ಬಿಜೆಪಿ ಮಹಿಳಾ ಮೋರ್ಚಾದಿಂದ ಜನಜಾಗೃತಿ ಕಾರ್ಯಕ್ರಮ
ಗದಗ, 22 ಜೂನ್ (ಹಿ.ಸ.) : ಆ್ಯಂಕರ್ : ಭಾರತೀಯ ಜನತಾ ಪಾರ್ಟಿಯ ಗದಗ ನಗರ ಮಂಡಲ ಮಹಿಳಾ ಮೋರ್ಚಾ ವತಿಯಿಂದ ನಗರದ ವಾರ್ಡ್ ಸಂಖ್ಯೆ 12ರ ಕರಿಯಮ್ಮಕಲ್ಲ ಬಡಾವಣೆಯ ಕರಿಯಮ್ಮ ದೇವಿ ಉದ್ಯಾನವನದಲ್ಲಿರುವ ಆಂಜನೇಯ ದೇವಸ್ಥಾನದ ಆವರಣದಲ್ಲಿ ತೈಲ ಸಂರಕ್ಷಣೆ, ಪೌಷ್ಟಿಕ ಆಹಾರ ಜಾಗೃತಿ ಹಾಗೂ ಎಸ್ಐಆರ್ ಕುರಿತು ಮಾಹಿತ
ಫೋಟೋ


ಗದಗ, 22 ಜೂನ್ (ಹಿ.ಸ.) :

ಆ್ಯಂಕರ್ : ಭಾರತೀಯ ಜನತಾ ಪಾರ್ಟಿಯ ಗದಗ ನಗರ ಮಂಡಲ ಮಹಿಳಾ ಮೋರ್ಚಾ ವತಿಯಿಂದ ನಗರದ ವಾರ್ಡ್ ಸಂಖ್ಯೆ 12ರ ಕರಿಯಮ್ಮಕಲ್ಲ ಬಡಾವಣೆಯ ಕರಿಯಮ್ಮ ದೇವಿ ಉದ್ಯಾನವನದಲ್ಲಿರುವ ಆಂಜನೇಯ ದೇವಸ್ಥಾನದ ಆವರಣದಲ್ಲಿ ತೈಲ ಸಂರಕ್ಷಣೆ, ಪೌಷ್ಟಿಕ ಆಹಾರ ಜಾಗೃತಿ ಹಾಗೂ ಎಸ್ಐಆರ್ ಕುರಿತು ಮಾಹಿತಿ ನೀಡುವ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಸಾರ್ವಜನಿಕರಲ್ಲಿ ಆರೋಗ್ಯ, ಪರಿಸರ ಸಂರಕ್ಷಣೆ ಮತ್ತು ಸಾಮಾಜಿಕ ಜಾಗೃತಿ ಮೂಡಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿದ್ದ ಈ ಕಾರ್ಯಕ್ರಮಕ್ಕೆ ಮಹಿಳೆಯರು, ಪಕ್ಷದ ಕಾರ್ಯಕರ್ತರು ಹಾಗೂ ಸ್ಥಳೀಯ ನಿವಾಸಿಗಳು ಉತ್ತಮ ಸ್ಪಂದನೆ ವ್ಯಕ್ತಪಡಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿಜೆಪಿ ಗದಗ ನಗರ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ರೀಮತಿ ಸ್ವಾತಿ ಅಕ್ಕಿ ವಹಿಸಿದ್ದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಇಂದಿನ ದಿನಗಳಲ್ಲಿ ಪರಿಸರ ಸಂರಕ್ಷಣೆ ಹಾಗೂ ಆರೋಗ್ಯಕರ ಜೀವನಶೈಲಿ ಅತ್ಯಂತ ಅಗತ್ಯವಾಗಿದ್ದು, ಪ್ರತಿಯೊಬ್ಬರೂ ಸಸಿ ನೆಡುವ ಅಭಿಯಾನದಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಕರೆ ನೀಡಿದರು. ತೈಲದ ಸಮರ್ಪಕ ಬಳಕೆ ಹಾಗೂ ಪೌಷ್ಟಿಕ ಆಹಾರದ ಮಹತ್ವದ ಕುರಿತು ಜನರಲ್ಲಿ ಅರಿವು ಮೂಡಿಸುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.

ಅವರು ಮಾತನಾಡುತ್ತಾ, ಇತ್ತೀಚಿನ ದಿನಗಳಲ್ಲಿ ಅನಾರೋಗ್ಯಕರ ಆಹಾರ ಪದ್ಧತಿಯಿಂದ ಅನೇಕ ಆರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತಿವೆ. ಆದ್ದರಿಂದ ಮಹಿಳೆಯರು ಕುಟುಂಬದ ಆರೋಗ್ಯದ ಕಾಳಜಿ ವಹಿಸಿ ಪೌಷ್ಟಿಕಾಂಶಯುಕ್ತ ಆಹಾರ ಪದ್ಧತಿಯನ್ನು ಅಳವಡಿಸಿಕೊಳ್ಳಬೇಕು. ಇದೇ ಉದ್ದೇಶದಿಂದ ಮಹಿಳೆಯರಿಗಾಗಿ ಆರೋಗ್ಯಕರ ಅಡುಗೆ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, ಸ್ಪರ್ಧೆಯಲ್ಲಿ ಮಹಿಳೆಯರು ಉತ್ಸಾಹದಿಂದ ಭಾಗವಹಿಸಿ ವಿವಿಧ ರೀತಿಯ ಪೌಷ್ಟಿಕ ಆಹಾರ ಪದಾರ್ಥಗಳನ್ನು ಪ್ರದರ್ಶಿಸಿದರು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ವಾರ್ಡಿನ ನಗರಸಭಾ ಸದಸ್ಯೆ ಶ್ರೀಮತಿ ವಿಜಯಲಕ್ಷ್ಮೀ ದಿಂಡೂರ ಮಾತನಾಡಿ, ಎಸ್ಐಆರ್ ಕಾರ್ಯಕ್ರಮದ ಕುರಿತು ಸವಿಸ್ತಾರವಾಗಿ ಮಾಹಿತಿ ನೀಡಿದರು. ನಾಗರಿಕರು ಸರ್ಕಾರದ ವಿವಿಧ ಯೋಜನೆಗಳು ಹಾಗೂ ಜಾಗೃತಿ ಕಾರ್ಯಕ್ರಮಗಳ ಪ್ರಯೋಜನ ಪಡೆದುಕೊಳ್ಳುವಂತೆ ಅವರು ಕರೆ ನೀಡಿದರು. ಮಹಿಳೆಯರು ಸಮಾಜದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ಇಂತಹ ಜಾಗೃತಿ ಕಾರ್ಯಕ್ರಮಗಳು ಸಾಮಾಜಿಕ ಬದಲಾವಣೆಗೆ ಸಹಕಾರಿಯಾಗುತ್ತವೆ ಎಂದು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ತೋಟಪ್ಪ (ರಾಜು) ಕುರುಡಗಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಲಿಂಗರಾಜ ಪಾಟೀಲ, ಪಕ್ಷದ ಹಿರಿಯ ಮುಖಂಡರಾದ ಎಂ.ಎಸ್. ಕರೀಗೌಡ್ರ, ಶ್ರೀಪತಿ ಉಡುಪಿ, ಅಶೋಕ ಸಂಕಣ್ಣವರ, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ಶಶಿಧರ ದಿಂಡೂರ, ಮಂಡಲ ಅಧ್ಯಕ್ಷ ಸುರೇಶ ಮರಳಪ್ಪನವರ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ ಅಕ್ಕಿ, ಮಂಡಲ ಪ್ರಧಾನ ಕಾರ್ಯದರ್ಶಿ ಶಂಕರ ಕಾಕಿ ಸೇರಿದಂತೆ ಅನೇಕ ಮುಖಂಡರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಅದೇ ರೀತಿ ಚನ್ನಮ್ಮ ಹುಳಕಣ್ಣವರ, ಮೇಘನಾ ಕೊಟ್ಟೂರ, ಭುವನೇಶ್ವರಿ ಹಿರೇಮಠ, ಗೀತಾ ಅಣ್ಣಿಗೇರಿ, ನಿರ್ಮಲಾ ಬಳ್ಳಿ, ಶೈಲಜಾ ಜೋಸೆಫ್, ರತ್ನಾ ಪಾಟೀಲ, ಸಂಜನಾ ಪವಾರ, ವೀಣಾ ದಾಸರ, ಶಕುಂತಲಾ ದೇಸಾಯಿಗೌಡ್ರ, ರಶ್ಮಿ ಗುಡಿ, ಪಿಡಗಣ್ಣವರ, ನಿವೇದನಾ ಮಾಳಶೆಟ್ಟಿ, ಬಸಮ್ಮ, ಚನ್ನಬಸವ್ವ ಮಠದ ಸೇರಿದಂತೆ ಮಹಿಳಾ ಮೋರ್ಚಾ ಸದಸ್ಯೆಯರು ಸಕ್ರಿಯವಾಗಿ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಯುವ ಮೋರ್ಚಾ ಸದಸ್ಯರು, ಪಕ್ಷದ ಪದಾಧಿಕಾರಿಗಳು, ವಾರ್ಡ್ ಸದಸ್ಯರು, ಜಿಲ್ಲಾ ಪ್ರಕೋಷ್ಠದ ಪದಾಧಿಕಾರಿಗಳು, ಪಕ್ಷದ ಪ್ರಮುಖ ಮುಖಂಡರು, ಚುನಾಯಿತ ಪ್ರತಿನಿಧಿಗಳು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಕಾರ್ಯಕ್ರಮದ ಮೂಲಕ ಪರಿಸರ ಸಂರಕ್ಷಣೆ, ಆರೋಗ್ಯಕರ ಆಹಾರ ಪದ್ಧತಿ ಹಾಗೂ ಸಾಮಾಜಿಕ ಜಾಗೃತಿಯ ಸಂದೇಶವನ್ನು ಜನರಿಗೆ ತಲುಪಿಸಲಾಯಿತು.

ಕಾರ್ಯಕ್ರಮವನ್ನು ಬಿಜೆಪಿ ಗದಗ ನಗರ ಮಂಡಲ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪುಷ್ಪಾ ಪೂಜಾರ ನಿರೂಪಿಸಿದರು. ರೇಖಾ ಗವಳಿ ವಂದಿಸಿದರು. ಅಂತಿಮವಾಗಿ ಸಾರ್ವಜನಿಕರು ಇಂತಹ ಜಾಗೃತಿ ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸುವಂತೆ ಸಂಘಟಕರಿಗೆ ಮನವಿ ಮಾಡಿದರು.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande