
ಬೆಂಗಳೂರು, 02 ಜೂನ್ (ಹಿ.ಸ.) :
ಆ್ಯಂಕರ್ : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ನಾಳೆ (ಜೂನ್ 3) ಸಂಜೆ 4.05 ಗಂಟೆಗೆ ಬೆಂಗಳೂರಿನ ಲೋಕ ಭವನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದು ರಾಜ್ಯಪಾಲ ಥಾವರ್ ಚಂದ ಗೆಹ್ಲೋಟ್ ಪ್ರಮಾಣ ವಚನ ಭೋಧಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜಧಾನಿಯಲ್ಲಿ ಭಾರಿ ಸಿದ್ಧತೆಗಳು ನಡೆದಿದ್ದು, ಭದ್ರತಾ ವ್ಯವಸ್ಥೆಮಾಡಲಾಗಿದೆ.
ಕರ್ನಾಟಕ ಸರ್ಕಾರದ ವತಿಯಿಂದ ವಿಐಪಿ ಆಹ್ವಾನ ಪತ್ರಿಕೆಗಳನ್ನು ವಿತರಿಸಲಾಗಿದ್ದು, ಸಮಾರಂಭದಲ್ಲಿ ಸಚಿವ ಸಂಪುಟದ ಮಾಜಿ ಸದಸ್ಯರೂ ಸಹ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಕಾಂಗ್ರೆಸ್ ಆಡಳಿತದ ನಾನಾ ರಾಜ್ಯಗಳ ಮುಖ್ಯಮಂತ್ರಿಗಳು, ಪಕ್ಷದ ಹಿರಿಯ ನಾಯಕರು ಹಾಗೂ ಇಂಡಿಯಾ ಮೈತ್ರಿಕೂಟದ ಪ್ರಮುಖ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.
ಲೋಕ ಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಕಾಂಗ್ರೆಸ್ ವರಿಷ್ಠರು ಸಮಾರಂಭದಲ್ಲಿ ಹಾಜರಾಗುವ ಸಾಧ್ಯತೆ ಇದೆ. ಸಮಾರಂಭಕ್ಕೆ ಸುಮಾರು 800 ವಿಐಪಿಗಳಿಗೆ ಆಹ್ವಾನ ನೀಡಲಾಗಿದ್ದು, 2,200ಕ್ಕೂ ಹೆಚ್ಚು ಪ್ರವೇಶ ಪಾಸ್ ಗಳನ್ನು ವಿತರಿಸಲಾಗಿದೆ.
ಸಾವಿರಾರು ಕಾರ್ಯಕರ್ತರು ಮತ್ತು ಸಾರ್ವಜನಿಕರು ಕಾರ್ಯಕ್ರಮಕ್ಕೆ ಆಗಮಿಸುವ ನಿರೀಕ್ಷೆ ಇರುವುದರಿಂದ ಲೋಕ ಭವನ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ವಾಹನ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ವಿಧಾನಸೌಧ, ವಿಕಾಸಸೌಧ ಹಾಗೂ ಎಂಎಸ್ ಕಟ್ಟಡದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಮಧ್ಯಾಹ್ನದ ಬಳಿಕ ರಜೆ ಘೋಷಿಸಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.