ಕೈಗಾರಿಕೆಗಳ ಅಗತ್ಯಕ್ಕೆ ತಕ್ಕಂತೆ ಕೌಶಲ್ಯ ತರಬೇತಿ ನೀಡಲು ಕಾಂತಾ ನಾಯಕ ಸೂಚನೆ
ಧಾರವಾಡ, 24 ಜೂನ್ (ಹಿ.ಸ.) : ಆ್ಯಂಕರ್ : ಬೆಳಗಾವಿ ವಿಭಾಗ ಮಟ್ಟದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸುವ ಕುರಿತು ಶೀಘ್ರದಲ್ಲೇ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತಾ ನಾಯಕ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿಯ ನೂತನ ಸಭಾಂಗಣದಲ್ಲಿ ನಡೆದ ಜಿಲ್ಲಾ ಕೌ
Meeting


ಧಾರವಾಡ, 24 ಜೂನ್ (ಹಿ.ಸ.) :

ಆ್ಯಂಕರ್ : ಬೆಳಗಾವಿ ವಿಭಾಗ ಮಟ್ಟದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸುವ ಕುರಿತು ಶೀಘ್ರದಲ್ಲೇ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತಾ ನಾಯಕ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯ ನೂತನ ಸಭಾಂಗಣದಲ್ಲಿ ನಡೆದ ಜಿಲ್ಲಾ ಕೌಶಲ್ಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಧಿಕಾರಿಗಳು ಅಗತ್ಯ ಮಾಹಿತಿಯನ್ನು ಒದಗಿಸಿದರೆ ಬೆಳಗಾವಿ ವಿಭಾಗ ಮಟ್ಟದ ಉದ್ಯೋಗ ಮೇಳವನ್ನು ಶೀಘ್ರದಲ್ಲಿ ಆಯೋಜಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಹುಬ್ಬಳ್ಳಿ-ಧಾರವಾಡ ನಗರಗಳು ರಾಜ್ಯದ ಪ್ರಮುಖ ಕೈಗಾರಿಕಾ ಹಾಗೂ ಶಿಕ್ಷಣ ಕೇಂದ್ರಗಳಾಗಿದ್ದು, ಇಲ್ಲಿ ಸಾಕಷ್ಟು ಕೈಗಾರಿಕೆಗಳು ಕಾರ್ಯನಿರ್ವಹಿಸುತ್ತಿವೆ. ಸ್ಥಳೀಯ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸುವುದು ಅತ್ಯಂತ ಮುಖ್ಯವಾಗಿದ್ದು, ಅರ್ಹ ಯುವಕರು ಉದ್ಯೋಗ ಸಿಗದೆ ನಿರಾಶರಾಗದಂತೆ ನೋಡಿಕೊಳ್ಳಬೇಕು ಎಂದು ಅವರು ತಿಳಿಸಿದರು.

ಯುವನಿಧಿ ಯೋಜನೆ ಫಲಾನುಭವಿಗಳಿಗೆ ಉದ್ಯೋಗಾಧಾರಿತ ಕೌಶಲ್ಯ ತರಬೇತಿ ನೀಡುವ ಅಗತ್ಯವಿದೆ. ಮುಂದಿನ ದಿನಗಳಲ್ಲಿ ಕೈಗಾರಿಕೋದ್ಯಮಿಗಳ ಸಭೆ ನಡೆಸಿ, ಕೈಗಾರಿಕೆಗಳಿಗೆ ಅಗತ್ಯವಿರುವ ಕೌಶಲ್ಯಗಳ ಕುರಿತು ಮಾಹಿತಿ ಸಂಗ್ರಹಿಸಿ, ಅದಕ್ಕೆ ಅನುಗುಣವಾಗಿ ತರಬೇತಿ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಸೂಚಿಸಿದರು.

ಹೊಸ ಅಭ್ಯರ್ಥಿಗಳಿಗೆ ಅವರ ಕೆಲಸದ ಸ್ವರೂಪಕ್ಕೆ ಅನುಗುಣವಾಗಿ ವೇತನ ನೀಡಬೇಕು. ಅಲ್ಲದೆ ಅಲ್ಪಾವಧಿ ಹಾಗೂ ದೀರ್ಘಾವಧಿಯ ಉದ್ಯೋಗಾವಕಾಶಗಳ ಕುರಿತು ಸ್ಪಷ್ಟ ಮಾಹಿತಿ ಒದಗಿಸಬೇಕು ಎಂದರು. ಐಟಿಐ ವಿದ್ಯಾರ್ಹತೆ ಹೊಂದಿದವರಿಗೆ ಸಾಕಷ್ಟು ಉದ್ಯೋಗಾವಕಾಶಗಳು ಲಭ್ಯವಿದ್ದು, ಪದವೀಧರರಿಗೂ ಹೆಚ್ಚಿನ ಉದ್ಯೋಗಾವಕಾಶಗಳು ದೊರೆಯುವಂತೆ ಕ್ರಮವಹಿಸಬೇಕು ಎಂದು ಹೇಳಿದರು.

ಫ್ಯೂಚರ್ ಸ್ಕಿಲ್ ಯೋಜನೆ, ನನ್ನ ವೃತ್ತಿ ನನ್ನ ಆಯ್ಕೆ ಹಾಗೂ ಇತರೆ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ವ್ಯಾಪಕ ಜಾಗೃತಿ ಮೂಡಿಸಬೇಕಿದೆ. ಪಾರಂಪರಿಕ ಹಾಗೂ ಪ್ರಾದೇಶಿಕ ಕಲೆಗಳು ನಶಿಸಿ ಹೋಗದಂತೆ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳ ಮೂಲಕ ಅವುಗಳನ್ನು ಉಳಿಸಿ ಬೆಳೆಸಲು ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ನಲ್ ಜಲ್ ಮಿತ್ರ ಯೋಜನೆ ಅಡಿಯಲ್ಲಿ ತರಬೇತಿ ಪಡೆದವರು ಸ್ವಾವಲಂಬಿ ಜೀವನ ನಡೆಸುವಂತಾಗಬೇಕು. ಗೃಹಲಕ್ಷ್ಮಿ ಯೋಜನೆಯ ಮಾದರಿಯಲ್ಲಿಯೇ ಕೌಶಲ್ಯ ತರಬೇತಿ ಮತ್ತು ವಿವಿಧ ಯೋಜನೆಗಳ ಸಾಧನೆ ಕುರಿತ ವರದಿಯನ್ನು ಸಲ್ಲಿಸಬೇಕು ಎಂದು ಹೇಳಿದರು.

ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಆರ್. ಸ್ನೇಹಲ್, ಉದ್ಯೋಗಾಧಾರಿತ ತರಬೇತಿ ನೀಡುವುದು ಅತ್ಯಗತ್ಯವಾಗಿದೆ ಎಂದು ಹೇಳಿದರು. ತರಬೇತಿಯೊಂದಿಗೆ ಗೌರವಧನ ನೀಡುವ ವ್ಯವಸ್ಥೆಯೂ ಇರಬೇಕು ಎಂದು ಸಲಹೆ ನೀಡಿದರು.

ಧಾರವಾಡ ಜಿಲ್ಲೆಯಲ್ಲಿ ಅನೇಕ ಅಭ್ಯರ್ಥಿಗಳು ಸರ್ಕಾರಿ ಉದ್ಯೋಗಗಳಿಗಾಗಿ ಸಿದ್ಧತೆ ನಡೆಸುತ್ತಿದ್ದು, ಅವರಿಗೆ ಸೂಕ್ತ ಮಾರ್ಗದರ್ಶನ ಮತ್ತು ಕೌಶಲ್ಯ ತರಬೇತಿ ಒದಗಿಸಬೇಕಾಗಿದೆ ಎಂದು ಹೇಳಿದರು. ನವಲಗುಂದದ ಅಭಿಯಾನ ಫೌಂಡೇಶನ್ ಯೋಗ ಮ್ಯಾಟ್ ತಯಾರಿಕೆ ಕುರಿತು ತರಬೇತಿ ನೀಡಲು ಮುಂದಾಗಬೇಕು ಎಂದು ಸೂಚಿಸಿದರು.

ಈ ಸಂದರ್ಭದಲ್ಲಿ ನಲ್ ಜಲ್ ಮಿತ್ರ ಯೋಜನೆ ಅಡಿಯಲ್ಲಿ ತರಬೇತಿ ಪೂರ್ಣಗೊಳಿಸಿದ ಶಿಬಿರಾರ್ಥಿಗಳಿಗೆ ಪ್ರಮಾಣಪತ್ರ, ಟೂಲ್ ಕಿಟ್ ಹಾಗೂ ಸಮವಸ್ತ್ರಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ದ್ಯಾಬೇರಿ, ವಿವಿಧ ಇಲಾಖೆಗಳ ಅಧಿಕಾರಿಗಳು, ಕೈಗಾರಿಕೋದ್ಯಮಿಗಳು ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande