
ಹಾವೇರಿ, 20 ಜೂನ್ (ಹಿ.ಸ.) :
ಆ್ಯಂಕರ್ : ಯುಪಿಎ ಆಡಳಿತಾವಧಿಯಲ್ಲಿ ದೇಶದ ಅಭಿವೃದ್ಧಿಗೆ ಗ್ರಹಣ ಹಿಡಿದಿತ್ತು. ಆದರೆ ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಆ ಗ್ರಹಣ ದೂರವಾಗಿ ಭಾರತಕ್ಕೆ ಅಭಿವೃದ್ಧಿಯ ಶುಕ್ರದೆಸೆ ಆರಂಭವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಹಾವೇರಿಯ ಗಾಂಧಿ ವೃತ್ತದಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಆಯೋಜಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರ 12 ವರ್ಷಗಳ ಆಡಳಿತದ ಜನಪರ ಯೋಜನೆಗಳ ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸ್ವಾತಂತ್ರ್ಯಾನಂತರದ ಭಾರತದಲ್ಲಿ ದೀರ್ಘಾವಧಿ ಪ್ರಧಾನಿಯಾಗಿ ಸೇವೆ ಸಲ್ಲಿಸಿರುವ ನಾಯಕರಲ್ಲಿ ಮೋದಿ ಪ್ರಮುಖರು. ಸತತ ಮೂರನೇ ಬಾರಿ ಪ್ರಧಾನಿಯಾಗಿ ಕಾರ್ಯ ನಿರ್ವಹಿಸುತ್ತಿರುವುದು ಅವರ ಜನಪ್ರಿಯತೆಯ ಪ್ರತೀಕವಾಗಿದೆ ಎಂದು ಬೊಮ್ಮಾಯಿ ಹೇಳಿದರು.
ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ದೇಶದಲ್ಲಿ ಬಡತನ ನಿರ್ಮೂಲನೆಗೆ ಯೋಜನಾಬದ್ಧ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕೋಟ್ಯಂತರ ಕುಟುಂಬಗಳಿಗೆ ಮನೆ, ಅಡುಗೆ ಅನಿಲ ಸಂಪರ್ಕ, ಕುಡಿಯುವ ನೀರು, ವಿದ್ಯುತ್ ಹಾಗೂ ಉಚಿತ ಆಹಾರ ವಿತರಣೆ ಸೇರಿದಂತೆ ಹಲವು ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಲಾಗಿದೆ ಎಂದು ಅವರು ತಿಳಿಸಿದರು.
ದೇಶದಲ್ಲಿ ರಸ್ತೆ, ರೈಲ್ವೆ, ವಿಮಾನಯಾನ ಮತ್ತು ಜಲಸಾರಿಗೆ ಕ್ಷೇತ್ರಗಳಲ್ಲಿ ಮಹತ್ತರ ಅಭಿವೃದ್ಧಿ ಕಂಡುಬಂದಿದೆ. ಯುಪಿಎ ಅವಧಿಯಲ್ಲಿ ದಿನಕ್ಕೆ ಸರಾಸರಿ 5 ಕಿಲೋಮೀಟರ್ ರಾಷ್ಟ್ರೀಯ ಹೆದ್ದಾರಿ ನಿರ್ಮಾಣವಾಗುತ್ತಿದ್ದರೆ, ಈಗ ದಿನಕ್ಕೆ 33 ಕಿಲೋಮೀಟರ್ಗೂ ಹೆಚ್ಚು ಹೆದ್ದಾರಿ ನಿರ್ಮಾಣವಾಗುತ್ತಿದೆ ಎಂದು ಹೇಳಿದರು.
ಮಹಿಳಾ ಸಬಲೀಕರಣ, ಯುವಕರ ಉದ್ಯೋಗಾವಕಾಶ, ರೈತರ ಕಲ್ಯಾಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿಯೂ ಕೇಂದ್ರ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರಿಗೆ ನೇರವಾಗಿ ಆರ್ಥಿಕ ನೆರವು ನೀಡಲಾಗುತ್ತಿದೆ ಎಂದು ಹೇಳಿದರು.
ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಜನಧನ್ ಖಾತೆಗಳ ಮೂಲಕ ನೇರ ಹಣ ವರ್ಗಾವಣೆ ವ್ಯವಸ್ಥೆ ಜಾರಿಗೆ ತಂದು ಮಧ್ಯವರ್ತಿಗಳ ಹಾವಳಿಯನ್ನು ಕಡಿಮೆ ಮಾಡಲಾಗಿದೆ. ಇದರಿಂದ ಸರ್ಕಾರಿ ಸೌಲಭ್ಯಗಳು ನೇರವಾಗಿ ಫಲಾನುಭವಿಗಳಿಗೆ ತಲುಪುತ್ತಿವೆ ಎಂದು ಬೊಮ್ಮಾಯಿ ತಿಳಿಸಿದರು.
ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿ ರೂಪಿಸುವ ದಿಸೆಯಲ್ಲಿ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ಕೃತಕ ಬುದ್ಧಿಮತ್ತೆ ಕ್ಷೇತ್ರಗಳಲ್ಲಿ ದೇಶ ಮುಂಚೂಣಿಯಲ್ಲಿದೆ. ವಿಶ್ವ ಮಟ್ಟದಲ್ಲಿ ಭಾರತದ ಗೌರವ ಮತ್ತು ಪ್ರತಿಷ್ಠೆ ಹೆಚ್ಚಾಗಿದೆ ಎಂದು ಅವರು ಹೇಳಿದರು.
2029ರಲ್ಲಿಯೂ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಲು ಕಾರ್ಯಕರ್ತರು ಹಾಗೂ ದೇಶದ ಜನತೆ ಶ್ರಮಿಸಬೇಕು. ದೇಶದ ಅಭಿವೃದ್ಧಿ, ಯುವಕರು, ರೈತರು, ಕಾರ್ಮಿಕರು ಹಾಗೂ ಬಡವರ ಕಲ್ಯಾಣಕ್ಕಾಗಿ ಅವರ ನೇತೃತ್ವ ಮುಂದುವರಿಯಬೇಕಾಗಿದೆ ಎಂದು ಬೊಮ್ಮಾಯಿ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ವೀರೂಪಾಕ್ಷಪ್ಪ ಬಳ್ಳಾರಿ, ಮುಖಂಡರಾದ ಸಿದ್ದರಾಜ ಕಲಕೋಟಿ, ಗವಿಸಿದ್ದಪ್ಪ ದ್ಯಾಮಣ್ಣವರ ಸೇರಿದಂತೆ ಹಲವಾರು ಪ್ರಮುಖರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh.M.B.