ಪಂಜಾಬ್ ನಲ್ಲಿ ಕೈಗಾರಿಕಾ ವಲಯಕ್ಕೆ ಉತ್ತೇಜನ : ನಿತಿನ್ ನವೀನ್ ಭರವಸೆ
ಉದ್ಯಮಿಗಳ ಜೊತೆ ನಿತಿನ್ ನವೀನ್ ಸಭೆ


ಲುಧಿಯಾನಾ, 22 ಜೂನ್ (ಹಿ.ಸ.) :

ಆ್ಯಂಕರ್ : ಪಂಜಾಬ್ ನಲ್ಲಿ ಕೈಗಾರಿಕೆಗಳಿಗೆ ಅನುಕೂಲಕರ ವಾತಾವರಣ ನಿರ್ಮಿಸಿ, ಉದ್ಯಮಿಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಣಾಮಕಾರಿ ಪರಿಹಾರ ಒದಗಿಸಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಹೇಳಿದ್ದಾರೆ.

ಲುಧಿಯಾನಾದಲ್ಲಿ ಕೈಗಾರಿಕಾ ವಲಯದ ಪ್ರಮುಖ ಉದ್ಯಮಿಗಳು ಹಾಗೂ ವ್ಯಾಪಾರಿಗಳೊಂದಿಗೆ ನಡೆದ ಸಭೆಯಲ್ಲಿ ಅವರು ಈ ಭರವಸೆ ನೀಡಿದರು. ರಾಜ್ಯದಲ್ಲಿ ಕೈಗಾರಿಕೆಗಳ ಅಭಿವೃದ್ಧಿ, ಹೊಸ ಹೂಡಿಕೆಗಳನ್ನು ಆಕರ್ಷಿಸುವುದು, ಉದ್ಯೋಗಾವಕಾಶಗಳನ್ನು ಹೆಚ್ಚಿಸುವುದು ಹಾಗೂ ಉದ್ಯಮಿಗಳ ಸಮಸ್ಯೆಗಳ ಬಗ್ಗೆ ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಯಿತು.

ಸಭೆಯಲ್ಲಿ ಪಂಜಾಬ್ ಬಿಜೆಪಿ ಅಧ್ಯಕ್ಷ ಕೇವಲ್ ಸಿಂಗ್ ಧಿಲ್ಲೋನ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ಸೇರಿದಂತೆ ಪಕ್ಷದ ಹಿರಿಯ ನಾಯಕರು ಹಾಗೂ ಹಲವು ಕೈಗಾರಿಕೋದ್ಯಮಿಗಳು ಭಾಗವಹಿಸಿದ್ದರು.

ಸಭೆಯ ವೇಳೆ ಉದ್ಯಮಿಗಳು ಪಂಜಾಬ್ನ ಕೈಗಾರಿಕಾ ಕ್ಷೇತ್ರ ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಪ್ರಸ್ತಾಪಿಸಿದರು. ಉತ್ತಮ ಮೂಲಸೌಕರ್ಯ, ಸುರಕ್ಷಿತ ಕೈಗಾರಿಕಾ ವಾತಾವರಣ, ಸರಳ ವ್ಯಾಪಾರ ನೀತಿಗಳು, ಸ್ಥಿರ ವಿದ್ಯುತ್ ಪೂರೈಕೆ, ತೆರಿಗೆ ವ್ಯವಸ್ಥೆಯಲ್ಲಿ ಸುಧಾರಣೆ, ಕೌಶಲ್ಯಯುತ ಕಾರ್ಮಿಕರ ಲಭ್ಯತೆ ಹಾಗೂ ಹೂಡಿಕೆಗೆ ಪೂರಕ ವಾತಾವರಣ ಕಲ್ಪಿಸುವಂತೆ ಅವರು ಒತ್ತಾಯಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ನಿತಿನ್ ನವೀನ್, ಪಂಜಾಬ್ ಒಂದು ಕಾಲದಲ್ಲಿ ದೇಶದ ಅತ್ಯಂತ ಬಲಿಷ್ಠ ಕೈಗಾರಿಕಾ ರಾಜ್ಯಗಳಲ್ಲಿ ಒಂದಾಗಿತ್ತು. ಆದರೆ ಇಂದು ಕೈಗಾರಿಕೋದ್ಯಮಿಗಳು ಹಲವಾರು ಸವಾಲುಗಳನ್ನು ಎದುರಿಸುತ್ತಿದ್ದಾರೆ. ಅವರ ಸಮಸ್ಯೆಗಳನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸಿ, ಶಾಶ್ವತ ಪರಿಹಾರ ನೀಡುವ ನಿಟ್ಟಿನಲ್ಲಿ ಸ್ಪಷ್ಟ ಕಾರ್ಯತಂತ್ರ ರೂಪಿಸಲಿದೆ ಎಂದು ಹೇಳಿದರು.

ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ರಾಜ್ಯದ ಕೈಗಾರಿಕಾ ಕ್ಷೇತ್ರಕ್ಕೆ ಹೊಸ ಚೈತನ್ಯ ಸಿಗಲಿದ್ದು, ಯುವಕರಿಗೆ ಹೆಚ್ಚಿನ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ ಎಂದು ಅವರು ತಿಳಿಸಿದರು. ಕೈಗಾರಿಕೆ, ವ್ಯಾಪಾರ, ಹೂಡಿಕೆ ಮತ್ತು ಉದ್ಯೋಗ ಸೃಷ್ಟಿಯೇ ಪಂಜಾಬ್ ಆರ್ಥಿಕ ಅಭಿವೃದ್ಧಿಗೆ ಪ್ರಮುಖ ಆಧಾರವಾಗಿದ್ದು, ಇವುಗಳಿಗೆ ಬಿಜೆಪಿ ಆದ್ಯತೆ ನೀಡಲಿದೆ ಎಂದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande