
ಬಾಗಲಕೋಟೆ, 20 ಜೂನ್ (ಹಿ.ಸ.) :
ಆಂಕರ್ : ಉತ್ತರ ಕರ್ನಾಟಕ ಭಾಗದ ಹಿರಿಯ ದಲಿತ ನಾಯಕ ಹಾಗೂ ಮಾದಿಗ ಸಮುದಾಯದ ಪ್ರಮುಖ ಪ್ರತಿನಿಧಿಯಾಗಿರುವ ಆರ್.ಬಿ. ತಿಮ್ಮಾಪುರ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು ಎಂದು ಬಾಗಲಕೋಟೆ ಜಿಲ್ಲಾ ಮಾದಿಗ ಮುಖಂಡರು ಆಗ್ರಹಿಸಿದ್ದಾರೆ.
ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಾದಿಗ ಸಮುದಾಯದ ಮುಖಂಡರು, ಆರ್.ಬಿ. ತಿಮ್ಮಾಪುರ ಅವರು ದೀರ್ಘಕಾಲದಿಂದ ಜನಪರ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದು, ಶೋಷಿತ ಹಾಗೂ ಹಿಂದುಳಿದ ವರ್ಗಗಳ ಧ್ವನಿಯಾಗಿ ಕೆಲಸ ಮಾಡಿದ್ದಾರೆ ಎಂದು ಹೇಳಿದರು.
ಉತ್ತರ ಕರ್ನಾಟಕ ಭಾಗದಲ್ಲಿ ಮಾದಿಗ ಸಮುದಾಯದ ಪ್ರಮುಖ ನಾಯಕರಾಗಿ ಗುರುತಿಸಿಕೊಂಡಿರುವ ತಿಮ್ಮಾಪುರ ಅವರಿಗೆ ಸಚಿವ ಸ್ಥಾನ ನೀಡುವುದರಿಂದ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ದೊರೆಯಲಿದೆ. ಅಲ್ಲದೇ ಸಾಮಾಜಿಕ ನ್ಯಾಯದ ಆಶಯವೂ ಈಡೇರಲಿದೆ ಎಂದು ಮುಖಂಡರು ಅಭಿಪ್ರಾಯಪಟ್ಟರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸಾಮಾಜಿಕ ನ್ಯಾಯದ ತತ್ವದಡಿ ಆಡಳಿತ ನಡೆಸುತ್ತಿದ್ದು, ಮಾದಿಗ ಸಮುದಾಯದ ಹಿರಿಯ ನಾಯಕನಿಗೆ ಸಂಪುಟದಲ್ಲಿ ಅವಕಾಶ ಕಲ್ಪಿಸುವ ಮೂಲಕ ಸಮುದಾಯದ ನಿರೀಕ್ಷೆಗಳಿಗೆ ಸ್ಪಂದಿಸಬೇಕು ಎಂದು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಮಾಡಿದರು.
ಆರ್.ಬಿ. ತಿಮ್ಮಾಪುರ ಅವರು ಉತ್ತರ ಕರ್ನಾಟಕದ ಜನರ ಸಮಸ್ಯೆಗಳ ಕುರಿತು ನಿರಂತರವಾಗಿ ಧ್ವನಿ ಎತ್ತಿದ್ದು, ಆಡಳಿತ ಅನುಭವ ಹೊಂದಿರುವ ನಾಯಕರು. ಅವರಿಗೆ ಸಚಿವ ಸ್ಥಾನ ನೀಡಿದರೆ ಬಾಗಲಕೋಟೆ ಜಿಲ್ಲೆ ಸೇರಿದಂತೆ ಇಡೀ ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿಗೆ ಮತ್ತಷ್ಟು ವೇಗ ಸಿಗಲಿದೆ ಎಂದು ಮುಖಂಡರು ಹೇಳಿದರು.
ಈ ಸಂದರ್ಭದಲ್ಲಿ ಮಾದಿಗ ಸಮುದಾಯದ ಹಲವು ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು. ಸಚಿವ ಸ್ಥಾನ ನೀಡುವ ಬೇಡಿಕೆಯನ್ನು ಸರ್ಕಾರದ ಗಮನಕ್ಕೆ ತರುವುದಾಗಿ ಅವರು ತಿಳಿಸಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande