
ಬಾಗಲಕೋಟೆ, 18 ಜೂನ್ (ಹಿ.ಸ.) :
ಆಂಕರ್ : ಮೊಹರಂ ಹಬ್ಬದ ಪ್ರಯುಕ್ತ ಬಾಗಲಕೋಟೆ ಜಿಲ್ಲೆಯ ಜಮಖಂಡಿ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶಾಂತಿ ಮತ್ತು ಸೌಹಾರ್ದತೆಯಿಂದ ಹಬ್ಬ ಆಚರಣೆ ಮಾಡುವ ಉದ್ದೇಶದಿಂದ ವಿವಿಧ ಸಮುದಾಯಗಳ ಮುಖಂಡರು, ಗಣ್ಯರು ಹಾಗೂ ಸಾರ್ವಜನಿಕರೊಂದಿಗೆ ಶಾಂತಿ ಸಭೆ ನಡೆಸಲಾಯಿತು.
ಸಭೆಯಲ್ಲಿ ಹಬ್ಬದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವ ಕುರಿತು ಪೊಲೀಸ್ ಅಧಿಕಾರಿಗಳು ಸಾರ್ವಜನಿಕರಿಗೆ ಅಗತ್ಯ ಸಲಹೆ ಹಾಗೂ ಸೂಚನೆಗಳನ್ನು ನೀಡಿದರು.
ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಹಬ್ಬವನ್ನು ಶಾಂತಿಯುತವಾಗಿ ಹಾಗೂ ಸಹಬಾಳ್ವೆಯ ವಾತಾವರಣದಲ್ಲಿ ಆಚರಿಸುವಂತೆ ಮನವಿ ಮಾಡಲಾಯಿತು.
ಮೊಹರಂ ಆಚರಣೆ ವೇಳೆ ಮೆರವಣಿಗೆ, ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಹೆಚ್ಚಿನ ಜನಸಂದಣಿ ಉಂಟಾಗುವ ಹಿನ್ನೆಲೆಯಲ್ಲಿ ಸಂಚಾರ ವ್ಯವಸ್ಥೆ, ಭದ್ರತಾ ಕ್ರಮಗಳು ಮತ್ತು ಸಾರ್ವಜನಿಕರ ಸಹಕಾರದ ಅಗತ್ಯತೆ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಯಾವುದೇ ರೀತಿಯ ವದಂತಿಗಳಿಗೆ ಕಿವಿಗೊಡದೆ, ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಅಥವಾ ತಪ್ಪು ಮಾಹಿತಿಗಳನ್ನು ಹರಡದಂತೆ ಎಚ್ಚರಿಕೆ ವಹಿಸುವಂತೆ ಪೊಲೀಸರು ಸೂಚಿಸಿದರು.
ಸಮಸ್ಯೆಗಳು ಎದುರಾದಲ್ಲಿ ತಕ್ಷಣ ಪೊಲೀಸ್ ಇಲಾಖೆಯ ಗಮನಕ್ಕೆ ತರುವಂತೆ ಸಾರ್ವಜನಿಕರಿಗೆ ತಿಳಿಸಲಾಯಿತು.
ಸಭೆಯಲ್ಲಿ ವಿವಿಧ ಸಮುದಾಯಗಳ ಮುಖಂಡರು ಹಾಗೂ ಸಾರ್ವಜನಿಕರು ಭಾಗವಹಿಸಿ, ಮೊಹರಂ ಹಬ್ಬವನ್ನು ಶಾಂತಿ, ಸೌಹಾರ್ದತೆ ಮತ್ತು ಸಹಬಾಳ್ವೆಯ ಪ್ರತೀಕವಾಗಿ ಆಚರಿಸುವ ಭರವಸೆ ನೀಡಿದರು.
ಜಮಖಂಡಿ ಶಹರ ಪೊಲೀಸ್ ಠಾಣೆ ವತಿಯಿಂದ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರ ಸುರಕ್ಷತೆ ಹಾಗೂ ಶಾಂತಿ ಕಾಪಾಡಲು ಅಗತ್ಯ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳಲಾಗುವುದು ಎಂದು ತಿಳಿಸಲಾಯಿತು.
ಹಿಂದೂಸ್ತಾನ್ ಸಮಾಚಾರ್ / jyothi deshpande