ಬನಶಂಕರಿ ದೇವಾಲಯ ಲೋಕಾರ್ಪಣೆ ; ಶಾಸಕ ಸಿದ್ದು ಸವದಿ ಅವರಿಂದ ಸಮುದಾಯ ಭವನ ಉದ್ಘಾಟನೆ
ಬಾಗಲಕೋಟೆ, 24 ಜೂನ್ (ಹಿ.ಸ.) : ಆಂಕರ್ : ಬಾಗಲಕೋಟೆ ಜಿಲ್ಲೆಯ ತೇರದಾಳ ಮತಕ್ಷೇತ್ರದ ಆಸಂಗಿ ಗ್ರಾಮದಲ್ಲಿ ಭಕ್ತರ ಬಹುದಿನಗಳ ನಿರೀಕ್ಷೆಯಲ್ಲಿದ್ದ ಶ್ರೀ ಬನಶಂಕರಿದೇವಿ ದೇವಾಲಯದ ಲೋಕಾರ್ಪಣೆ ಕಾರ್ಯಕ್ರಮ ಹಾಗೂ ನೂತನ ಸಮುದಾಯ ಭವನದ ಉದ್ಘಾಟನಾ ಸಮಾರಂಭವು ಭಕ್ತಿಭಾವ ಮತ್ತು ಸಂಭ್ರಮದಿಂದ ಜರುಗಿತು. ಶ್ರೀ ಬ
ಲೋಕಾರ್ಪಣೆ


ಬಾಗಲಕೋಟೆ, 24 ಜೂನ್ (ಹಿ.ಸ.) :

ಆಂಕರ್ : ಬಾಗಲಕೋಟೆ ಜಿಲ್ಲೆಯ ತೇರದಾಳ ಮತಕ್ಷೇತ್ರದ ಆಸಂಗಿ ಗ್ರಾಮದಲ್ಲಿ ಭಕ್ತರ ಬಹುದಿನಗಳ ನಿರೀಕ್ಷೆಯಲ್ಲಿದ್ದ ಶ್ರೀ ಬನಶಂಕರಿದೇವಿ ದೇವಾಲಯದ ಲೋಕಾರ್ಪಣೆ ಕಾರ್ಯಕ್ರಮ ಹಾಗೂ ನೂತನ ಸಮುದಾಯ ಭವನದ ಉದ್ಘಾಟನಾ ಸಮಾರಂಭವು ಭಕ್ತಿಭಾವ ಮತ್ತು ಸಂಭ್ರಮದಿಂದ ಜರುಗಿತು.

ಶ್ರೀ ಬನಶಂಕರಿದೇವಿ ದೇವಾಲಯದ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಆರಂಭವಾದ ಸಮಾರಂಭದಲ್ಲಿ ತೇರದಾಳ ಕ್ಷೇತ್ರದ ಶಾಸಕ ಸಿದ್ದು ಸವದಿ ಅವರು ಭಾಗವಹಿಸಿ ದೇವಿಯ ದರ್ಶನ ಪಡೆದು, ದೇವಾಲಯವನ್ನು ಲೋಕಾರ್ಪಣೆ ಮಾಡಿದರು. ಇದೇ ಸಂದರ್ಭದಲ್ಲಿ ಗ್ರಾಮಸ್ಥರ ಅನುಕೂಲಕ್ಕಾಗಿ ನಿರ್ಮಿಸಲಾಗಿರುವ ನೂತನ ಸಮುದಾಯ ಭವನವನ್ನೂ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಸಿದ್ದು ಸವದಿ ಅವರು, ಗ್ರಾಮೀಣ ಪ್ರದೇಶಗಳಲ್ಲಿ ಧಾರ್ಮಿಕ ಕೇಂದ್ರಗಳು ಹಾಗೂ ಸಮುದಾಯ ಭವನಗಳು ಜನರ ಒಗ್ಗಟ್ಟು ಮತ್ತು ಸಾಮಾಜಿಕ ಚಟುವಟಿಕೆಗಳಿಗೆ ಪ್ರಮುಖ ವೇದಿಕೆಗಳಾಗಿವೆ ಎಂದು ಹೇಳಿದರು.

ದೇವಾಲಯಗಳು ಕೇವಲ ಪೂಜಾ ಸ್ಥಳಗಳಲ್ಲ, ಅವು ಸಂಸ್ಕೃತಿ, ಪರಂಪರೆ ಮತ್ತು ಭಕ್ತಿಯ ಕೇಂದ್ರಗಳಾಗಿವೆ. ಸಮುದಾಯ ಭವನಗಳು ಗ್ರಾಮಗಳ ಅಭಿವೃದ್ಧಿ ಕಾರ್ಯಗಳಿಗೆ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳಿಗೆ ಸಹಕಾರಿಯಾಗುತ್ತವೆ ಎಂದು ಅವರು ಅಭಿಪ್ರಾಯಪಟ್ಟರು.

ಆಸಂಗಿ ಗ್ರಾಮದ ಜನರ ಸಹಕಾರ, ಭಕ್ತರ ಶ್ರಮ ಹಾಗೂ ದಾನಿಗಳ ನೆರವಿನಿಂದ ಶ್ರೀ ಬನಶಂಕರಿದೇವಿ ದೇವಾಲಯದ ನಿರ್ಮಾಣ ಕಾರ್ಯ ಯಶಸ್ವಿಯಾಗಿದೆ. ದೇವಾಲಯದ ಅಭಿವೃದ್ಧಿಗೆ ಮುಂದಿನ ದಿನಗಳಲ್ಲಿ ಅಗತ್ಯ ಸಹಕಾರ ನೀಡಲಾಗುವುದು ಎಂದು ಶಾಸಕರು ಭರವಸೆ ನೀಡಿದರು.

18ನೇ ತಾರೀಖಿನಿಂದ ಆರಂಭಗೊಂಡಿದ್ದ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಸಮಾರೋಪದ ಅಂಗವಾಗಿ ನಡೆದ ಈ ಲೋಕಾರ್ಪಣೆ ಸಮಾರಂಭದಲ್ಲಿ ಗ್ರಾಮದ ಗಣ್ಯರು, ದೇವಸ್ಥಾನ ಸಮಿತಿ ಸದಸ್ಯರು, ಮುಖಂಡರು, ಭಕ್ತರು ಹಾಗೂ ಅಪಾರ ಸಂಖ್ಯೆಯಲ್ಲಿ ಗ್ರಾಮಸ್ಥರು ಭಾಗವಹಿಸಿದ್ದರು. ದೇವಾಲಯದಲ್ಲಿ ವಿಶೇಷ ಪೂಜೆ, ಧಾರ್ಮಿಕ ವಿಧಿವಿಧಾನಗಳು ನೆರವೇರಿದವು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande