ಪರಿಷತ್ ಚುನಾವಣೆ : ಕಾಂಗ್ರೆಸ್ ಗೆ 5, ಬಿಜೆಪಿಗೆ 2 ಸ್ಥಾನ
ಪರಿಶೀಲ ನ
ಕಾಂಗ್ರೆಸ್ ವಿಜೇತ ಅಭ್ಯರ್ಥಿಗಳು


ಬೆಂಗಳೂರು, 18 ಜೂನ್ (ಹಿ.ಸ.) :

ಆ್ಯಂಕರ್ : ರಾಜ್ಯ ರಾಜಕೀಯದಲ್ಲಿ ಭಾರಿ ಕುತೂಹಲ ಕೆರಳಿಸಿದ್ದ ವಿಧಾನ ಪರಿಷತ್ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ ಐದು ಹಾಗೂ ಬಿಜೆಪಿ ಎರಡು ಸ್ಥಾನಗಳನ್ನು ತನ್ನದಾಗಿಸಿಕೊಂಡಿದೆ. ಜೆಡಿಎಸ್ ನ ಏಕೈಕ ಅಭ್ಯರ್ಥಿ ಗೋವಿಂದರಾಜು ಸೋಲು ಕಂಡಿದ್ದು, ಅಡ್ಡ ಮತದಾನವೇ ಈ ಫಲಿತಾಂಶದ ಪ್ರಮುಖ ಅಂಶವಾಗಿ ಹೊರಹೊಮ್ಮಿದೆ.

ವಿಧಾನ ಸಭೆಯಿಂದ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಾದ ಬಿ.ಕೆ. ಹರಿಪ್ರಸಾದ್, ತಿಪ್ಪಣ್ಣಪ್ಪ ಕಮಕನೂರು, ಪಿ.ವಿ. ಮೋಹನ್, ಶಿವಣ್ಣ ಮಳವಳ್ಳಿ ಮತ್ತು ವಿನಯ್ ಕಾರ್ತಿಕ್ ಜಯಗಳಿಸಿದ್ದಾರೆ. ಬಿಜೆಪಿ ಅಭ್ಯರ್ಥಿಗಳಾದ ಆರ್. ರಘು ಹಾಗೂ ಲಿಂಗರಾಜ್ ಪಾಟೀಲ್ ಗೆಲುವು ಸಾಧಿಸಿದ್ದಾರೆ.

ಚುನಾವಣಾ ಫಲಿತಾಂಶದ ಪ್ರಕಾರ, ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕಾರ್ತಿಕ್ 32 ಮತಗಳನ್ನು ಪಡೆದು ಅತಿ ಹೆಚ್ಚು ಮತ ಗಳಿಸಿದ ಅಭ್ಯರ್ಥಿಯಾಗಿ ಹೊರಹೊಮ್ಮಿದರು. ಬಿ.ಕೆ. ಹರಿಪ್ರಸಾದ್, ತಿಪ್ಪಣ್ಣಪ್ಪ ಕಮಕನೂರು ಮತ್ತು ಶಿವಣ್ಣ ಮಳವಳ್ಳಿ ತಲಾ 30 ಮತಗಳನ್ನು ಪಡೆದರೆ, ಪಿ.ವಿ. ಮೋಹನ್ 29 ಮತಗಳನ್ನು ಗಳಿಸಿದರು. ಬಿಜೆಪಿ ಅಭ್ಯರ್ಥಿ ಆರ್. ರಘು 29 ಮತಗಳನ್ನು ಹಾಗೂ ಲಿಂಗರಾಜ್ ಪಾಟೀಲ್ 27 ಮತಗಳನ್ನು ಪಡೆದರು. ಜೆಡಿಎಸ್ ಅಭ್ಯರ್ಥಿ ಗೋವಿಂದರಾಜು ಅವರಿಗೆ ಕೇವಲ 14 ಮತಗಳು ಲಭಿಸಿದವು.

ಈ ಚುನಾವಣೆಯಲ್ಲಿ ಕಾಂಗ್ರೆಸ್ಗೆ ನಿರೀಕ್ಷೆಗಿಂತ ಹೆಚ್ಚಿನ ಬೆಂಬಲ ದೊರೆತಿರುವುದು ವಿಶೇಷ ಗಮನ ಸೆಳೆದಿದೆ. ಬಿಜೆಪಿ ಮತ್ತು ಜೆಡಿಎಸ್ ಶಾಸಕರಿಂದ ಅಡ್ಡ ಮತದಾನ ನಡೆದಿರುವ ಕಾರಣ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಹೆಚ್ಚುವರಿ ಮತಗಳು ಲಭಿಸಿವೆ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ. ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ್ ಹಾಗೂ ಎಸ್.ಟಿ. ಸೋಮಶೇಖರ್ ಸೇರಿದಂತೆ ಕೆಲವು ಶಾಸಕರ ಮತದಾನದ ಕುರಿತು ರಾಜಕೀಯ ವಲಯದಲ್ಲಿ ಚರ್ಚೆ ನಡೆಯುತ್ತಿದೆ.

ಚುನಾವಣೆಯಲ್ಲಿ ಒಟ್ಟು 222 ಮತಗಳು ಚಲಾವಣೆಯಾಗಿದ್ದು, ಅವುಗಳಲ್ಲಿ ಒಂದು ಮತ ಅಸಿಂಧುವಾಗಿದೆ. ಮತಪತ್ರದಲ್ಲಿ ಆದ್ಯತೆಯ ಸಂಖ್ಯೆ ಸರಿಯಾಗಿ ನಮೂದಿಸದ ಕಾರಣ ಆ ಮತವನ್ನು ತಿರಸ್ಕರಿಸಲಾಗಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

ಫಲಿತಾಂಶದ ಬಳಿಕ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ಕಾಂಗ್ರೆಸ್ನ ಐವರು ಅಭ್ಯರ್ಥಿಗಳು ಗೆದ್ದಿರುವುದು ಪಕ್ಷದ ಬಲವನ್ನು ತೋರಿಸಿದೆ ಎಂದು ಹೇಳಿದರು. ಬಿಜೆಪಿ ಮತ್ತು ಜೆಡಿಎಸ್ನ ಕೆಲವು ಶಾಸಕರು ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬೆಂಬಲ ನೀಡಿರುವುದು ಸ್ಪಷ್ಟವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಇನ್ನೊಂದೆಡೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿಜೇತ ಅಭ್ಯರ್ಥಿಗಳಿಗೆ ಅಭಿನಂದನೆ ಸಲ್ಲಿಸಿ, ಅವರು ಜನಸೇವೆಯಲ್ಲಿ ಮತ್ತಷ್ಟು ಯಶಸ್ಸು ಸಾಧಿಸಲಿ ಹಾಗೂ ರಾಜ್ಯದ ಅಭಿವೃದ್ಧಿಗೆ ಕೊಡುಗೆ ನೀಡಲಿ ಎಂದು ಹಾರೈಸಿದ್ದಾರೆ.

ಇದೇ ವೇಳೆ, ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಅಡ್ಡ ಮತದಾನದ ಕುರಿತು ಪಕ್ಷದ ಆಂತರಿಕ ಮಟ್ಟದಲ್ಲಿ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದರು. ಅಡ್ಡ ಮತದಾನ ನಡೆದಿರುವ ಬಗ್ಗೆ ಮಾಹಿತಿ ಸಂಗ್ರಹಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande