
ಧಾರವಾಡ, 07 ಜೂನ್ (ಹಿ.ಸ.) :
ಆ್ಯಂಕರ್ : ವಿಶ್ವ ಪರಿಸರ ದಿನಾಚರಣೆ ಹಾಗೂ ಶಕುಂತಲಾ ಕುರ್ತಕೋಟಿ ಜನ್ಮಶತಮಾನೋತ್ಸವದ ಸ್ಮರಣಾರ್ಥವಾಗಿ ಸಸಿ ನೆಡುವ ಅಭಿಯಾನಕ್ಕೆ ಧಾರವಾಡದಲ್ಲಿ ಚಾಲನೆ ನೀಡಲಾಯಿತು.
‘ಪರಿಸರಕ್ಕಾಗಿ ನಾವು’ ಸಂಘಟನೆ, ಗಾಂಧಿ ಶಾಂತಿ ಪ್ರತಿಷ್ಠಾನ ಕೇಂದ್ರ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಕಾರ್ಯಕ್ರಮವನ್ನು ಧಾರವಾಡ ಜಿಲ್ಲೆಯ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಉದ್ಘಾಟಿಸಿದರು.
ಗಾಂಧಿ ಶಾಂತಿ ಪ್ರತಿಷ್ಠಾನದ ಆವರಣದಲ್ಲಿ ಸಸಿ ನೆಡುವ ಮೂಲಕ ಅಭಿಯಾನಕ್ಕೆ ಅಧಿಕೃತ ಚಾಲನೆ ನೀಡಿದ ಜಿಲ್ಲಾಧಿಕಾರಿಗಳು, ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಹಸಿರು ಪರಿಸರ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಪರಿಸರ ಜಾಗೃತಿ, ಮರಗಳ ಮಹತ್ವ ಹಾಗೂ ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ಉಳಿಸಿಕೊಡುವ ಅಗತ್ಯತೆ ಕುರಿತು ಅಭಿಪ್ರಾಯಗಳು ವ್ಯಕ್ತವಾದವು. ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಪರಿಸರ ಪ್ರೇಮಿಗಳು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ಸಸಿ ನೆಡುವ ಮೂಲಕ ಪರಿಸರ ಸಂರಕ್ಷಣೆಯ ಸಂಕಲ್ಪ ಕೈಗೊಂಡರು.
ಶಕುಂತಲಾ ಕುರ್ತಕೋಟಿಯವರ ಜನ್ಮಶತಮಾನೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾದ ಈ ಅಭಿಯಾನವು ಪರಿಸರ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.