ಎಸ್ಐಆರ್ ವಿರುದ್ಧ ಜನಜಾಗೃತಿ ಹೋರಾಟಕ್ಕೆ ಹರಿಪ್ರಸಾದ್ ಕರೆ
ಮೈಸೂರು, 28 ಜೂನ್ (ಹಿ.ಸ.) : ಆ್ಯಂಕರ್ : ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ವಿರುದ್ಧ ಮೈಸೂರಿನಲ್ಲಿ ಆಯೋಜಿಸಿದ್ದ ಜನಜಾಗೃತಿ ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಮಾತನಾಡಿ, ಇದು ರಾಜಕೀಯ ಕಾರ್ಯಕ್ರಮವಲ್ಲ; ಪ್ರಜಾಸತ್ತಾತ್ಮಕ ಮೌಲ್ಯಗಳು ಹಾಗೂ ಮತದಾರರ ಹಕ್ಕುಗಳ
Bkh


ಮೈಸೂರು, 28 ಜೂನ್ (ಹಿ.ಸ.) :

ಆ್ಯಂಕರ್ : ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ವಿರುದ್ಧ ಮೈಸೂರಿನಲ್ಲಿ ಆಯೋಜಿಸಿದ್ದ ಜನಜಾಗೃತಿ ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಮಾತನಾಡಿ, ಇದು ರಾಜಕೀಯ ಕಾರ್ಯಕ್ರಮವಲ್ಲ; ಪ್ರಜಾಸತ್ತಾತ್ಮಕ ಮೌಲ್ಯಗಳು ಹಾಗೂ ಮತದಾರರ ಹಕ್ಕುಗಳನ್ನು ರಕ್ಷಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿರುವ ಜನಜಾಗೃತಿ ಸಮಾವೇಶ ಎಂದು ಹೇಳಿದರು.

ಸಾಮಾಜಿಕ ನ್ಯಾಯ, ಶಿಕ್ಷಣ ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಆದ್ಯತೆ ನೀಡಿದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಐತಿಹಾಸಿಕ ನೆಲೆಯಾದ ಮೈಸೂರಿನಿಂದಲೇ ಈ ಹೋರಾಟ ಆರಂಭವಾಗುತ್ತಿರುವುದು ಅರ್ಥಪೂರ್ಣವಾಗಿದೆ ಎಂದು ಅವರು ತಿಳಿಸಿದರು. ಸಾಮಾಜಿಕ ನ್ಯಾಯದ ಪರಂಪರೆಯನ್ನು ಉಳಿಸಿಕೊಳ್ಳುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಹೇಳಿದರು.

ಸ್ವಾತಂತ್ರ್ಯಾನಂತರ ದೇಶದ ಪ್ರತಿಯೊಬ್ಬ ವಯಸ್ಕ ನಾಗರಿಕನಿಗೂ ಸಂವಿಧಾನಬದ್ಧವಾಗಿ ಮತದಾನದ ಹಕ್ಕು ದೊರೆತಿದೆ. ಯಾವುದೇ ಧರ್ಮ, ಭಾಷೆ, ಜಾತಿ, ಲಿಂಗ ಅಥವಾ ಆರ್ಥಿಕ ಸ್ಥಿತಿಯ ಆಧಾರದ ಮೇಲೆ ಭೇದಭಾವವಿಲ್ಲದೆ ಮತ ಚಲಾಯಿಸುವ ಹಕ್ಕನ್ನು ಸಂವಿಧಾನ ನೀಡಿದೆ. ಈ ಹಕ್ಕನ್ನು ಯಾವುದೇ ರೀತಿಯಲ್ಲಿ ದುರ್ಬಲಗೊಳಿಸಲು ಅವಕಾಶ ನೀಡಬಾರದು ಎಂದು ಅವರು ಹೇಳಿದರು.

ಮತದಾರರ ಪಟ್ಟಿಯ ಸಾಮಾನ್ಯ ಪರಿಷ್ಕರಣೆಗೆ ಕಾಂಗ್ರೆಸ್ ವಿರೋಧಿಯಲ್ಲ. ಮೃತಪಟ್ಟವರು ಅಥವಾ ಅನರ್ಹರ ಹೆಸರುಗಳನ್ನು ತೆಗೆದುಹಾಕುವುದು ಸರಿಯೇ. ಆದರೆ ವಿಶೇಷ ಪರಿಷ್ಕರಣೆಯ ಹೆಸರಿನಲ್ಲಿ ನೈಜ ಮತದಾರರ ಹೆಸರನ್ನು ಮತಪಟ್ಟಿಯಿಂದ ಕೈಬಿಡುವ ಪ್ರಯತ್ನವನ್ನು ಒಪ್ಪಲಾಗುವುದಿಲ್ಲ ಎಂದು ಅವರು ಎಚ್ಚರಿಸಿದರು.

