
ಮೈಸೂರು, 28 ಜೂನ್ (ಹಿ.ಸ.) :
ಆ್ಯಂಕರ್ : ಕೇಂದ್ರ ಚುನಾವಣಾ ಆಯೋಗವು ಬಿಜೆಪಿಗೆ ಅನುಕೂಲವಾಗುವ ರೀತಿಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ನಡೆಸುತ್ತಿದೆ ಎಂದು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಆರೋಪಿಸಿದರು.
ಮೈಸೂರಿನ ಜಿ.ಕೆ. ಮೈದಾನದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಆಯೋಜಿಸಿದ್ದ ವಿಭಾಗೀಯ ಮಟ್ಟದ ಎಸ್ಐಆರ್ ಜನಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಅವರು, ಚುನಾವಣಾ ಆಯೋಗವು ಯಾವುದೇ ಪಕ್ಷಪಾತವಿಲ್ಲದೆ ಕಾರ್ಯನಿರ್ವಹಿಸಬೇಕು. ಆಗ ಮಾತ್ರ ಪ್ರಜಾಪ್ರಭುತ್ವದ ಮೇಲಿನ ಜನರ ವಿಶ್ವಾಸ ಉಳಿಯಲು ಸಾಧ್ಯ ಎಂದು ಹೇಳಿದರು.
ಈ ಹಿಂದೆ ನಡೆದ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಹೊಸ ಮತದಾರರನ್ನು ಸೇರಿಸುವ ಕಾರ್ಯಕ್ಕೆ ಆದ್ಯತೆ ನೀಡಲಾಗುತ್ತಿತ್ತು. ಆದರೆ ಈ ಬಾರಿ ದಾಖಲೆಗಳ ಪರಿಶೀಲನೆ ಹೆಸರಿನಲ್ಲಿ ತಮಿಳುನಾಡು ಮತ್ತು ಬಿಹಾರ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಬಿಜೆಪಿಗೆ ಅನುಕೂಲವಾಗುವ ರೀತಿಯಲ್ಲಿ ಮತದಾರರ ಹೆಸರನ್ನು ಪಟ್ಟಿಯಿಂದ ಕೈಬಿಡಲಾಗುತ್ತಿದೆ ಎಂದು ಅವರು ಆರೋಪಿಸಿದರು.
ಎಸ್ಐಆರ್ ಪ್ರಕ್ರಿಯೆಯಲ್ಲಿ ಅರ್ಜಿ ಸಲ್ಲಿಸುವಾಗ ತಪ್ಪು ಮಾಹಿತಿ ನೀಡಿದರೆ ಮತದಾರರ ಹೆಸರು ಅಂತಿಮ ಪಟ್ಟಿಯಲ್ಲಿ ಸೇರ್ಪಡೆಯಾಗದೇ ಇರಬಹುದು. ಆದ್ದರಿಂದ ಕಾಂಗ್ರೆಸ್ ಪಕ್ಷದ ಬೂತ್ ಮಟ್ಟದ ಕಾರ್ಯಕರ್ತರು ಮತ್ತು ಬಿಎಲ್ಒಗಳು ಪ್ರತಿಯೊಬ್ಬ ಮತದಾರರಿಗೂ ಅರ್ಜಿ ಭರ್ತಿ ಮಾಡುವ ವೇಳೆ ಅಗತ್ಯ ಸಹಾಯ ಮಾಡಬೇಕು. ದಾಖಲೆಗಳು ಮತ್ತು ಮಾಹಿತಿಯು ಸರಿಯಾಗಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಮತದಾರರಿಗೆ ಅಗತ್ಯವಿರುವ 11 ದಾಖಲೆಗಳು ಸುಲಭವಾಗಿ ಲಭ್ಯವಾಗುವಂತೆ ರಾಜ್ಯ ಸರ್ಕಾರ ಕ್ರಮ ಕೈಗೊಂಡಿದ್ದು, ಗ್ರಾಮ ಪಂಚಾಯಿತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಮೂಲಕ ಅವುಗಳನ್ನು ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು. ಈ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದರು.
ಎಸ್ಐಆರ್ ಪ್ರಕ್ರಿಯೆಯಲ್ಲಿ ಅಗತ್ಯ ಮಾಹಿತಿಯನ್ನು ಸರಿಯಾಗಿ ಒದಗಿಸದಿದ್ದರೆ ಹಲವು ಆಡಳಿತಾತ್ಮಕ ತೊಂದರೆಗಳು ಎದುರಾಗಬಹುದು. ಆದ್ದರಿಂದ ಪ್ರತಿಯೊಬ್ಬ ಅರ್ಹ ಮತದಾರರೂ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು. ಬೂತ್ ಮಟ್ಟದ ಕಾರ್ಯಕರ್ತರು ಎಸ್ಐಆರ್ ಪ್ರಕ್ರಿಯೆ ಹಾಗೂ ದಾಖಲೆಗಳ ಬಗ್ಗೆ ಮನೆಮನೆಗೆ ತೆರಳಿ ಮಾಹಿತಿ ನೀಡಿ ಜನರಲ್ಲಿ ಅರಿವು ಮೂಡಿಸಬೇಕು ಎಂದು ಸಚಿವರು ಕರೆ ನೀಡಿದರು.
ಹಿಂದೂಸ್ತಾನ್ ಸಮಾಚಾರ್ / Rakesh.M.B.