
ತುಮಕೂರು, 21 ಜೂನ್ (ಹಿ.ಸ.) :
ಆ್ಯಂಕರ್ : ತುಮಕೂರು ನಗರದ ಸರ್ಕಾರಿ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ಭಾನುವಾರ 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಕೇಂದ್ರ ಸಚಿವ ವಿ. ಸೋಮಣ್ಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಾರ್ವಜನಿಕರೊಂದಿಗೆ ಯೋಗಾಭ್ಯಾಸ ನಡೆಸಿದರು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಪ್ರಯತ್ನದ ಫಲವಾಗಿ ಇಂದು ವಿಶ್ವದಾದ್ಯಂತ ಯೋಗ ದಿನವನ್ನು ಆಚರಿಸಲಾಗುತ್ತಿದೆ ಎಂದು ಹೇಳಿದರು. ಯೋಗವು ಭಾರತದ ಅಮೂಲ್ಯ ಕೊಡುಗೆಯಾಗಿದ್ದು, ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ವೃದ್ಧಿಸುವ ಶಕ್ತಿಯನ್ನು ಹೊಂದಿದೆ ಎಂದು ತಿಳಿಸಿದರು.
ಯೋಗವು ದೇಹ ಮತ್ತು ಮನಸ್ಸಿಗೆ ಚೈತನ್ಯ ತುಂಬುವ ಅಮೃತ ವಿದ್ಯೆಯಾಗಿದ್ದು, ಪ್ರತಿಯೊಬ್ಬರೂ ಅದನ್ನು ತಮ್ಮ ದೈನಂದಿನ ಜೀವನದ ಭಾಗವನ್ನಾಗಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಶಾಸಕರಾದ ಬಿ. ಸುರೇಶ್ ಗೌಡ ಹಾಗೂ ಜಿ.ಬಿ. ಜ್ಯೋತಿ ಗಣೇಶ್, ಜಿಲ್ಲಾಧಿಕಾರಿ ಶುಭ್ ಕಲ್ಯಾಣ್, ಬಿಜೆಪಿ ಜಿಲ್ಲಾಧ್ಯಕ್ಷ ರವಿ ಹೆಬ್ಬಾಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶ್ವಿಜ ಜಿ.ಬಿ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ. ಸೇರಿದಂತೆ ಜಿಲ್ಲಾಡಳಿತದ ಅಧಿಕಾರಿಗಳು, ವಿವಿಧ ಸಂಘಟನೆಗಳ ಪ್ರತಿನಿಧಿಗಳು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh.M.B.