
ಬೆಂಗಳೂರು, 11 ಜುಲೈ (ಹಿ.ಸ.):
ಆ್ಯಂಕರ್:
ಕಲಬುರಗಿ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ ತೀವ್ರವಾಗಿದ್ದು, ವಿದ್ಯಾರ್ಥಿಗಳ ಘನತೆ ಮತ್ತು ನೈರ್ಮಲ್ಯದೊಂದಿಗೆ ಸರ್ಕಾರ ಚೆಲ್ಲಾಟವಾಡುತ್ತಿದೆ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರಕಟಿಸಿರುವ ಹೇಳಿಕೆಯಲ್ಲಿ, ಜಿಲ್ಲೆಯ 100ಕ್ಕೂ ಹೆಚ್ಚು ವಿದ್ಯಾರ್ಥಿ ನಿಲಯಗಳಲ್ಲಿ ಶೌಚಾಲಯ ಮತ್ತು ಸ್ನಾನಗೃಹಗಳಂತಹ ಕನಿಷ್ಠ ಸೌಲಭ್ಯಗಳೂ ಇಲ್ಲದೆ ಸಾವಿರಾರು ವಿದ್ಯಾರ್ಥಿಗಳು ಅಮಾನವೀಯ ಪರಿಸ್ಥಿತಿಯಲ್ಲಿ ಜೀವನ ನಡೆಸುತ್ತಿದ್ದಾರೆ ಎಂದು ಅವರು ದೂರಿದ್ದಾರೆ.
ಸುಮಾರು 13,520 ವಿದ್ಯಾರ್ಥಿಗಳು ವಾಸಿಸುತ್ತಿರುವ ಹಾಸ್ಟೆಲ್‌ಗಳಲ್ಲಿ ಒಂದೇ ಕೊಠಡಿಯಲ್ಲಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಇರಿಸಲಾಗುತ್ತಿದ್ದು, ಇದು ಆರೋಗ್ಯ ಮತ್ತು ನೈರ್ಮಲ್ಯದ ದೃಷ್ಟಿಯಿಂದ ಗಂಭೀರ ಸಮಸ್ಯೆಯಾಗಿದೆ ಎಂದು ಹೇಳಿದ್ದಾರೆ. ಹಲವು ವಿದ್ಯಾರ್ಥಿನಿಲಯಗಳಲ್ಲಿ ನೀರಿನ ಕೊರತೆಯಿದ್ದು, ವಿಶೇಷವಾಗಿ ಮಹಿಳಾ ಹಾಸ್ಟೆಲ್‌ಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದ್ದಾರೆ.
ಸಮಾಜ ಕಲ್ಯಾಣ ಇಲಾಖೆಯ ಅಂಕಿಅಂಶಗಳ ಪ್ರಕಾರವೇ 173 ಸ್ನಾನಗೃಹಗಳು ಮತ್ತು 178 ಶೌಚಾಲಯಗಳ ಅಗತ್ಯವಿದೆ. ಆದರೂ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಸರ್ಕಾರ ಯಾವುದೇ ಗಂಭೀರ ಕ್ರಮ ಕೈಗೊಂಡಿಲ್ಲ ಎಂದು ಟೀಕಿಸಿದ್ದಾರೆ.
ಈ ಪರಿಸ್ಥಿತಿಯನ್ನು ಸರಿಪಡಿಸಲು 10 ವರ್ಷ ಮೀರಿದ ಎಲ್ಲ ವಿದ್ಯಾರ್ಥಿ ನಿಲಯಗಳ ಶೌಚಾಲಯ ಹಾಗೂ ಸ್ನಾನಗೃಹಗಳನ್ನು ತಕ್ಷಣ ನವೀಕರಿಸಬೇಕು, ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಹೆಚ್ಚುವರಿ ಮೂಲಸೌಕರ್ಯ ನಿರ್ಮಿಸಬೇಕು, ನೈರ್ಮಲ್ಯ ನಿರ್ವಹಣೆಗೆ ನಿರಂತರ ಮೇಲ್ವಿಚಾರಣಾ ವ್ಯವಸ್ಥೆ ಜಾರಿಗೊಳಿಸಬೇಕು ಹಾಗೂ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.
ವಿದ್ಯಾರ್ಥಿಗಳಿಗೆ ಖಾಲಿ ಭರವಸೆಗಳಲ್ಲ, ಗೌರವಯುತ ಜೀವನ ನಡೆಸಲು ಅಗತ್ಯವಾದ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದು ಸರ್ಕಾರದ ಕರ್ತವ್ಯವಾಗಿದೆ. ಸರ್ಕಾರ ಕೂಡಲೇ ಸಮಸ್ಯೆ ಪರಿಹರಿಸದಿದ್ದರೆ ವಿದ್ಯಾರ್ಥಿಗಳ ಹಕ್ಕುಗಳಿಗಾಗಿ ಹೋರಾಟ ನಡೆಸುವ ಪರಿಸ್ಥಿತಿ ಎದುರಾಗಲಿದೆ ಎಂದು ಛಲವಾದಿ ನಾರಾಯಣಸ್ವಾಮಿ ಎಚ್ಚರಿಕೆ ನೀಡಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.