ಕಾಂಗ್ರೆಸ್ ಕಾರ್ಯಕರ್ತರು ಎಸ್ಐಆರ್ ಪ್ರಕ್ರಿಯೆಯನ್ನು ಎರಡನೇ ಸ್ವಾತಂತ್ರ್ಯ ಹೋರಾಟದಂತೆ ಪರಿಗಣಿಸಿ, ಮನೆಮನೆಗೆ ತೆರಳಿ ಅರ್ಹ ಮತದಾರರ ಹೆಸರುಗಳು ಮತಪಟ್ಟಿಯಿಂದ ಕೈಬಿಡದಂತೆ ಜಾಗೃತಿ ಮೂಡಿಸಬೇಕು ಎಂದು ಕರೆ ನೀಡಿದರು. ಮತದಾನದ ಹಕ್ಕು ಪ್ರಜಾಪ್ರಭುತ್ವದ ಅತ್ಯಂತ ಶಕ್ತಿಶಾಲಿ ಆಯುಧವಾಗಿದ್ದು, ಅದನ್ನು ರಕ್ಷಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ ಎಂದು ಹೇಳಿದರು.

ರಾಹುಲ್ ಗಾಂಧಿ ಮಾಡಿರುವ ಆರೋಪಗಳನ್ನು ಉಲ್ಲೇಖಿಸಿದ ಅವರು, ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ಮತಗಳ್ಳತನ ನಡೆದಿದೆ ಎಂದು ಕಾಂಗ್ರೆಸ್ ಆರೋಪಿಸುತ್ತಿದೆ ಎಂದರು. ಮಹಾರಾಷ್ಟ್ರ ಚುನಾವಣೆಗೆ ಸಂಬಂಧಿಸಿದಂತೆ ಆರ್ಥಿಕ ತಜ್ಞ ಪರಕಾಲ ಪ್ರಭಾಕರ್ ಅವರು ವ್ಯಕ್ತಪಡಿಸಿರುವ ಅಭಿಪ್ರಾಯವನ್ನೂ ಉಲ್ಲೇಖಿಸಿದರು.

ಬಿಜೆಪಿ ಹಾಗೂ ಆರ್ಎಸ್ಎಸ್ ವಿರುದ್ಧ ವಾಗ್ದಾಳಿ ನಡೆಸಿದ ಹರಿಪ್ರಸಾದ್, ಸಂವಿಧಾನ, ಜಾತ್ಯಾತೀತತೆ ಹಾಗೂ ಸಾಮಾಜಿಕ ನ್ಯಾಯದ ಮೌಲ್ಯಗಳನ್ನು ಕಾಪಾಡಲು ಕಾಂಗ್ರೆಸ್ ಬದ್ಧವಾಗಿದೆ ಎಂದು ಹೇಳಿದರು. ಶಿಕ್ಷಣ, ಆರೋಗ್ಯ, ಆಹಾರ ಹಾಗೂ ವಿಜ್ಞಾನ-ತಂತ್ರಜ್ಞಾನ ಕ್ಷೇತ್ರಗಳಲ್ಲಿ ಕಾಂಗ್ರೆಸ್ ದೇಶವನ್ನು ಮುನ್ನಡೆಸಿದ್ದರೆ, ಬಿಜೆಪಿ ಧರ್ಮ ಮತ್ತು ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಟೀಕಿಸಿದರು.

ಮುಂದಿನ ದಿನಗಳಲ್ಲಿ ಎಸ್ಐಆರ್ ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರ ಹೆಸರು ಕೈಬಿಡದಂತೆ ಕಾರ್ಯಕರ್ತರು ಎಚ್ಚರಿಕೆಯಿಂದ ಕೆಲಸ ಮಾಡಬೇಕು. ಪ್ರಜಾಪ್ರಭುತ್ವ ಹಾಗೂ ಮತದಾನದ ಹಕ್ಕನ್ನು ಕಾಪಾಡುವ ಹೋರಾಟವನ್ನು ಕರ್ನಾಟಕದಿಂದಲೇ ಮತ್ತಷ್ಟು ಬಲಪಡಿಸಬೇಕು ಎಂದು ಅವರು ಕರೆ ನೀಡಿದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande