
ಬಾಗಲಕೋಟೆ, 24 ಜೂನ್ (ಹಿ.ಸ.) :
ಆಂಕರ್ : ಮಾದಕ ದ್ರವ್ಯಗಳ ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಎಸ್. ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಹಾನಗಲ್ ಕುಮಾರೇಶ್ವರ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ, ಬಾಗಲಕೋಟೆ ಇವರ ಸಹಯೋಗದಲ್ಲಿ ವೈದ್ಯಕೀಯ ಮಹಾವಿದ್ಯಾಲಯದ ಅಧಿಕಾರಿಗಳು, ಸಿಬ್ಬಂದಿ ವರ್ಗ ಹಾಗೂ ವೈದ್ಯಕೀಯ ವಿದ್ಯಾರ್ಥಿಗಳಿಗಾಗಿ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ಉತ್ತರ ವಲಯ ಬೆಳಗಾವಿಯ ಪೊಲೀಸ್ ಮಹಾನಿರೀಕ್ಷಕರಾದ ಸಂದೀಪ್ ಪಾಟೀಲ್ ಅವರು ಭಾಗವಹಿಸಿ, ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಕುರಿತು ವಿವರವಾದ ಮಾಹಿತಿ ನೀಡಿದರು. ಮಾದಕ ವ್ಯಸನವು ಯುವಜನರ ಭವಿಷ್ಯಕ್ಕೆ ಮಾರಕವಾಗಿದ್ದು, ಸಮಾಜದ ಆರೋಗ್ಯ ಮತ್ತು ಅಭಿವೃದ್ಧಿಗೆ ದೊಡ್ಡ ಸವಾಲಾಗಿದೆ ಎಂದು ತಿಳಿಸಿದರು.
ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣದಲ್ಲಿ ಪ್ರತಿಯೊಬ್ಬರ ಪಾತ್ರ ಮಹತ್ವದ್ದಾಗಿದೆ. ವಿದ್ಯಾರ್ಥಿಗಳು ಹಾಗೂ ಯುವಜನರು ಮಾದಕ ವಸ್ತುಗಳಿಂದ ದೂರವಿದ್ದು, ಆರೋಗ್ಯಕರ ಜೀವನ ಶೈಲಿಯನ್ನು ಅಳವಡಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.
ಬಾಗಲಕೋಟೆ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಸಿದ್ಧಾರ್ಥ ಗೋಯಲ್ ಅವರು ಮಾತನಾಡಿ, ಮಾದಕ ದ್ರವ್ಯ ಸೇವನೆಯಿಂದ ಉಂಟಾಗುವ ದೈಹಿಕ, ಮಾನಸಿಕ ಹಾಗೂ ಸಾಮಾಜಿಕ ಸಮಸ್ಯೆಗಳ ಕುರಿತು ವಿವರಿಸಿದರು. ವ್ಯಸನವು ವ್ಯಕ್ತಿಯ ಆರೋಗ್ಯದ ಜೊತೆಗೆ ಕುಟುಂಬದ ನೆಮ್ಮದಿ ಮತ್ತು ಸಮಾಜದ ವ್ಯವಸ್ಥೆಯ ಮೇಲೂ ಗಂಭೀರ ಪರಿಣಾಮ ಬೀರುತ್ತದೆ ಎಂದು ಎಚ್ಚರಿಸಿದರು.
ಮಾದಕ ವ್ಯಸನದಿಂದ ದೂರವಿದ್ದು, ವ್ಯಸನಮುಕ್ತ ಜೀವನ ನಡೆಸುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ಕೈಜೋಡಿಸುವಂತೆ ಅವರು ವಿದ್ಯಾರ್ಥಿಗಳಿಗೆ ಹಾಗೂ ಸಿಬ್ಬಂದಿಗೆ ಮನವಿ ಮಾಡಿದರು.
ಕಾರ್ಯಕ್ರಮದ ಕೊನೆಯಲ್ಲಿ ವೈದ್ಯಕೀಯ ಮಹಾವಿದ್ಯಾಲಯದ ಅಧಿಕಾರಿಗಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ವೈದ್ಯಕೀಯ ವಿದ್ಯಾರ್ಥಿಗಳು ಹಾಗೂ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಮಾದಕ ದ್ರವ್ಯಗಳ ವಿರುದ್ಧ ಹೋರಾಡುವ ಹಾಗೂ ಸಮಾಜದಲ್ಲಿ ಜಾಗೃತಿ ಮೂಡಿಸುವ ಪ್ರತಿಜ್ಞೆಯನ್ನು ಸ್ವೀಕರಿಸಿದರು.
ಕಾರ್ಯಕ್ರಮವು ಮಾದಕ ದ್ರವ್ಯ ಮುಕ್ತ ಸಮಾಜ ನಿರ್ಮಾಣದ ಸಂದೇಶವನ್ನು ಸಾರುವ ಮೂಲಕ ಯಶಸ್ವಿಯಾಗಿ ನೆರವೇರಿತು.
ಹಿಂದೂಸ್ತಾನ್ ಸಮಾಚಾರ್ / jyothi deshpande