ಬಂಡಿಪುರ–ನಾಗರಹೊಳೆ ಸಫಾರಿ ಆರಂಭಕ್ಕೆ ಕ್ರಮ : ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ನಾನಾ
Cm meeting


ಬೆಂಗಳೂರು, 30 ಜೂನ್ (ಹಿ.ಸ.) :

ಆ್ಯಂಕರ್ : ಬಂಡಿಪುರ ಮತ್ತು ನಾಗರಹೊಳೆ ರಾಷ್ಟ್ರೀಯ ಉದ್ಯಾನವನಗಳಲ್ಲಿ ಪ್ರವಾಸಿಗರ ಸುರಕ್ಷತೆಗೆ ಆದ್ಯತೆ ನೀಡಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವ ಮೂಲಕ ಸಫಾರಿ ಚಟುವಟಿಕೆಗಳನ್ನು ಪುನರಾರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ವಿಧಾನ ಸೌಧದ ಸಮಿತಿ ಕೊಠಡಿಯಲ್ಲಿ ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅರಣ್ಯ ಇಲಾಖೆ ಅಧಿಕಾರಿಗಳಿಂದ ನಾನಾ ವಿಷಯಗಳ ಕುರಿತು ಮಾಹಿತಿ ಪಡೆದು ಅಗತ್ಯ ನಿರ್ದೇಶನಗಳನ್ನು ನೀಡಿದರು.

ಸಭೆಯಲ್ಲಿ ಅಧಿಕಾರಿಗಳು ನೀಡಿದ ಮಾಹಿತಿಯ ಪ್ರಕಾರ, ಬಂಡಿಪುರ ಮತ್ತು ನಾಗರಹೊಳೆ ಪರಿಸರ ಪ್ರವಾಸೋದ್ಯಮ ಹಾಗೂ ಸಫಾರಿ ಪ್ರದೇಶಗಳಲ್ಲಿ ಹುಲಿಗಳು ಮತ್ತು ಚಿರತೆಗಳ ಸಾಂದ್ರತೆ, ಮಾನವ–ವನ್ಯಜೀವಿ ಸಂಘರ್ಷ ಹೆಚ್ಚಿರುವ ಪ್ರದೇಶಗಳಿಗಿಂತ ಹೆಚ್ಚಿನ ಮಟ್ಟದಲ್ಲಿದೆ. ಈ ಹಿನ್ನೆಲೆಯಲ್ಲಿ ಪ್ರವಾಸಿಗರ ಸುರಕ್ಷತೆಯಲ್ಲಿ ಯಾವುದೇ ರಾಜಿ ಮಾಡಿಕೊಳ್ಳದೆ, ಅಗತ್ಯ ಸುರಕ್ಷತಾ ಕ್ರಮಗಳು ಮತ್ತು ಮುನ್ನೆಚ್ಚರಿಕೆಗಳನ್ನು ಸಂಪೂರ್ಣವಾಗಿ ಪಾಲಿಸಿ ಸಫಾರಿ ಸೇವೆಗಳನ್ನು ಆರಂಭಿಸಲು ಸಭೆಯಲ್ಲಿ ಸಮ್ಮತಿ ಸೂಚಿಸಲಾಯಿತು.

ಸಭೆಯಲ್ಲಿ ಮಹತ್ವಾಕಾಂಕ್ಷೆಯ ಮೇಕೆದಾಟು ಯೋಜನೆ ಕುರಿತೂ ಚರ್ಚೆ ನಡೆಯಿತು. ಯೋಜನೆಗೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರವು ಸಣ್ಣಪುಟ್ಟ ತಾಂತ್ರಿಕ ಆಕ್ಷೇಪಣೆಗಳನ್ನು ಮುಂದಿಟ್ಟು ಸುಪ್ರೀಂ ಕೋರ್ಟ್ ನಲ್ಲಿ ತಕರಾರು ಸಲ್ಲಿಸಲು ಪ್ರಯತ್ನಿಸುತ್ತಿರುವ ಹಿನ್ನೆಲೆಯಲ್ಲಿ, ಆ ಎಲ್ಲ ತಾಂತ್ರಿಕ ಅಂಶಗಳನ್ನು ಸಮಗ್ರವಾಗಿ ಪರಿಶೀಲಿಸಿ ಪರಿಣಾಮಕಾರಿಯಾಗಿ ಎದುರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ ನೀಡಿದರು.

ಇದೇ ವೇಳೆ ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ರಸ್ತೆ ಬದಿಗಳು, ಪ್ರವಾಸಿ ತಾಣಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಅಪಾಯಕಾರಿಯಾಗಿರುವ ಮರಗಳು ಮತ್ತು ಒಣ ಕೊಂಬೆಗಳನ್ನು ಗುರುತಿಸಿ, ಅವುಗಳನ್ನು ತುರ್ತಾಗಿ ತೆರವುಗೊಳಿಸುವಂತೆ ಸಂಬಂಧಿತ ಇಲಾಖೆಗೆ ನಿರ್ದೇಶನ ನೀಡಲಾಯಿತು.

ಸಭೆಯಲ್ಲಿ ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆಯ ರಾಯಭಾರಿಯಾಗಿರುವ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಹಾಗೂ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande