
ಬಾಗಲಕೋಟೆ, 15 ಜೂನ್ (ಹಿ.ಸ.) :
ಆಂಕರ್ : ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ ನಾಗರಿಕರ ಮೇಲೆಯೇ ಪ್ರಕರಣ ದಾಖಲಿಸಿರುವ ಕ್ರಮಕ್ಕೆ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದಲ್ಲಿ ನೀರಿನ ಸಮಸ್ಯೆಯಿಂದ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದು, ಸಮಸ್ಯೆ ಪರಿಹಾರಕ್ಕೆ ಒತ್ತಾಯಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಿದವರ ವಿರುದ್ಧ ಪೊಲೀಸ್ ಪ್ರಕರಣ ದಾಖಲಿಸಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿರುದ್ಧವಾಗಿದೆ ಎಂದು ಅವರು ಆರೋಪಿಸಿದರು.
ಈ ಕುರಿತು ಜಿಲ್ಲಾಧಿಕಾರಿಯನ್ನು ಭೇಟಿ ಮಾಡಿದ ದೊಡ್ಡನಗೌಡ ಪಾಟೀಲ ಅವರು, ಜನರ ಮೂಲಭೂತ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುವುದು ಅವರ ಹಕ್ಕಾಗಿದೆ. ನೀರು ಕೇಳಿದವರ ಮೇಲೆ ಪ್ರಕರಣ ದಾಖಲಿಸುವ ಬದಲು, ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಇಳಕಲ್ ನಗರ ಸೇರಿದಂತೆ ವಿವಿಧ ಭಾಗಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಮುಂದುವರಿದಿದ್ದು, ಜನರು ದಿನನಿತ್ಯ ಸಂಕಷ್ಟ ಎದುರಿಸುತ್ತಿದ್ದಾರೆ. ಅಧಿಕಾರಿಗಳು ಸಮರ್ಪಕವಾಗಿ ಸ್ಪಂದಿಸದ ಹಿನ್ನೆಲೆಯಲ್ಲಿ ಸಾರ್ವಜನಿಕರು ಅನಿವಾರ್ಯವಾಗಿ ಪ್ರತಿಭಟನೆ ನಡೆಸಿದ್ದಾರೆ. ಇಂತಹ ಸಂದರ್ಭದಲ್ಲಿ ಅವರ ಸಮಸ್ಯೆ ಆಲಿಸುವ ಬದಲು ಪ್ರಕರಣ ದಾಖಲಿಸಿರುವುದು ಸರಿಯಲ್ಲ ಎಂದು ಹೇಳಿದರು.
ಪ್ರತಿಭಟನಾಕಾರರ ವಿರುದ್ಧ ದಾಖಲಿಸಿರುವ ಪ್ರಕರಣಗಳನ್ನು ತಕ್ಷಣ ಹಿಂಪಡೆಯಬೇಕು ಹಾಗೂ ಇಳಕಲ್ ನಗರದ ನೀರಿನ ಸಮಸ್ಯೆ ನಿವಾರಣೆಗೆ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಡಳಿತಕ್ಕೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / jyothi deshpande