
ನವದೆಹಲಿ, 18 ಜೂನ್ (ಹಿ.ಸ.) :
ಆ್ಯಂಕರ್ : ಜೂನ್ 21ರಂದು ನಡೆಯಲಿರುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ–ಪದವಿ ಪೂರ್ವ (ನೀಟ್-ಯುಜಿ) ಮರುಪರೀಕ್ಷೆಯ ಸಿದ್ಧತೆಗಳನ್ನು ಪರಿಶೀಲಿಸಲು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಗುರುವಾರ ಉನ್ನತ ಮಟ್ಟದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದರು. ಪರೀಕ್ಷಾ ಪ್ರಕ್ರಿಯೆಯಲ್ಲಿ ಪ್ರಾಮಾಣಿಕತೆ, ಪಾರದರ್ಶಕತೆ ಮತ್ತು ಕಾರ್ಯಕ್ಷಮತೆಯ ಅತ್ಯುನ್ನತ ಮಾನದಂಡಗಳನ್ನು ಪಾಲಿಸುವಂತೆ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಸಭೆಯಲ್ಲಿ ಕೇಂದ್ರ ಶಿಕ್ಷಣ ಸಚಿವಾಲಯ, ವಿವಿಧ ರಾಜ್ಯ ಸರ್ಕಾರಗಳು, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಹಾಗೂ ಉನ್ನತ ಶಿಕ್ಷಣ ಸಂಸ್ಥೆಗಳ ಹಿರಿಯ ಅಧಿಕಾರಿಗಳು ಭಾಗವಹಿಸಿದರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಕಾರ್ಯದರ್ಶಿ ಸಂಜಯ್ ಕುಮಾರ್, ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ವಿನೀತ್ ಜೋಶಿ ಹಾಗೂ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ ಮಹಾನಿರ್ದೇಶಕ ಅಭಿಷೇಕ್ ಸಿಂಗ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಧರ್ಮೇಂದ್ರ ಪ್ರಧಾನ್, ಮರುಪರೀಕ್ಷೆಯನ್ನು ಸ್ವತಂತ್ರ, ನ್ಯಾಯಸಮ್ಮತ ಮತ್ತು ಸುಗಮವಾಗಿ ನಡೆಸಲು ಅಗತ್ಯವಿರುವ ಎಲ್ಲ ವ್ಯವಸ್ಥೆಗಳನ್ನು ಖಚಿತಪಡಿಸಬೇಕು ಎಂದು ಹೇಳಿದರು. ಪರೀಕ್ಷಾ ಪ್ರಕ್ರಿಯೆಯಲ್ಲಿ ಯಾವುದೇ ಲೋಪದೋಷಗಳು ಉಂಟಾಗದಂತೆ ಎಲ್ಲಾ ಸಂಬಂಧಿತ ಸಂಸ್ಥೆಗಳು ಸಂಪೂರ್ಣ ಎಚ್ಚರಿಕೆಯಿಂದ ಮತ್ತು ಪೂರ್ಣ ಸಿದ್ಧತೆಯೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.
ಶಿಕ್ಷಣ ಸಚಿವಾಲಯದಿಂದ ನೇಮಕಗೊಂಡ ಅಧಿಕಾರಿಗಳು ವಿವಿಧ ರಾಜ್ಯಗಳಿಗೆ ತೆರಳಿ ಮರುಪರೀಕ್ಷೆಗೆ ಸಂಬಂಧಿಸಿದ ಎಲ್ಲಾ ಚಟುವಟಿಕೆಗಳ ಸಮನ್ವಯವನ್ನು ನಿರ್ವಹಿಸಲಿದ್ದಾರೆ. ಅವರು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ ಮಹಾನಿರ್ದೇಶಕರ ನೇತೃತ್ವದ ನಿಯಂತ್ರಣ ಕೇಂದ್ರಕ್ಕೆ ನಿರಂತರವಾಗಿ ವರದಿ ಸಲ್ಲಿಸಲಿದ್ದಾರೆ ಎಂದು ಸಚಿವರು ತಿಳಿಸಿದರು.
ಪರೀಕ್ಷಾರ್ಥಿಗಳಿಗೆ ಒತ್ತಡರಹಿತ ವಾತಾವರಣ ಕಲ್ಪಿಸುವುದು ಅತ್ಯಂತ ಮುಖ್ಯವಾಗಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ಒದಗಿಸಬೇಕು ಎಂದು ರಾಜ್ಯ ಸರ್ಕಾರಗಳ ನೋಡಲ್ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.
ಹಿಂದೂಸ್ತಾನ್ ಸಮಾಚಾರ್ / Rakesh.M.B.