
ನವದೆಹಲಿ, 27 ಜೂನ್ (ಹಿ.ಸ.) :
ಆ್ಯಂಕರ್ : ಪ್ರಶ್ನೆಪತ್ರಿಕೆ ಸೋರಿಕೆ, ಹೆಚ್ಚುತ್ತಿರುವ ನಿರುದ್ಯೋಗ ಮತ್ತು ದುಬಾರಿ ಶಿಕ್ಷಣದ ವಿರುದ್ಧ ಭಾರತೀಯ ಯುವ ಕಾಂಗ್ರೆಸ್ ಹಾಗೂ ರಾಷ್ಟ್ರೀಯ ವಿದ್ಯಾರ್ಥಿ ಸಂಘ ಹಮ್ಮಿಕೊಂಡಿರುವ ರಾಷ್ಟ್ರವ್ಯಾಪಿ ‘ವಿದ್ಯಾರ್ಥಿಗಳ ಧ್ವನಿ’ ಅಭಿಯಾನವನ್ನು ಯಶಸ್ವಿಗೊಳಿಸಲು ಪಕ್ಷದ ಎಲ್ಲಾ ಹಂತದ ಪದಾಧಿಕಾರಿಗಳು ಸಂಪೂರ್ಣ ಸಹಕಾರ ನೀಡಬೇಕು ಎಂದು ಲೋಕಸಭೆಯ ಪ್ರತಿ ಪಕ್ಷದ ನಾಯಕ ರಾಹುಲ್ ಗಾಂಧಿ ಕರೆ ನೀಡಿದ್ದಾರೆ.
ಶನಿವಾರ ಪಕ್ಷದ ಎಲ್ಲಾ ಪ್ರಧಾನ ಕಾರ್ಯದರ್ಶಿಗಳು, ರಾಜ್ಯ ಉಸ್ತುವಾರಿಗಳು, ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ವಿವಿಧ ವಿಭಾಗಗಳ ಮುಖ್ಯಸ್ಥರು ಹಾಗೂ ಜಿಲ್ಲಾ ಮತ್ತು ನಗರ ಕಾಂಗ್ರೆಸ್ ಸಮಿತಿಗಳ ಅಧ್ಯಕ್ಷರಿಗೆ ಅಧಿಕೃತ ಪತ್ರ ಬರೆದಿರುವ ಅವರು, ದೇಶಾದ್ಯಂತ ನಡೆಯಲಿರುವ ಈ ಅಭಿಯಾನದ ಪರಿಣಾಮಕಾರಿ ಅನುಷ್ಠಾನಕ್ಕೆ ಭಾರತೀಯ ಯುವ ಕಾಂಗ್ರೆಸ್ ಮತ್ತು ಎನ್ಎಸ್ಯುಐಗೆ ಸಂಪೂರ್ಣ ಬೆಂಬಲ ನೀಡುವಂತೆ ಸೂಚಿಸಿದ್ದಾರೆ.
ನಿರಂತರವಾಗಿ ನಡೆಯುತ್ತಿರುವ ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷೆಗಳ ರದ್ದು, ಮರುಪರೀಕ್ಷೆಗಳು, ಸರ್ಕಾರಿ ನೇಮಕಾತಿಗಳಲ್ಲಿನ ವಿಳಂಬ, ಖಾಲಿ ಹುದ್ದೆಗಳ ಭರ್ತಿಯಾಗದಿರುವುದು, ಹೆಚ್ಚುತ್ತಿರುವ ನಿರುದ್ಯೋಗ ಹಾಗೂ ಶಿಕ್ಷಣದ ವೆಚ್ಚದ ಏರಿಕೆಯಿಂದ ದೇಶದ ಯುವಕರು ಮತ್ತು ಅವರ ಕುಟುಂಬಗಳು ತೀವ್ರ ಸಂಕಷ್ಟ ಹಾಗೂ ಮಾನಸಿಕ ಒತ್ತಡ ಎದುರಿಸುತ್ತಿದ್ದಾರೆ ಎಂದು ಹೇಳಿದ್ದಾರೆ.
ಇತ್ತೀಚೆಗೆ ರಾಜಸ್ಥಾನದ ಕೋಟಾದಲ್ಲಿ ನಡೆದ ‘ವಿದ್ಯಾರ್ಥಿಗಳ ಧ್ವನಿ’ ರ್ಯಾಲಿಯನ್ನು ಉಲ್ಲೇಖಿಸಿದ ಅವರು, ಪ್ರಸ್ತುತ ಶಿಕ್ಷಣ ವ್ಯವಸ್ಥೆ ವಿದ್ಯಾರ್ಥಿಗಳ ಮೇಲೆ ಅತಿಯಾದ ಒತ್ತಡ ಹೇರುವುದರ ಜೊತೆಗೆ ಅವರ ಕುಟುಂಬಗಳನ್ನು ಸಾಲದ ಸುಳಿಯಲ್ಲಿ ಸಿಲುಕಿಸುತ್ತಿದೆ ಎಂದು ಆರೋಪಿಸಿದರು.
ಈ ಅಭಿಯಾನವನ್ನು ಸಂಘಟನಾತ್ಮಕವಾಗಿ ಮತ್ತಷ್ಟು ಬಲಪಡಿಸುವಂತೆ ಕರೆ ನೀಡಿದ ರಾಹುಲ್ ಗಾಂಧಿ, ಯುವಕರ ಮೇಲಿನ ಈ ಶೋಷಣೆಯ ವಾಸ್ತವವನ್ನು ದೇಶದ ಜನರಿಗೆ ತಲುಪಿಸುವುದು ಅಗತ್ಯವಾಗಿದೆ. ಯುವಕರಿಗೆ ಸಮರ್ಪಕ ಅವಕಾಶಗಳು ಮತ್ತು ಬೆಂಬಲ ಒದಗಿಸುವ ಹೊಸ ವ್ಯವಸ್ಥೆಯ ನಿರ್ಮಾಣಕ್ಕಾಗಿ ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು ಎಂದು ಪಕ್ಷದ ನಾಯಕರಿಗೆ ಮನವಿ ಮಾಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.