಲ್ಲಿದ್ದ ರೈತರು ಇದೀಗ ಜಲಾಶಯಗಳು ಹಾಗೂ ನದಿಗಳಲ್ಲಿ ನೀರಿನ ಪ್ರಮಾಣ ಹೆಚ್ಚುತ್ತಿರುವುದನ್ನು ಕಂಡು ಸಂತಸ ವ್ಯಕ್ತಪಡಿಸುತ್ತಿದ್ದಾರೆ. ಕೃಷಿ ಚಟುವಟಿಕೆಗಳಿಗೆ ಅಗತ್ಯವಾದ ನೀರು ಲಭ್ಯವಾಗುವ ವಿಶ್ವಾಸ ರೈತರಲ್ಲಿ ಮೂಡಿದೆ.

ನದಿ ತುಂಬಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣಾ ನದಿ ತೀರದ ಗ್ರಾಮಗಳ ಜನರು ಎಚ್ಚರಿಕೆಯಿಂದ ಇರುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ನದಿ ಪಾತ್ರಕ್ಕೆ ಇಳಿಯದಂತೆ ಹಾಗೂ ಸುರಕ್ಷತಾ ಕ್ರಮಗಳನ್ನು ಪಾಲಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ.

ಮಹಾರಾಷ್ಟ್ರ ಭಾಗದಲ್ಲಿ ಮಳೆಯ ಪ್ರಮಾಣ ಮತ್ತಷ್ಟು ಹೆಚ್ಚಾದರೆ ಕೃಷ್ಣಾ ನದಿಯ ಒಳಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಇದರಿಂದ ನದಿ ತೀರದ ಪ್ರದೇಶಗಳಲ್ಲಿ ಅಧಿಕಾರಿಗಳು ಪರಿಸ್ಥಿತಿಯನ್ನು ನಿರಂತರವಾಗಿ ಗಮನಿಸುತ್ತಿದ್ದಾರೆ.

ಒಟ್ಟಿನಲ್ಲಿ, ಕೃಷ್ಣಾ ನದಿಯ ಭರ್ಜರಿ ಹರಿವು ಈ ಭಾಗದ ರೈತರಲ್ಲಿ ಹೊಸ ಚೈತನ್ಯ ಮೂಡಿಸಿದ್ದು, ಉತ್ತಮ ಬೆಳೆ ಹಾಗೂ ಸಮೃದ್ಧ ಕೃಷಿ ಋತುವಿನ ನಿರೀಕ್ಷೆ ಹೆಚ್ಚಿಸಿದೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande