
ಬೆಂಗಳೂರು, 21 ಜೂನ್ (ಹಿ.ಸ.) :
ಆ್ಯಂಕರ್ : ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್) ಮರು ಪರೀಕ್ಷೆ ಭಾನುವಾರ ದೇಶದಾದ್ಯಂತ ನಡೆಯಲಿದ್ದು, ಕರ್ನಾಟಕದಲ್ಲೂ ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ಪರೀಕ್ಷೆಯ ಪಾರದರ್ಶಕತೆ ಮತ್ತು ಸುಗಮ ನಿರ್ವಹಣೆಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ಹಲವು ಕಠಿಣ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.
ದೇಶಾದ್ಯಂತ 16 ಲಕ್ಷಕ್ಕೂ ಅಧಿಕ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದು, ರಾಜ್ಯದ 31 ಜಿಲ್ಲೆಗಳ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಮಧ್ಯಾಹ್ನ 2 ಗಂಟೆಯಿಂದ ಸಂಜೆ 5.15ರವರೆಗೆ ಪರೀಕ್ಷೆ ನಡೆಯಲಿದೆ. ಈ ಬಾರಿ ಪರೀಕ್ಷೆಯ ಅವಧಿಯನ್ನು 15 ನಿಮಿಷ ಹೆಚ್ಚಿಸಲಾಗಿದ್ದು, ಒಟ್ಟು 195 ನಿಮಿಷಗಳ ಕಾಲ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ.
ಪರೀಕ್ಷಾ ಕೇಂದ್ರಗಳ ಪ್ರವೇಶ ದ್ವಾರಗಳನ್ನು ಮಧ್ಯಾಹ್ನ 1.30ಕ್ಕೆ ಮುಚ್ಚಲಾಗುತ್ತದೆ. ಆದ್ದರಿಂದ ತಡವಾಗಿ ಬರುವ ಅಭ್ಯರ್ಥಿಗಳಿಗೆ ಯಾವುದೇ ಕಾರಣಕ್ಕೂ ಪ್ರವೇಶ ನೀಡಲಾಗುವುದಿಲ್ಲ ಎಂದು ಎನ್ಟಿಎ ಸ್ಪಷ್ಟಪಡಿಸಿದೆ.
ಪರೀಕ್ಷಾರ್ಥಿಗಳಿಗೆ ಉಡುಪು ಸಂಬಂಧಿತ ವಿಶೇಷ ಸೂಚನೆಗಳನ್ನೂ ನೀಡಲಾಗಿದೆ. ಪಾರದರ್ಶಕ ನೀರಿನ ಬಾಟಲಿಯನ್ನು ಮಾತ್ರ ಕೇಂದ್ರದೊಳಗೆ ತೆಗೆದುಕೊಂಡು ಹೋಗಲು ಅವಕಾಶವಿದೆ. ಪೇಟ, ಹಿಜಾಬ್ ಸೇರಿದಂತೆ ಧಾರ್ಮಿಕ ನಂಬಿಕೆಗಳಿಗೆ ಸಂಬಂಧಿಸಿದ ಉಡುಪುಗಳನ್ನು ಧರಿಸಲು ಅವಕಾಶವಿದ್ದರೂ, ಹೆಚ್ಚುವರಿ ತಪಾಸಣೆಗಾಗಿ ಅಭ್ಯರ್ಥಿಗಳು ಮುಂಚಿತವಾಗಿ ಕೇಂದ್ರಕ್ಕೆ ಆಗಮಿಸಬೇಕಾಗಿದೆ. ತಿಳಿ ಬಣ್ಣದ ಹಾಗೂ ಸರಳ ಉಡುಪು ಧರಿಸುವಂತೆ ಸಲಹೆ ನೀಡಲಾಗಿದೆ.
ಮೊಬೈಲ್ ಫೋನ್, ಸ್ಮಾರ್ಟ್ ವಾಚ್, ಬ್ಲೂಟೂತ್ ಸಾಧನಗಳು, ಇಯರ್ಫೋನ್, ಕ್ಯಾಲ್ಕುಲೇಟರ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ಅಥವಾ ಸಂವಹನ ಸಾಧನಗಳನ್ನು ಕೇಂದ್ರದೊಳಗೆ ತೆಗೆದುಕೊಂಡು ಹೋಗುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ದೊಡ್ಡ ಬೆಲ್ಟ್ಗಳು ಹಾಗೂ ಭಾರವಾದ ಆಭರಣಗಳಿಗೂ ಅವಕಾಶವಿಲ್ಲ.
ಪರೀಕ್ಷೆಯ ಹಿನ್ನೆಲೆಯಲ್ಲಿ ಬೆಂಗಳೂರಿನ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್ಎಸ್ಎಸ್) ಕಲಂ 163ರ ಅಡಿಯಲ್ಲಿ ಈ ಆದೇಶ ಜಾರಿಗೊಳಿಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ಇದರ ಜೊತೆಗೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗಳು, ಸೈಬರ್ ಕೆಫೆಗಳು ಹಾಗೂ ಕಂಪ್ಯೂಟರ್ ಕೇಂದ್ರಗಳನ್ನು ಪರೀಕ್ಷೆಯ ಅವಧಿಯಲ್ಲಿ ಕಡ್ಡಾಯವಾಗಿ ಮುಚ್ಚುವಂತೆ ಸೂಚಿಸಲಾಗಿದೆ. ಅಕ್ರಮ ಚಟುವಟಿಕೆಗಳನ್ನು ತಡೆಯಲು ಹಾಗೂ ಪರೀಕ್ಷೆಯನ್ನು ಶಾಂತಿಯುತವಾಗಿ ನಡೆಸಲು ಪೊಲೀಸರು ವಿಶೇಷ ನಿಗಾ ವಹಿಸಲಿದ್ದಾರೆ.
ಅಭ್ಯರ್ಥಿಗಳು ಪ್ರವೇಶ ಪತ್ರ, ಗುರುತಿನ ಚೀಟಿ ಸೇರಿದಂತೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ತರಬೇಕು. ಭದ್ರತಾ ತಪಾಸಣೆಗಾಗಿ ಹೆಚ್ಚಿನ ಸಮಯ ಬೇಕಾಗುವ ಸಾಧ್ಯತೆ ಇರುವುದರಿಂದ ಪರೀಕ್ಷಾ ಕೇಂದ್ರಕ್ಕೆ ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಆಗಮಿಸುವಂತೆ ಎನ್ಟಿಎ ಮನವಿ ಮಾಡಿದೆ.
ವೈದ್ಯಕೀಯ ಶಿಕ್ಷಣದ ಕನಸನ್ನು ಹೊತ್ತಿರುವ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸುವ ಈ ಮಹತ್ವದ ಪರೀಕ್ಷೆಗೆ ದೇಶಾದ್ಯಂತ ಎಲ್ಲಾ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದ್ದು, ಯಾವುದೇ ಅಕ್ರಮಕ್ಕೆ ಅವಕಾಶ ನೀಡದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.