
ಹಾಸನ, 02 ಜೂನ್ (ಹಿ.ಸ.) :
ಆ್ಯಂಕರ್ : ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಸೇವಿಸುವುದು ಕಾನೂನುಬಾಹಿರ ಕೃತ್ಯವಾಗಿದ್ದು, ಅದಕ್ಕೆ ಶಿಕ್ಷೆಯೂ ಇದೆ. ಅನೇಕ ಅಪರಾಧಗಳು ಕೆಟ್ಟ ಹವ್ಯಾಸಗಳ ಪ್ರೇರಣೆಯಿಂದ ನಡೆಯುತ್ತವೆ ಎಂದು ಹಾಸನ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ನ್ಯಾಯಾಧೀಶೆ ದಾಕ್ಷಾಯಣಿ ಜಿ.ಕೆ. ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕರ್ನಾಟಕ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಸಹಯೋಗದಲ್ಲಿ ಹಿಮ್ಸ್ ನಲ್ಲಿ ಆಯೋಜಿಸಿದ್ದ ವಿಶ್ವ ತಂಬಾಕು ರಹಿತ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಹಾಗೂ ಯುವಜನರು ತಂಬಾಕು ಸೇರಿದಂತೆ ದುಶ್ಚಟಗಳಿಂದ ದೂರವಿದ್ದು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಹಿಮ್ಸ್ ನಿರ್ದೇಶಕ ಡಾ. ರಾಜಣ್ಣ ಮಾತನಾಡಿ, ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿದ್ದಾಗ ಮಾತ್ರ ಉನ್ನತ ಸಾಧನೆ ಮಾಡಲು ಸಾಧ್ಯವಾಗುತ್ತದೆ. ದೇಶದ ಭವಿಷ್ಯ ರೂಪಿಸುವಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದಾಗಿದ್ದು, ಅವರು ರಾಷ್ಟ್ರದ ಅಮೂಲ್ಯ ಸಂಪತ್ತಾಗಿದ್ದಾರೆ ಎಂದು ಹೇಳಿದರು.
ಹಿಮ್ಸ್ ಪ್ರಾಂಶುಪಾಲೆ ಡಾ. ಕವಿತ ವಿದ್ಯಾರ್ಥಿಗಳಿಗೆ ತಂಬಾಕು ಸೇವನೆ ಮಾಡದಿರಲು ಪ್ರಮಾಣವಚನ ಬೋಧಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಅನಿಲ್ ಹೆಚ್ ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು.
ಮನೋವೈದ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥ ಡಾ. ಸಂತೋಷ್ ಎಸ್.ವಿ. ತಂಬಾಕು ಸೇವನೆಯಿಂದ ಉಂಟಾಗುವ ಮಾನಸಿಕ, ಸಾಮಾಜಿಕ ಹಾಗೂ ಆರೋಗ್ಯ ಸಮಸ್ಯೆಗಳ ಕುರಿತು ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಆರ್ಥಿಕ ಸಲಹೆಗಾರ ಗೋವಿಂದರಾಜು ಕೆ.ಎನ್., ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ನಾಗೇಶ್ ಆರಾಧ್ಯ, ನೋಡಲ್ ಅಧಿಕಾರಿ ಡಾ. ಪವಿತ್ರ ಪಿ. ಹಾಗೂ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಅನಿತ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh.M.B.