
ವಿಜಯಪುರ, 13 ಜೂನ್ (ಹಿ.ಸ.) :
ಆಂಕರ್ : ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಗ್ರಾಮದ ಜನರ ಬಹುಕಾಲದ ಬೇಡಿಕೆಯಾಗಿರುವ ನೂತನ ಮಂಗಲ ಭವನ ನಿರ್ಮಾಣದ ಯೋಜನೆಗೆ ವೇಗ ನೀಡುವ ಉದ್ದೇಶದಿಂದ ಇಂದು ನಿಡಗುಂದಿ ಗ್ರಾಮದಲ್ಲಿ ಸ್ಥಳ ಪರಿಶೀಲನೆಯನ್ನು ಶಾಸಕ ಶಿವಾನಂದ ಪಾಟೀಲ್ ನಡೆಸಿದರು.
ಕ್ಷೇತ್ರದ ಸಮಗ್ರ ಅಭಿವೃದ್ಧಿ ಹಾಗೂ ಸಾರ್ವಜನಿಕರಿಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಮುಂದಾಗಿರುವ ಶಾಸಕ ಶಿವಾನಂದ ಪಾಟೀಲ ಅವರು ನಿಡಗುಂದಿಗೆ ಭೇಟಿ ನೀಡಿ, ಪ್ರಸ್ತಾವಿತ ಮಂಗಲ ಭವನ ನಿರ್ಮಾಣಕ್ಕೆ ಸೂಕ್ತ ಸ್ಥಳಗಳ ಪರಿಶೀಲನೆ ನಡೆಸಿದರು.
ಈ ವೇಳೆ ಸ್ಥಳೀಯ ಮುಖಂಡರು, ಗ್ರಾಮಸ್ಥರು ಹಾಗೂ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ಅವರು, ಮಂಗಲ ಭವನ ನಿರ್ಮಾಣಕ್ಕೆ ಅನುಕೂಲಕರವಾದ ಸ್ಥಳ ಆಯ್ಕೆ ಕುರಿತು ಚರ್ಚಿಸಿದರು. ಗ್ರಾಮದ ಪ್ರಮುಖ ಪ್ರದೇಶಗಳಾದ ಪಟ್ಟಣದ ಪ್ರಸಿದ್ಧ ಶ್ರೀ ಮುದ್ದೇಶ್ವರ ದೇವಸ್ಥಾನದ ಸಮೀಪ, ಕಮದಳ ಪ್ಲಾಟ್, ಮನಗೂರ್ ಪ್ಲಾಟ್ ವ್ಯಾಪ್ತಿಯಲ್ಲಿರುವ ಶ್ರೀ ಕರಿಸಿದ್ದೇಶ್ವರ ಗುಡಿಯ ಸಮೀಪ ಹಾಗೂ ಮನಗೂರ್ ಹನುಮಾನ್ ದೇವಸ್ಥಾನದ ಹತ್ತಿರ ಸೇರಿದಂತೆ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು.
ನಿಡಗುಂದಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನರಿಗೆ ಮದುವೆ ಸಮಾರಂಭಗಳು, ಧಾರ್ಮಿಕ ಕಾರ್ಯಕ್ರಮಗಳು, ಸಾಂಸ್ಕೃತಿಕ ಚಟುವಟಿಕೆಗಳು ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ಆಯೋಜಿಸಲು ಅನುಕೂಲವಾಗುವಂತೆ ಸುಸಜ್ಜಿತ ಮಂಗಲ ಭವನ ನಿರ್ಮಿಸುವ ಉದ್ದೇಶ ಹೊಂದಲಾಗಿದೆ. ಈ ಯೋಜನೆ ಪೂರ್ಣಗೊಂಡಲ್ಲಿ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದ್ದು, ಗ್ರಾಮೀಣ ಭಾಗದ ಸಾಮಾಜಿಕ ಚಟುವಟಿಕೆಗಳಿಗೆ ಹೊಸ ವೇಗ ದೊರೆಯಲಿದೆ ಎಂದು ತಿಳಿಸಲಾಯಿತು.
ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದ್ದು, ಜನರ ಅಗತ್ಯತೆಗಳಿಗೆ ಸ್ಪಂದಿಸುವ ವಿವಿಧ ಕಾಮಗಾರಿಗಳನ್ನು ಹಂತ ಹಂತವಾಗಿ ಕೈಗೊಳ್ಳಲಾಗುತ್ತಿದೆ. ನೂತನ ಮಂಗಲ ಭವನ ನಿರ್ಮಾಣದ ಕಾರ್ಯವನ್ನು ಶೀಘ್ರವಾಗಿ ಅನುಷ್ಠಾನಗೊಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಸ್ಥಳ ಪರಿಶೀಲನೆ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದು, ಮಂಗಲ ಭವನ ನಿರ್ಮಾಣದ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.
ಹಿಂದೂಸ್ತಾನ್ ಸಮಾಚಾರ್ / jyothi deshpande