
ಬೆಂಗಳೂರು, 28 ಜೂನ್ (ಹಿ.ಸ.) :
ಆ್ಯಂಕರ್ : ಪದ್ಮನಾಭನಗರದ ಶಾಸಕರ ಕಚೇರಿಯಲ್ಲಿ ಇಂದು ಆಯೋಜಿಸಲಾಗಿದ್ದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಕುರಿತ ಮಾಹಿತಿ ಕಾರ್ಯಾಗಾರ ಹಾಗೂ ಮಾಹಿತಿ ಕೈಪಿಡಿ ಬಿಡುಗಡೆ ಕಾರ್ಯಕ್ರಮದಲ್ಲಿ ಪ್ರತಿಪಕ್ಷ ನಾಯಕ ಆರ್. ಅಶೋಕ್ ಪಕ್ಷದ ಪದಾಧಿಕಾರಿಗಳು ಹಾಗೂ ಬೂತ್ ಮಟ್ಟದ ಕಾರ್ಯಕರ್ತರೊಂದಿಗೆ ಭಾಗವಹಿಸಿದರು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರಜಾಪ್ರಭುತ್ವದ ಯಶಸ್ಸಿಗೆ ನಿಖರ, ಪಾರದರ್ಶಕ ಹಾಗೂ ದೋಷರಹಿತ ಮತದಾರರ ಪಟ್ಟಿ ಅತ್ಯಂತ ಅವಶ್ಯಕವಾಗಿದೆ ಎಂದು ಹೇಳಿದರು. ಈ ನಿಟ್ಟಿನಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯ ಉದ್ದೇಶ, ಮತದಾರರ ಪಟ್ಟಿಯ ಪರಿಶೀಲನೆ, ಹೊಸ ಅರ್ಹ ಮತದಾರರ ಸೇರ್ಪಡೆ, ತಪ್ಪು ವಿವರಗಳ ತಿದ್ದುಪಡಿ, ಅನರ್ಹ ಹೆಸರುಗಳ ತೆರವು ಹಾಗೂ ಮತದಾರರ ಪಟ್ಟಿಯನ್ನು ಇನ್ನಷ್ಟು ಸಮಗ್ರ ಮತ್ತು ವಿಶ್ವಾಸಾರ್ಹಗೊಳಿಸುವ ಕುರಿತು ಕಾರ್ಯಾಗಾರದಲ್ಲಿ ಸವಿಸ್ತಾರ ಮಾಹಿತಿ ನೀಡಲಾಯಿತು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಬಿಡುಗಡೆಗೊಂಡ ಮಾಹಿತಿ ಕೈಪಿಡಿಯ ಮೂಲಕ ಬೂತ್ ಮಟ್ಟದ ಕಾರ್ಯಕರ್ತರು ತಮ್ಮ ವ್ಯಾಪ್ತಿಯ ಮತದಾರರನ್ನು ಸಂಪರ್ಕಿಸುವ ವಿಧಾನ, ಅಗತ್ಯ ದಾಖಲೆಗಳು, ಪರಿಷ್ಕರಣೆ ಪ್ರಕ್ರಿಯೆ ಹಾಗೂ ಮತದಾರರಲ್ಲಿ ಜಾಗೃತಿ ಮೂಡಿಸುವ ಕುರಿತು ಸಮಗ್ರ ಮಾರ್ಗದರ್ಶನ ನೀಡಲಾಯಿತು.
ಮನೆಮನೆಗೆ ತೆರಳಿ ಪ್ರತಿಯೊಬ್ಬ ಅರ್ಹ ನಾಗರಿಕನಿಗೂ ಮತದಾನದ ಹಕ್ಕು ದೊರೆಯುವಂತೆ ಕಾರ್ಯನಿರ್ವಹಿಸುವುದು ನಮ್ಮೆಲ್ಲರ ಹೊಣೆಗಾರಿಕೆಯಾಗಿದೆ. ಮತದಾರರ ಪಟ್ಟಿಯನ್ನು ಮತ್ತಷ್ಟು ಸಮರ್ಪಕಗೊಳಿಸುವ ಮೂಲಕ ಪ್ರಜಾಪ್ರಭುತ್ವವನ್ನು ಸದೃಢಗೊಳಿಸುವ ಸಂಕಲ್ಪದೊಂದಿಗೆ ಕಾರ್ಯಕರ್ತರು ಕೆಲಸ ಮಾಡಬೇಕು ಎಂದು ಆರ್. ಅಶೋಕ್ ಕರೆ ನೀಡಿದರು.
ಹಿಂದೂಸ್ತಾನ್ ಸಮಾಚಾರ್ / Rakesh.M.B.