
ಬೆಂಗಳೂರು, 11 ಜುಲೈ (ಹಿ.ಸ.):
ಆ್ಯಂಕರ್:
ಮೈಸೂರು ದಸರಾ ಉತ್ಸವಕ್ಕೆ ಕಂಬಳವನ್ನು ಸೇರಿಸುವ ಅಗತ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಕುರಿತು ಪ್ರತಿಕ್ರಿಯಿಸಿರುವ ಅವರು, ಪರಂಪರಾಗತವಾಗಿ ತನ್ನದೇ ಆದ ವೈಶಿಷ್ಟ್ಯ ಹೊಂದಿರುವ ಮೈಸೂರು ದಸರಾ ಉತ್ಸವದ ಸ್ವರೂಪಕ್ಕೆ ಧಕ್ಕೆ ತರುವ ಪ್ರಯತ್ನ ಮಾಡಬಾರದು ಎಂದು ಹೇಳಿದ್ದಾರೆ.
ಕಂಬಳವು ಕರಾವಳಿ ಭಾಗದ ಸಾಂಸ್ಕೃತಿಕ ಶ್ರೇಷ್ಠತೆ, ನಂಬಿಕೆ ಹಾಗೂ ದೈವಿಕ ಪರಂಪರೆಯ ಪ್ರತೀಕವಾಗಿದ್ದು, ಭೌಗೋಳಿಕವಾಗಿ ಕರಾವಳಿ ಪ್ರದೇಶಕ್ಕೆ ಮಾತ್ರ ಹೊಂದುವ ಆಚರಣೆಯಾಗಿದೆ. ಅದನ್ನು ಮೈಸೂರಿಗೆ ಸ್ಥಳಾಂತರಿಸುವುದರಿಂದ ಅದರ ಪಾವಿತ್ರ್ಯಕ್ಕೆ ಧಕ್ಕೆ ಉಂಟಾಗುವ ಸಾಧ್ಯತೆ ಇದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಕರಾವಳಿಯ ಹಸಿರು ಮತ್ತು ನೀರಿನ ನೈಸರ್ಗಿಕ ಪರಿಸರದಲ್ಲೇ ಕಂಬಳವನ್ನು ನೋಡುವುದೇ ವಿಶಿಷ್ಟ ಅನುಭವ. ಆದ್ದರಿಂದ ಮೈಸೂರು ಹಾಗೂ ಕರಾವಳಿ ಭಾಗದ ಜನರ ಭಾವನೆಗಳಿಗೆ ನೋವುಂಟು ಮಾಡುವ ಯಾವುದೇ ಕ್ರಮ ಕೈಗೊಳ್ಳಬಾರದು ಎಂದು ಕುಮಾರಸ್ವಾಮಿ ಹೇಳಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.