
ಬೆಂಗಳೂರು, 10 ಜುಲೈ (ಹಿ.ಸ.):
ಆ್ಯಂಕರ್:
2026ರ ಮೈಸೂರು ದಸರಾ ಮಹೋತ್ಸವದಲ್ಲಿ ಮೊದಲ ಬಾರಿಗೆ ಕರಾವಳಿಯ ಸಾಂಪ್ರದಾಯಿಕ ಕಂಬಳ ಸ್ಪರ್ಧೆಯನ್ನು ಆಯೋಜಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಶುಕ್ರವಾರ ನಡೆದ ಉನ್ನತ ಮಟ್ಟದ ದಸರಾ ಪೂರ್ವಭಾವಿ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಯಿತು.
ಮೊದಲ ಬಾರಿಗೆ ದಸರಾದಲ್ಲಿ ಕಂಬಳ
ಅಕ್ಟೋಬರ್ 18 ಮತ್ತು 19ರಂದು ಎರಡು ದಿನಗಳ ಕಾಲ ಕಂಬಳ ಆಯೋಜಿಸುವ ಪ್ರಸ್ತಾವನೆಗೆ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಗಿದ್ದು, ಕಾರ್ಯಕ್ರಮದ ಆಯೋಜನೆಗೆ ಪ್ರತ್ಯೇಕ ಅನುದಾನ ನೀಡುವ ವಿಚಾರವೂ ಚರ್ಚೆಯಾಯಿತು.
ಮೈಸೂರು ದಸರಾವನ್ನು ಕರ್ನಾಟಕದ ಸಂಸ್ಕೃತಿ ಮತ್ತು ಪರಂಪರೆಯನ್ನು ದೇಶ-ವಿದೇಶಗಳಿಗೆ ಪರಿಚಯಿಸುವ ಮಹೋತ್ಸವವಾಗಿ ಇನ್ನಷ್ಟು ಅರ್ಥಪೂರ್ಣವಾಗಿ ಆಚರಿಸಬೇಕು. ರಾಜ್ಯದ ವಿವಿಧ ಭಾಗಗಳ ಸಾಂಸ್ಕೃತಿಕ ವೈವಿಧ್ಯತೆಯನ್ನು ದಸರಾ ವೇದಿಕೆಯಲ್ಲಿ ಪ್ರದರ್ಶಿಸುವ ನಿಟ್ಟಿನಲ್ಲಿ ಕಂಬಳವನ್ನು ಸೇರಿಸಲಾಗುತ್ತಿದೆ, ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಭೆಯಲ್ಲಿ ತಿಳಿಸಿದ್ದಾರೆ.
ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳೊಂದಿಗೆ ಗುರುತಿಸಿಕೊಂಡಿರುವ ಕಂಬಳವನ್ನು ಮೈಸೂರು ದಸರಾದಲ್ಲಿ ಸೇರಿಸುವ ಮೂಲಕ ರಾಜ್ಯದ ವಿವಿಧ ಸಾಂಸ್ಕೃತಿಕ ಪರಂಪರೆಗಳನ್ನು ಒಂದೇ ವೇದಿಕೆಯಲ್ಲಿ ಪರಿಚಯಿಸುವ ಉದ್ದೇಶ ಹೊಂದಲಾಗಿದೆ. ಇದರಿಂದ ದೇಶ-ವಿದೇಶಗಳಿಂದ ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸುವ ನಿರೀಕ್ಷೆಯಿದೆ.
ದಸರಾ ವೇಳಾಪಟ್ಟಿ ಅಂತಿಮ
ಸಭೆಯಲ್ಲಿ ದಸರಾ-2026ರ ವೇಳಾಪಟ್ಟಿಯನ್ನೂ ಅಂತಿಮಗೊಳಿಸಲಾಯಿತು. ಜುಲೈ 26ರಂದು ಗಜಪಯಣ ಕಾರ್ಯಕ್ರಮ ಆರಂಭವಾಗಲಿದ್ದು, ಆಗಸ್ಟ್ 26ರಂದು ದಸರಾ ಆನೆಗಳಿಗೆ ಮೈಸೂರು ಅರಮನೆ ಪ್ರವೇಶದ್ವಾರದಲ್ಲಿ ಸಾಂಪ್ರದಾಯಿಕ ಸ್ವಾಗತ ಕೋರಲಾಗುತ್ತದೆ.
ಅಕ್ಟೋಬರ್ 11ರಂದು ಚಾಮುಂಡಿ ಬೆಟ್ಟದಲ್ಲಿ ಶುಭ ಮುಹೂರ್ತದಲ್ಲಿ ನಾಡಹಬ್ಬ ದಸರೆಗೆ ಚಾಲನೆ ದೊರೆಯಲಿದ್ದು, ಅಕ್ಟೋಬರ್ 21ರಂದು ವಿಜಯದಶಮಿ ಅಂಗವಾಗಿ ಜಂಬೂ ಸವಾರಿ ಮೂಲಕ ದಸರಾ ಮಹೋತ್ಸವಕ್ಕೆ ತೆರೆ ಬೀಳಲಿದೆ.
ವಿಜಯದಶಮಿ ದಿನ ಮುಖ್ಯಮಂತ್ರಿ ಮಕರ ಲಗ್ನದಲ್ಲಿ ನಂದಿಧ್ವಜ ಪೂಜೆ ನೆರವೇರಿಸಿ, ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾಗಿರುವ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಸಲ್ಲಿಸಿದ ಬಳಿಕ ಜಂಬೂ ಸವಾರಿಗೆ ಚಾಲನೆ ನೀಡಲಿದ್ದಾರೆ.
ಭದ್ರತೆ ಸೇರಿ ಸಮಗ್ರ ಸಿದ್ಧತೆಗೆ ಸೂಚನೆ
ದಸರಾ ಹಿನ್ನೆಲೆಯಲ್ಲಿ ಭದ್ರತೆ, ಸಂಚಾರ ನಿರ್ವಹಣೆ, ಸ್ವಚ್ಛತೆ, ಸಾರ್ವಜನಿಕ ಸಾರಿಗೆ, ವಸತಿ ಹಾಗೂ ನಾಗರಿಕ ಮೂಲಸೌಕರ್ಯಗಳ ಕುರಿತು ಸಮಗ್ರ ಸಿದ್ಧತೆ ಕೈಗೊಳ್ಳುವಂತೆ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು. ದಸರಾ ಉದ್ಘಾಟನಾ ಕಾರ್ಯಕ್ರಮದ ಮುಖ್ಯ ಅತಿಥಿಯನ್ನು ಆಯ್ಕೆ ಮಾಡುವ ಅಧಿಕಾರವನ್ನು ಮುಖ್ಯಮಂತ್ರಿ ಅವರಿಗೆ ನೀಡಲಾಗಿದೆ.
---------------
ಹಿಂದೂಸ್ತಾನ್ ಸಮಾಚಾರ್ / SNEHA K