
ಗದಗ, 07 ಜೂನ್ (ಹಿ.ಸ.) :
ಆ್ಯಂಕರ್ : ರಾಜ್ಯ ಸಚಿವ ಸಂಪುಟ ರಚನೆ ಹಾಗೂ ಖಾತೆ ಹಂಚಿಕೆ ವಿಚಾರದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ನಡುವೆ ಕಾಂಗ್ರೆಸ್ ಪಕ್ಷದ ಪ್ರಭಾವಿ ನಾಯಕ ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ಅವರಿಗೆ ಸಚಿವ ಸ್ಥಾನ ನೀಡದಿರುವ ಕುರಿತು ಅಸಮಾಧಾನದ ಧ್ವನಿಗಳು ತೀವ್ರಗೊಳ್ಳುತ್ತಿವೆ. ಈ ಹಿನ್ನೆಲೆಯಲ್ಲಿ ಗದಗ ಜಿಲ್ಲಾ ಸವಿತಾ ಸಮಾಜದ ಜಿಲ್ಲಾಧ್ಯಕ್ಷ ಕೃಷ್ಣಾ ಎಚ್. ಹಡಪದ ಅವರು ಕಾಂಗ್ರೆಸ್ ಪಕ್ಷದ ನಾಯಕತ್ವ ಹಾಗೂ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಜಮೀರ್ ಅಹ್ಮದ್ ಖಾನ್ ಅವರನ್ನು ಕಡೆಗಣಿಸುವುದು ಕಾಂಗ್ರೆಸ್ ಪಕ್ಷಕ್ಕೆ ಮುಂದಿನ ದಿನಗಳಲ್ಲಿ ಭಾರಿ ರಾಜಕೀಯ ಹಿನ್ನಡೆಗೆ ಕಾರಣವಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಜಮೀರ್ ಅಹ್ಮದ್ ಖಾನ್ ಅವರು ಕೇವಲ ಒಂದು ಸಮುದಾಯದ ಪ್ರತಿನಿಧಿಯಲ್ಲ, ರಾಜ್ಯದ ಹಿಂದುಳಿದ ವರ್ಗಗಳು, ಶೋಷಿತ ಸಮುದಾಯಗಳು ಹಾಗೂ ಅಲ್ಪಸಂಖ್ಯಾತರ ಆಶಾಕಿರಣವಾಗಿ ಬೆಳೆದಿರುವ ಜನನಾಯಕ ಎಂದು ಬಣ್ಣಿಸಿದ್ದಾರೆ. ಜನರ ಸಮಸ್ಯೆಗಳಿಗೆ ಸ್ಪಂದಿಸುವ ನಾಯಕನಾಗಿ ರಾಜ್ಯಾದ್ಯಂತ ಗುರುತಿಸಿಕೊಂಡಿರುವ ಅವರನ್ನು ಸಚಿವ ಸಂಪುಟದಿಂದ ಹೊರಗಿಡುವುದು ಸಮುದಾಯಗಳ ಭಾವನೆಗಳಿಗೆ ಧಕ್ಕೆ ಉಂಟುಮಾಡಿದಂತಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಚಾಮರಾಜಪೇಟೆ ಕ್ಷೇತ್ರದಲ್ಲಿ ಜಮೀರ್ ಅಹ್ಮದ್ ಖಾನ್ ಅವರು ಸತತವಾಗಿ ಜನರ ವಿಶ್ವಾಸ ಗಳಿಸಿಕೊಂಡು ಗೆಲುವು ಸಾಧಿಸುತ್ತಿರುವುದು ಅವರ ಜನಪರ ಕಾರ್ಯವೈಖರಿಗೆ ಸಾಕ್ಷಿಯಾಗಿದೆ. ಕೇವಲ ಒಂದು ಸಮುದಾಯದ ಮತಗಳ ಆಧಾರದ ಮೇಲೆ ಅಲ್ಲದೆ, ಹಿಂದುಳಿದ ವರ್ಗಗಳು, ಕಾರ್ಮಿಕರು, ಸಣ್ಣ ವ್ಯಾಪಾರಿಗಳು ಹಾಗೂ ವಿವಿಧ ಸಮುದಾಯಗಳ ಜನರ ಬೆಂಬಲದಿಂದ ಅವರು ಬಲಿಷ್ಠ ನಾಯಕರಾಗಿ ಹೊರಹೊಮ್ಮಿದ್ದಾರೆ. ಇಂತಹ ನಾಯಕನಿಗೆ ಸಚಿವ ಸ್ಥಾನ ನೀಡದೇ ಇರುವುದು ಕಾಂಗ್ರೆಸ್ ಪಕ್ಷದ ಸಂಘಟನಾ ಶಕ್ತಿಗೆ ಹಿನ್ನಡೆಯಾಗಲಿದೆ ಎಂದು ಕೃಷ್ಣಾ ಹಡಪದ ಹೇಳಿದ್ದಾರೆ.
ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಜಮೀರ್ ಅಹ್ಮದ್ ಖಾನ್ ಅವರು ನಡೆಸಿದ ಪ್ರಚಾರ, ಪಕ್ಷದ ಸಂಘಟನೆಯನ್ನು ಬಲಪಡಿಸಲು ಮಾಡಿದ ಪ್ರಯತ್ನಗಳು ಹಾಗೂ ಚುನಾವಣಾ ಸಂದರ್ಭದಲ್ಲಿ ವಹಿಸಿದ ಜವಾಬ್ದಾರಿಯನ್ನು ಪಕ್ಷದ ನಾಯಕತ್ವ ಮರೆಯಬಾರದು ಎಂದು ಅವರು ಒತ್ತಾಯಿಸಿದ್ದಾರೆ. ರಾಜ್ಯ ರಾಜಕೀಯದಲ್ಲಿ ಪ್ರಭಾವಿ ಸ್ಥಾನಮಾನ ಹೊಂದಿರುವ ನಾಯಕರನ್ನು ನಿರ್ಲಕ್ಷಿಸುವುದರಿಂದ ಕಾರ್ಯಕರ್ತರಲ್ಲಿ ಅಸಮಾಧಾನ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅವರು ಎಚ್ಚರಿಸಿದ್ದಾರೆ.
ಜಮೀರ್ ಅಹ್ಮದ್ ಖಾನ್ ವಿರುದ್ಧ ಪ್ರಸ್ತಾಪವಾಗುತ್ತಿರುವ ಆಡಿಯೋ ವಿವಾದದ ಕುರಿತು ಪ್ರತಿಕ್ರಿಯಿಸಿದ ಕೃಷ್ಣಾ ಹಡಪದ, ಯಾವುದೇ ಆರೋಪ ಅಥವಾ ವಿವಾದಕ್ಕೆ ಸಂಬಂಧಿಸಿದಂತೆ ಸತ್ಯಾಸತ್ಯತೆ ಹೊರಬರಲು ತನಿಖೆ ನಡೆಯುವುದು ಸ್ವಾಗತಾರ್ಹ. ಆದರೆ ತನಿಖೆಯ ಹೆಸರಿನಲ್ಲಿ ರಾಜಕೀಯವಾಗಿ ಪ್ರಭಾವಿ ನಾಯಕರನ್ನು ಮೂಲೆಗುಂಪು ಮಾಡುವ ಪ್ರಯತ್ನಗಳು ನಡೆಯಬಾರದು. ಆರೋಪ ಸಾಬೀತಾಗುವ ಮುನ್ನವೇ ಶಿಕ್ಷೆ ನೀಡುವ ರೀತಿಯ ನಿರ್ಧಾರಗಳು ನ್ಯಾಯಸಮ್ಮತವಾಗುವುದಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.
ಬಡವರು, ರೈತರು ಹಾಗೂ ಸಂಕಷ್ಟದಲ್ಲಿರುವ ಜನರ ನೆರವಿಗೆ ಹಲವಾರು ಸಂದರ್ಭಗಳಲ್ಲಿ ವೈಯಕ್ತಿಕವಾಗಿ ಸ್ಪಂದಿಸಿರುವ ಜಮೀರ್ ಅಹ್ಮದ್ ಖಾನ್ ಅವರಂತಹ ನಾಯಕರ ಸೇವೆಯನ್ನು ಸರ್ಕಾರ ಹಾಗೂ ಪಕ್ಷ ಗೌರವಿಸಬೇಕು. ಸಾಮಾಜಿಕ ಬದ್ಧತೆಯೊಂದಿಗೆ ಕೆಲಸ ಮಾಡಿದ ನಾಯಕರನ್ನು ರಾಜಕೀಯ ಕಾರಣಗಳಿಂದ ದೂರ ಇಡುವುದು ಜನಸಾಮಾನ್ಯರಲ್ಲಿಯೂ ತಪ್ಪು ಸಂದೇಶ ರವಾನಿಸುತ್ತದೆ ಎಂದು ಅವರು ಹೇಳಿದ್ದಾರೆ.
