
ವಿಜಯಪುರ, 25 ಜೂನ್ (ಹಿ.ಸ.):
ಆಂಕರ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಕುರಿತು ವಿಜಯಪುರ ಸಂಸದ ರಮೇಶ ಜಿಗಜಿಣಗಿ ನೀಡಿರುವ ಹೇಳಿಕೆಯನ್ನು ಖಂಡಿಸಿ ದಲಿತ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ಗುರುವಾರ ನಡೆದ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿತು. ಸಂಸದರ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದ ಹೋರಾಟಗಾರರನ್ನು ಪೊಲೀಸರು ತಡೆದು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದರು.
ಇತ್ತೀಚೆಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಆರ್ ಎಸ್ ಎಸ್ ನೋಂದಣಿ ವಿಚಾರವಾಗಿ ಪ್ರಶ್ನೆ ಎತ್ತಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಸಂಸದ ರಮೇಶ ಜಿಗಜಿಣಗಿ ಅವರು ನೀಡಿದ ಹೇಳಿಕೆ ದಲಿತ ಸಂಘಟನೆಗಳ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಸದರ ಹೇಳಿಕೆಯಲ್ಲಿ ದಲಿತ ಸಮುದಾಯದ ಗೌರವಕ್ಕೆ ಧಕ್ಕೆ ತರುವ ಅಂಶಗಳಿವೆ ಎಂದು ಆರೋಪಿಸಿರುವ ಸಂಘಟನೆಗಳು ಸಾರ್ವಜನಿಕವಾಗಿ ವಿರೋಧ ವ್ಯಕ್ತಪಡಿಸಿವೆ.
ಈ ಹಿನ್ನೆಲೆಯಲ್ಲಿ ದಲಿತ ವಿದ್ಯಾರ್ಥಿ ಪರಿಷತ್ ಸಂಸ್ಥಾಪಕ ಅಧ್ಯಕ್ಷ ಹಾಗೂ ನ್ಯಾಯವಾದಿ ಶ್ರೀನಾಥ್ ಪೂಜಾರಿ ಅವರ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ವಿಜಯಪುರ ನಗರದ ಅಂಬೇಡ್ಕರ್ ವೃತ್ತದ ಸಮೀಪದ ಹಳೆ ಪ್ರವಾಸಿ ಮಂದಿರದಲ್ಲಿರುವ ಸಂಸದರ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದರು.
ಪ್ರತಿಭಟನೆಗೆ ಆಗಮಿಸುತ್ತಿದ್ದ ಹಲವು ವಿದ್ಯಾರ್ಥಿಗಳನ್ನು ಪೊಲೀಸರು ಮಾರ್ಗಮಧ್ಯದಲ್ಲೇ ತಡೆದು ವಾಪಸ್ ಕಳುಹಿಸಿದರು. ಆದರೂ ಸಂಘಟನೆಯ ಮುಖಂಡರು ಹಾಗೂ ಕಾರ್ಯಕರ್ತರು ಸಂಸದರ ಕಚೇರಿ ಎದುರು ಜಮಾಯಿಸಿ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನಾಕಾರರು ಕಚೇರಿ ಆವರಣ ಪ್ರವೇಶಿಸಲು ಯತ್ನಿಸಿದ ವೇಳೆ ಗಾಂಧಿ ಚೌಕ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಅವರನ್ನು ತಡೆದರು. ಪರಿಸ್ಥಿತಿ ಕೈಮೀರುವ ಸಾಧ್ಯತೆಯನ್ನು ಗಮನಿಸಿದ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಶ್ರೀನಾಥ್ ಪೂಜಾರಿ ಸೇರಿದಂತೆ ಹಲವು ಮುಖಂಡರನ್ನು ವಶಕ್ಕೆ ಪಡೆದು ಪೊಲೀಸ್ ವಾಹನದಲ್ಲಿ ಕರೆದೊಯ್ದರು. ಬಳಿಕ ಎಲ್ಲರನ್ನೂ ಬಿಡುಗಡೆ ಮಾಡಲಾಯಿತು.
ಈ ವೇಳೆ ಮಾತನಾಡಿದ ಶ್ರೀನಾಥ್ ಪೂಜಾರಿ, ಆರ್ ಎಸ್ ಎಸ ವಿಚಾರವಾಗಿ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿ ಸಂಸದರು ನೀಡಿರುವ ಹೇಳಿಕೆ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದೆ. ಮೀಸಲು ಕ್ಷೇತ್ರದಿಂದ ಆಯ್ಕೆಯಾದ ಜನಪ್ರತಿನಿಧಿಯೊಬ್ಬರು ದಲಿತರ ಸ್ವಾಭಿಮಾನಕ್ಕೆ ಧಕ್ಕೆ ತರುವ ರೀತಿಯಲ್ಲಿ ಮಾತನಾಡಿರುವುದು ಖಂಡನೀಯ ಎಂದು ಆರೋಪಿಸಿದರು.
ದಲಿತರ ಹೆಸರಿನಲ್ಲಿ ರಾಜಕಾರಣ ಮಾಡುವವರು ಸಮುದಾಯದ ಧ್ವನಿಯನ್ನು ಕುಗ್ಗಿಸುವ ಪ್ರಯತ್ನ ಮಾಡಬಾರದು. ಸಂಸದರು ತಮ್ಮ ಹೇಳಿಕೆಗೆ ಕೂಡಲೇ ಕ್ಷಮೆಯಾಚಿಸಬೇಕು. ಇಲ್ಲವಾದರೆ ಜಿಲ್ಲೆಯಾದ್ಯಂತ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ದಲಿತ ವಿದ್ಯಾರ್ಥಿ ಪರಿಷತ್ ಪದಾಧಿಕಾರಿಗಳ ಜತೆಗೆ ಎಂಎಂಡಿಸಿ ಮುಖಂಡರಾದ ಹಾಫಿಜ್ ಸಿದ್ದಖಿ, ಶಬ್ಬೀರ್ ಕಾಗಜಕೊಟಿ, ರಮೇಶ್ ರಾಠೋಡ್, ರಾಕೇಶ್ ಚವ್ಹಾಣ, ಇಲಿಯಾಸ್, ಸಂತೋಷ, ಯಮನೂರಿ ಸಿಂಧಗೆರಿ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande