
ನವದೆಹಲಿ, 27 ಜೂನ್ (ಹಿ.ಸ.) :
ಆ್ಯಂಕರ್ : ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಜೂನ್ 29ರಂದು ನವದೆಹಲಿಯ ವಿಜ್ಞಾನ ಭವನದಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂಡಳಿ (ಸಿಸಿಎಚ್ಎಫ್ಡಬ್ಲ್ಯು)ಯ 16ನೇ ಸಭೆಯನ್ನು ಆಯೋಜಿಸಿದೆ.
ಸಭೆಯ ಅಧ್ಯಕ್ಷತೆಯನ್ನು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜಗತ್ ಪ್ರಕಾಶ್ ನಡ್ಡಾ ವಹಿಸಲಿದ್ದಾರೆ. ಕೇಂದ್ರ ಆರೋಗ್ಯ ಖಾತೆ ರಾಜ್ಯ ಸಚಿವರಾದ ಅನುಪ್ರಿಯಾ ಪಟೇಲ್ ಹಾಗೂ ಪ್ರತಾಪರಾವ್ ಜಾಧವ್ ಸಹ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಈ ಮಹತ್ವದ ಸಭೆಯಲ್ಲಿ ದೇಶದ ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು, ಸಂಸದರು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಹಿರಿಯ ಅಧಿಕಾರಿಗಳು, ಸರ್ಕಾರೇತರ ಸದಸ್ಯರು ಮತ್ತು ಆರೋಗ್ಯ ಕ್ಷೇತ್ರದ ತಜ್ಞರು ಪಾಲ್ಗೊಳ್ಳಲಿದ್ದಾರೆ. ಆರೋಗ್ಯ ಕ್ಷೇತ್ರದಲ್ಲಿ ಕೇಂದ್ರ ಮತ್ತು ರಾಜ್ಯಗಳ ನಡುವಿನ ಸಮನ್ವಯವನ್ನು ಮತ್ತಷ್ಟು ಬಲಪಡಿಸುವುದು ಹಾಗೂ ಪ್ರಮುಖ ನೀತಿಗತ ವಿಷಯಗಳ ಕುರಿತು ಸಮಗ್ರ ಚರ್ಚೆ ನಡೆಸುವುದು ಸಭೆಯ ಮುಖ್ಯ ಉದ್ದೇಶವಾಗಿದೆ.
ಸಭೆಯಲ್ಲಿ ರಾಷ್ಟ್ರೀಯ ಆರೋಗ್ಯ ಮಿಷನ್ (ಎನ್ಎಚ್ಎಂ) ಅಡಿಯಲ್ಲಿ ಸುಸ್ಥಿರ ಅಭಿವೃದ್ಧಿ ಗುರಿಗಳ (ಎಸ್ಡಿಜಿ) ಸಾಧನೆ, ಆರೋಗ್ಯ ಕ್ಷೇತ್ರದ ಆದ್ಯತೆಗಳು, ಆಹಾರ ಮತ್ತು ಔಷಧ ನಿಯಂತ್ರಣ ವ್ಯವಸ್ಥೆಯ ಸುಧಾರಣೆ ಹಾಗೂ ಸಹಾಯಕ ಆರೋಗ್ಯ ಸೇವೆಗಳ ಅಭಿವೃದ್ಧಿ ಕುರಿತಂತೆ ವಿಸ್ತೃತ ಚರ್ಚೆ ನಡೆಯಲಿದೆ. ಜೊತೆಗೆ ವಿವಿಧ ಆರೋಗ್ಯ ಯೋಜನೆಗಳ ಪ್ರಗತಿ ಪರಿಶೀಲನೆ, ರಾಜ್ಯಗಳ ಯಶಸ್ವಿ ಕಾರ್ಯಪದ್ಧತಿಗಳ ವಿನಿಮಯ, ಹೊಸ ಸವಾಲುಗಳ ಗುರುತಿಸುವಿಕೆ ಮತ್ತು ದೇಶಾದ್ಯಂತ ಆರೋಗ್ಯ ಸೇವೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಸಮಗ್ರ ಕಾರ್ಯತಂತ್ರ ರೂಪಿಸುವ ಬಗ್ಗೆ ಮಂಥನ ನಡೆಯಲಿದೆ.
ಗಮನಾರ್ಹವಾಗಿ, ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂಡಳಿಯನ್ನು ಭಾರತದ ಸಂವಿಧಾನದ ಅನುಚ್ಛೇದ 263ರಡಿ ಸ್ಥಾಪಿಸಲಾಗಿದೆ. ಇದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಅತ್ಯುನ್ನತ ಸಲಹಾ ಸಂಸ್ಥೆಯಾಗಿದ್ದು, ವೈದ್ಯಕೀಯ ಹಾಗೂ ಸಾರ್ವಜನಿಕ ಆರೋಗ್ಯಕ್ಕೆ ಸಂಬಂಧಿಸಿದ ನೀತಿಗಳು ಮತ್ತು ಕಾರ್ಯಕ್ರಮಗಳ ಅನುಷ್ಠಾನವನ್ನು ಪರಿಶೀಲಿಸುವುದರ ಜೊತೆಗೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳೊಂದಿಗೆ ಸಮನ್ವಯ ಸಾಧಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.