ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಿ : ಮೇಯರ್ ಪಿ.ಗಾದೆಪ್ಪ ಕರೆ
ಬಳ್ಳಾರಿ, 28 ಜೂನ್ (ಹಿ.ಸ.) : ಆ್ಯಂಕರ್ : ದೇಶದಲ್ಲಿ ಈಗಾಗಲೇ 14 ವರ್ಷಗಳ ಹಿಂದೆಯೇ ಪೋಲಿಯೊ ಮುಕ್ತ ಎಂದು ಘೋಷಣೆಯಾಗಿದ್ದರೂ, ಮುನ್ನೆಚ್ಚರಿಕಾ ಕ್ರಮವಾಗಿ ಮಕ್ಕಳಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸಲು ಹಾಗೂ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ತಪ್ಪದೇ ಪೋಲಿಯೊ ಲಸಿಕೆ ಹಾಕಿಸಬೇಕು ಎಂದು ಮಹಾನಗರ ಪಾಲಿಕೆಯ ಮ
To build a healthy society, administer polio vaccine without fail.


ಬಳ್ಳಾರಿ, 28 ಜೂನ್ (ಹಿ.ಸ.) :

ಆ್ಯಂಕರ್ : ದೇಶದಲ್ಲಿ ಈಗಾಗಲೇ 14 ವರ್ಷಗಳ ಹಿಂದೆಯೇ ಪೋಲಿಯೊ ಮುಕ್ತ ಎಂದು ಘೋಷಣೆಯಾಗಿದ್ದರೂ, ಮುನ್ನೆಚ್ಚರಿಕಾ ಕ್ರಮವಾಗಿ ಮಕ್ಕಳಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸಲು ಹಾಗೂ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ತಪ್ಪದೇ ಪೋಲಿಯೊ ಲಸಿಕೆ ಹಾಕಿಸಬೇಕು ಎಂದು ಮಹಾನಗರ ಪಾಲಿಕೆಯ ಮಹಾಪೌರರಾದ ಪಿ.ಗಾದೆಪ್ಪ ಅವರು ಹೇಳಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಆಸ್ಪತ್ರೆಯ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾಸ್ಪತ್ರೆಯ ಮುಂಭಾಗದ ಎಮ್.ಸಿ.ಎಚ್ ಆಸ್ಪತ್ರೆಯ ಆವರಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಲಸಿಕೆ ಪಡೆದರೂ ಮಕ್ಕಳಿಗೆ ಯಾವುದೇ ಅಡ್ಡಪರಿಣಾಮ ಬೀರದೆ, ಅವರಲ್ಲಿ ರೋಗನಿರೋಧಕ ಶಕ್ತಿ ಮತ್ತಷ್ಟು ಹೆಚ್ಚಾಗಲಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ, ಎಲ್ಲರೂ ಅಭಿಯಾನದಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಅಧಿಕಾರಿಗಳು ಮನವರಿಕೆ ಮಾಡಿಕೊಡಬೇಕು. ಮುಂಬರುವ ದಿನಗಳಲ್ಲಿಯೂ ನಗರವನ್ನು ಸಂಪೂರ್ಣ ಆರೋಗ್ಯಯುತವಾಗಿಡಲು ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ತಿಳಿಸಿದರು.

ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ. ಚಿದಾನಂದಪ್ಪ ಅವರು ಮಾತನಾಡಿ, ದೇಶ ಮತ್ತು ರಾಜ್ಯದಲ್ಲಿ ಸಮೃದ್ಧಿಯನ್ನು ಕಾಣಬೇಕಾದರೆ ಆರೋಗ್ಯವಂತ ತಾಯಿ ಮತ್ತು ಮಗು ಅತ್ಯಂತ ಅವಶ್ಯಕ. 1995ರಲ್ಲಿ ಪ್ರಾರಂಭವಾದ ಪಲ್ಸ್ ಪೋಲಿಯೋ ಕಾರ್ಯಕ್ರಮದ ಫಲವಾಗಿ 2014ರಲ್ಲಿ ಭಾರತವನ್ನು ಪೋಲಿಯೋ ಮುಕ್ತ ದೇಶ ಎಂದು ಘೋಷಿಸಲಾಗಿದೆ. ಆದಾಗ್ಯೂ, ಭವಿಷ್ಯದಲ್ಲಿ ಮಕ್ಕಳಿಗೆ ಯಾವುದೇ ರೀತಿಯ ಅಂಗವೈಕಲ್ಯ ಬಾಧಿಸಬಾರದು ಮತ್ತು ಅವರ ರೋಗನಿರೋಧಕ ಶಕ್ತಿ ಹೆಚ್ಚಬೇಕು ಎಂಬ ಉದ್ದೇಶದಿಂದ ಈ ಅಭಿಯಾನವನ್ನು ಮುಂದುವರಿಸಲಾಗುತ್ತಿದೆ ಎಂದು ತಿಳಿಸಿದರು.

5 ವರ್ಷದೊಳಗಿನ ಪ್ರತಿಯೊಂದು ಮಗುವಿಗೂ ಹಾಕುವ ಎರಡು ಹನಿ ಪೋಲಿಯೋ ಲಸಿಕೆ ಕೇವಲ ಔಷಧವಲ್ಲ, ಅದು ಮಗುವಿನ ಜೀವನಕ್ಕೆ ಅಮೃತವಿದ್ದಂತೆ. ಕಳೆದ 15-20 ವರ್ಷಗಳ ಹಿಂದೆ ಕಾಣಿಸಿಕೊಳ್ಳುತ್ತಿದ್ದ ಪೋಲಿಯೋ ಪ್ರಕರಣಗಳು, ನಿರಂತರ ಲಸಿಕಾ ಅಭಿಯಾನದ ಯಶಸ್ಸಿನಿಂದಾಗಿ ಇಂದು ಸಂಪೂರ್ಣವಾಗಿ ಇಲ್ಲದಂತಾಗಿವೆ. ಈ ವೈರಸ್ ಅನ್ನು ದೇಶದಿಂದ ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಬೇಕು ಎಂದು ಅವರು ಮನವಿ ಮಾಡಿದರು.

1.99 ಲಕ್ಷ ಮಕ್ಕಳಿಗೆ ಲಸಿಕೆ ಗುರಿ :

ರಾಷ್ಟ್ರೀಯ ಲಸಿಕಾ ದಿನಗಳ ಅಂಗವಾಗಿ ಜಿಲ್ಲೆಯಲ್ಲಿ ಜೂನ್ 28 ರಿಂದ ಜುಲೈ 1 ರವರೆಗೆ ನಾಲ್ಕು ದಿನಗಳ ಕಾಲ ಹಮ್ಮಿಕೊಳ್ಳಲಾಗಿರುವ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನ ನಡೆಯಲಿದೆ. ಜಿಲ್ಲೆಯ ಒಟ್ಟು 16.74 ಲಕ್ಷ ಜನಸಂಖ್ಯೆಯ ವ್ಯಾಪ್ತಿಯಲ್ಲಿ 0 ರಿಂದ 5 ವರ್ಷದೊಳಗಿನ ಒಟ್ಟು 1,99,703 ಮಕ್ಕಳಿಗೆ ಪೋಲಿಯೊ ಹನಿ ಹಾಕುವ ಗುರಿ ಹೊಂದಲಾಗಿದೆ.

ಮೊದಲ ದಿನ ಬೂತ್ಗಳಲ್ಲಿ ಲಸಿಕೆ ಹಾಕಲಿದ್ದು, ಮುಂದಿನ ಮೂರು ದಿನಗಳ ಕಾಲ ಲಸಿಕಾ ಸಿಬ್ಬಂದಿ ಜಿಲ್ಲೆಯ ಒಟ್ಟು 3.49 ಲಕ್ಷ ಮನೆಗಳಿಗೆ ಖುದ್ದಾಗಿ ಭೇಟಿ ನೀಡಿ ಮಕ್ಕಳಿಗೆ ಲಸಿಕೆ ಹಾಕಲಿದ್ದಾರೆ. ಇದಕ್ಕಾಗಿ ಪ್ರಮುಖ ಆಸ್ಪತ್ರೆ, ಬಸ್ ನಿಲ್ದಾಣ ಮತ್ತು ರೈಲ್ವೆ ನಿಲ್ದಾಣಗಳಲ್ಲಿ 15 ಸಂಚಾರಿ (ಮೊಬೈಲ್) ತಂಡಗಳನ್ನು ನಿಯೋಜಿಸಲಾಗಿದೆ. ಅಭಿಯಾನಕ್ಕಾಗಿ ಒಟ್ಟು 3,10,143 ಲಸಿಕೆ ಡೋಸ್ಗಳನ್ನು (12,711 ವಯಲ್ಸ್) ಸಿದ್ಧಪಡಿಸಿಕೊಳ್ಳಲಾಗಿದೆ. ವಿಶೇಷವಾಗಿ ಕಟ್ಟಡ ಕಾರ್ಮಿಕರು, ಅಲೆಮಾರಿಗಳು ವಾಸಿಸುವ ವಲಸೆ ಹಾಗೂ ಹೈ-ರಿಸ್ಕ್ ಅಪಾಯದ ಅಂಚಿನಲ್ಲಿರುವ) ಪ್ರದೇಶಗಳ ಮೇಲೆ ಹೆಚ್ಚಿನ ನಿಗಾ ಇಡಲಾಗಿದೆ.

ಇದೇ ವೇಳೆ ಗಣ್ಯರು ಹುಟ್ಟಿನಿಂದ ಐದು ವರ್ಷದೊಳಗಿನ ಮಕ್ಕಳಿಗೆ ಜೀವಹನಿ ಎರಡು ಹನಿ ಪೋಲಿಯೋ ಲಸಿಕೆ ಹಾಕಿದರು.

ಈ ಸಂದರ್ಭದಲ್ಲಿ ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೋರೇಷನ್ ಲಿಮಿಟೆಡ್ನ ಉಪಾಧ್ಯಕ್ಷ ಹೆಚ್. ಲಕ್ಷ್ಮಣ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು, ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ.ಹನುಮಂತಪ್ಪ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್.ಬಸರೆಡ್ಡಿ ಸೇರಿದಂತೆ ಆರೋಗ್ಯ ಇಲಾಖೆ ಅಧಿಕಾರಿ- ಸಿಬ್ಬಂದಿ ಹಾಗೂ ಸಾರ್ವಜನಿಕರು ಇದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande