
ನವದೆಹಲಿ, 28 ಜೂನ್ (ಹಿ.ಸ.) :
ಆ್ಯಂಕರ್ : ವ್ಯಸನವು ಮಸಣಕ್ಕೆ ದಾರಿ ಮಾಡಿಕೊಡುವ ಮುನ್ನವೇ ಎಚ್ಚೆತ್ತುಕೊಳ್ಳಬೇಕು. ಯುವಜನತೆಯನ್ನು ವ್ಯಸನದ ಜಾಲದಿಂದ ರಕ್ಷಿಸುವುದು ಸಮಾಜದ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 31ನೇ ಸಂಸ್ಥಾಪನಾ ದಿನ ಹಾಗೂ ಅಂತರರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನದ ಅಂಗವಾಗಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 'ನಶಾ ಮುಕ್ತ ಭಾರತ ಅಭಿಯಾನ' ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ರಾಜ್ಯದಲ್ಲಿ ಪಾನ್ ಮಸಾಲಾ, ಗುಟ್ಕಾ ಹಾಗೂ ಅಡಿಕೆ ಉತ್ಪನ್ನಗಳಲ್ಲಿ ಅಮಲು ಪದಾರ್ಥಗಳನ್ನು ಬೆರೆಸಿ ಮಾರಾಟ ಮಾಡುತ್ತಿರುವ ಬಗ್ಗೆ ಸರ್ಕಾರದ ಗಮನಕ್ಕೆ ಬಂದಿದೆ ಎಂದು ತಿಳಿಸಿದ ಮುಖ್ಯಮಂತ್ರಿ, ಈ ಅಕ್ರಮ ತಕ್ಷಣವೇ ನಿಲ್ಲದಿದ್ದರೆ ರಾಜ್ಯದಲ್ಲಿ ಎಲ್ಲಾ ರೀತಿಯ ಪಾನ್ ಮಸಾಲಾ ಮತ್ತು ಗುಟ್ಕಾ ಉತ್ಪನ್ನಗಳನ್ನು ಸಂಪೂರ್ಣ ನಿಷೇಧಿಸುವ ಬಗ್ಗೆ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಎಚ್ಚರಿಕೆ ನೀಡಿದರು.
ಮಾದಕ ವ್ಯಸನವು ವ್ಯಕ್ತಿಯ ಆರೋಗ್ಯ, ಕುಟುಂಬ ಹಾಗೂ ಸಮಾಜದ ಮೇಲೆ ಗಂಭೀರ ದುಷ್ಪರಿಣಾಮ ಬೀರುತ್ತದೆ. ಆದ್ದರಿಂದ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಶಿಕ್ಷಣ ಸಂಸ್ಥೆಗಳು, ಪೋಷಕರು, ನಾಗರಿಕರು ಮತ್ತು ಸರ್ಕಾರ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು ಎಂದು ಅವರು ಕರೆ ನೀಡಿದರು.
ಯುವಪೀಳಿಗೆಯನ್ನು ಆರೋಗ್ಯಕರ ಜೀವನಶೈಲಿಯತ್ತ ಕೊಂಡೊಯ್ಯುವ ಮೂಲಕ ವ್ಯಸನಮುಕ್ತ ನಾಳಿನ ಸುಂದರ ಕನಸನ್ನು ನನಸಾಗಿಸೋಣ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನವಿ ಮಾಡಿದರು.
ಹಿಂದೂಸ್ತಾನ್ ಸಮಾಚಾರ್ / Rakesh.M.B.