ಸವಿತಾ ಸಮಾಜ ಸೇರಿದಂತೆ ಹಲವು ಹಿಂದುಳಿದ ಸಮುದಾಯಗಳ ಜನರು ಜಮೀರ್ ಅಹ್ಮದ್ ಖಾನ್ ಅವರ ನಾಯಕತ್ವದ ಮೇಲೆ ವಿಶ್ವಾಸ ಇಟ್ಟುಕೊಂಡಿದ್ದಾರೆ. ಇಂತಹ ಸಂದರ್ಭದಲ್ಲಿ ಅವರಿಗೆ ಸೂಕ್ತ ಸ್ಥಾನಮಾನ ನೀಡದಿರುವುದು ಸಮುದಾಯಗಳಲ್ಲಿ ಅಸಮಾಧಾನಕ್ಕೆ ಕಾರಣವಾಗುತ್ತಿದೆ. ಈ ಅಸಮಾಧಾನ ಮುಂದಿನ ದಿನಗಳಲ್ಲಿ ರಾಜಕೀಯವಾಗಿ ಪ್ರತಿಫಲಿಸಬಹುದೆಂಬ ಆತಂಕವೂ ವ್ಯಕ್ತವಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಕಾಂಗ್ರೆಸ್ ಪಕ್ಷವು ಸಾಮಾಜಿಕ ನ್ಯಾಯ, ಸಮಾನ ಅವಕಾಶ ಹಾಗೂ ಎಲ್ಲ ವರ್ಗಗಳ ಪ್ರತಿನಿಧಿತ್ವದ ತತ್ವಗಳನ್ನು ಪ್ರತಿಪಾದಿಸುತ್ತ ಬಂದಿದೆ. ಆದ್ದರಿಂದ ಜನಪ್ರಿಯ ಹಾಗೂ ಸಂಘಟನಾ ಸಾಮರ್ಥ್ಯ ಹೊಂದಿರುವ ನಾಯಕರಿಗೆ ಸೂಕ್ತ ಸ್ಥಾನಮಾನ ನೀಡುವುದು ಪಕ್ಷದ ಜವಾಬ್ದಾರಿಯಾಗಿದೆ. ಜಮೀರ್ ಅಹ್ಮದ್ ಖಾನ್ ಅವರನ್ನು ಗೌರವಯುತವಾಗಿ ಸಚಿವ ಸಂಪುಟಕ್ಕೆ ಸೇರಿಸಿಕೊಂಡು ಅವರಿಗೆ ಸೂಕ್ತ ಖಾತೆ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಇಲ್ಲವಾದಲ್ಲಿ ರಾಜ್ಯದಾದ್ಯಂತ ಹಿಂದುಳಿದ ಹಾಗೂ ಶೋಷಿತ ಸಮುದಾಯಗಳಲ್ಲಿ ಅಸಮಾಧಾನ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದ್ದು, ಇದು ಮುಂದಿನ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ರಾಜಕೀಯವಾಗಿ ದುಬಾರಿಯಾಗಬಹುದು ಎಂದು ಕೃಷ್ಣಾ ಎಚ್. ಹಡಪದ ಎಚ್ಚರಿಕೆ ನೀಡಿದ್ದಾರೆ.
ಜಮೀರ್ ಅಹ್ಮದ್ ಖಾನ್ ಅವರನ್ನು ರಾಜಕೀಯವಾಗಿ ದುರ್ಬಲಗೊಳಿಸುವ ಯಾವುದೇ ಪ್ರಯತ್ನವನ್ನು ಹಿಂದುಳಿದ ಹಾಗೂ ಶೋಷಿತ ಸಮುದಾಯಗಳು ಗಂಭೀರವಾಗಿ ಪರಿಗಣಿಸಲಿವೆ. ಅವರಿಗೆ ಸೂಕ್ತ ಸ್ಥಾನಮಾನ ನೀಡುವುದು ಕಾಂಗ್ರೆಸ್ ಪಕ್ಷದ ಜವಾಬ್ದಾರಿ. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಅದರ ರಾಜಕೀಯ ಪರಿಣಾಮಗಳನ್ನು ಪಕ್ಷ ಎದುರಿಸಬೇಕಾಗುತ್ತದೆ ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / lalita MP