
ಬೆಂಗಳೂರು, 22 ಜೂನ್ (ಹಿ.ಸ.) :
ಆ್ಯಂಕರ್ : ಬಿಡದಿ ಟೌನ್ ಶಿಪ್ ಯೋಜನೆಗೆ ಸಂಬಂಧಿಸಿದ ವಿವಾದದ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಈ ವಿಷಯವನ್ನು ವಿಧಾನಮಂಡಲದ ಅಧಿವೇಶನದಲ್ಲಿ ಚರ್ಚೆಗೆ ತರಲಿ, ಸರ್ಕಾರದಿಂದ ಸಮಗ್ರ ಉತ್ತರ ನೀಡಲಾಗುವುದು ಎಂದು ಹೇಳಿದ್ದಾರೆ.
ಸೋಮವಾರ ವಿಧಾನ ಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ಬಿಡದಿ ಟೌನ್ಶಿಪ್ ವಿಚಾರವಾಗಿ ಎಚ್.ಡಿ. ಕುಮಾರಸ್ವಾಮಿ ಪರವಾಗಿ ಜೆಡಿಎಸ್ ಸದಸ್ಯರು ಅಧಿವೇಶನದಲ್ಲಿ ಚರ್ಚೆ ನಡೆಸಲಿ. ಆ ಸಂದರ್ಭದಲ್ಲಿ ಸರ್ಕಾರ ತನ್ನ ನಿಲುವನ್ನು ಸ್ಪಷ್ಟಪಡಿಸಿ ಎಲ್ಲ ಪ್ರಶ್ನೆಗಳಿಗೆ ಉತ್ತರ ನೀಡಲಿದೆ” ಎಂದು ತಿಳಿಸಿದರು.
ಕುಮಾರಸ್ವಾಮಿ ಅವರು ಬೈರಮಂಗಲಕ್ಕೆ ಬಂದು ಬಹಿರಂಗ ಚರ್ಚೆ ನಡೆಸುವಂತೆ ಸವಾಲು ಹಾಕಿರುವ ಕುರಿತು ಕೇಳಿದ ಪ್ರಶ್ನೆಗೆ, “ಈಗ ನಾನು ಆ ಬಗ್ಗೆ ಏನೂ ಮಾತನಾಡುವುದಿಲ್ಲ. ಈ ಹಿಂದೆಯೇ ಚರ್ಚೆಗೆ ಆಹ್ವಾನಿಸಿದ್ದೆ, ಆದರೆ ಅವರು ಬಂದಿರಲಿಲ್ಲ. ಮುಂದಿನ ಅಧಿವೇಶನದಲ್ಲಿ ಅವರ ಪಕ್ಷದ ಸದಸ್ಯರು ಹಾಗೂ ಇತರ ಅನುಭವಿ ರಾಜಕಾರಣಿಗಳ ಮೂಲಕ ಈ ವಿಚಾರವನ್ನು ಚರ್ಚೆಗೆ ತರಬಹುದು” ಎಂದು ಹೇಳಿದರು.
ಕುಮಾರಸ್ವಾಮಿ ಅವರು ಈ ಸಂಬಂಧ ದಾಖಲೆಗಳನ್ನು ಬಿಡುಗಡೆ ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿದ ಶಿವಕುಮಾರ್, “ಅವರಿಗೆ ಶುಭವಾಗಲಿ” ಎಂದು ಸಂಕ್ಷಿಪ್ತವಾಗಿ ಉತ್ತರಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh.M.B.