ಮಹಿಳೆ ಕೊಲೆ ಪ್ರಕರಣದ ಆರೋಪಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ: ಮುಧೋಳದಲ್ಲಿ ಸಂಚಲನ
ಬಾಗಲಕೋಟೆ, 12 ಜುಲೈ (ಹಿ.ಸ.) ಆ್ಯಂಕರ್ : ಕಳೆದ ಎರಡು ದಿನಗಳ ಹಿಂದೆ ಲೋಕಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ವರ್ಚಗಲ್ಲ ಗ್ರಾಮದ ಸಮೀಪದ ಕಬ್ಬಿನ ಹೊಲದಲ್ಲಿ ಮಹಿಳೆಯೊಬ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯಾಗಿದ್ದ ವ್ಯಕ್ತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬಾಗಲಕೋಟೆ
ಸಾವು


ಬಾಗಲಕೋಟೆ, 12 ಜುಲೈ (ಹಿ.ಸ.)

ಆ್ಯಂಕರ್ : ಕಳೆದ ಎರಡು ದಿನಗಳ ಹಿಂದೆ ಲೋಕಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ವರ್ಚಗಲ್ಲ ಗ್ರಾಮದ ಸಮೀಪದ ಕಬ್ಬಿನ ಹೊಲದಲ್ಲಿ ಮಹಿಳೆಯೊಬ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯಾಗಿದ್ದ ವ್ಯಕ್ತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನಲ್ಲಿ ನಡೆದಿದೆ.

ಹಲಗಲಿ ಗ್ರಾಮದ ನಿವಾಸಿ ಸೋಮು ಕೋಲೂರ (34) ಎಂಬಾತನ ಶವ ಗ್ರಾಮ ವ್ಯಾಪ್ತಿಯ ಮರವೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮತ್ತು ಕುತೂಹಲಕ್ಕೆ ಕಾರಣವಾಗಿದೆ. ಮಾಹಿತಿ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಎರಡು ದಿನಗಳ ಹಿಂದೆ ವರ್ಚಗಲ್ಲ ಸಮೀಪದ ಕಬ್ಬಿನ ಹೊಲದಲ್ಲಿ ಅನಸೂಯಾ ಎಂಬ ಮಹಿಳೆಯ ಶವ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಸಂಬಂಧ ಮೃತ ಮಹಿಳೆಯ ಕುಟುಂಬಸ್ಥರು ಸೋಮು ಕೋಲೂರನೇ ಹತ್ಯೆ ನಡೆಸಿದ್ದಾನೆ ಎಂದು ಆರೋಪಿಸಿ ಲೋಕಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ದಾಖಲಾದ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದರಿಂದ ಪೊಲೀಸರು ಆತನ ಪತ್ತೆಗೆ ವ್ಯಾಪಕ ಶೋಧ ಕಾರ್ಯ ಆರಂಭಿಸಿದ್ದರು.

ವಿವಾಹೇತರ ಸಂಬಂಧವೇ ಕಾರಣ ಎಂಬ ಆರೋಪ ಪ್ರಾಥಮಿಕ ಮಾಹಿತಿಯ ಪ್ರಕಾರ, ಅನಸೂಯಾ ಮತ್ತು ಸೋಮು ನಡುವೆ ಹಲವು ವರ್ಷಗಳಿಂದ ವಿವಾಹೇತರ ಸಂಬಂಧವಿತ್ತು ಎನ್ನಲಾಗಿದೆ. ಈ ವಿಚಾರವನ್ನು ಗ್ರಾಮಸ್ಥರು ಹಾಗೂ ಕುಟುಂಬದ ಹಿರಿಯರು ಹಲವು ಬಾರಿ ತಿಳಿಹೇಳಿದ್ದರಿಂದ ಅನಸೂಯಾ ಬಳಿಕ ಪ್ರತ್ಯೇಕವಾಗಿ ಜೀವನ ನಡೆಸುತ್ತಿದ್ದಳು ಎಂದು ತಿಳಿದುಬಂದಿದೆ.

ಆದರೆ, ಜುಲೈ 7ರಂದು ಸೋಮು ಮಹಿಳೆಯನ್ನು ಬಲವಂತವಾಗಿ ಕರೆದುಕೊಂಡು ಹೋಗಿ ಬಳಿಕ ಕೊಲೆ ಮಾಡಿದ್ದಾನೆ ಎಂದು ಮೃತ ಮಹಿಳೆಯ ಕುಟುಂಬಸ್ಥರು ದೂರಿನಲ್ಲಿ ಆರೋಪಿಸಿದ್ದರು. ಈ ದೂರಿನ ಆಧಾರದ ಮೇಲೆ ಪೊಲೀಸರು ತನಿಖೆ ನಡೆಸುತ್ತಿದ್ದರು.

ಆತ್ಮಹತ್ಯೆಯೋ, ಬೇರೆ ಕಾರಣವೋ?

ಈಗ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಸೋಮು ಕೋಲೂರನೇ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವುದು ಪ್ರಕರಣಕ್ಕೆ ಹೊಸ ತಿರುವು ನೀಡಿದೆ. ಇದು ಆತ್ಮಹತ್ಯೆಯೇ ಅಥವಾ ಬೇರೆ ಯಾವುದೇ ಅನುಮಾನಾಸ್ಪದ ಬೆಳವಣಿಗೆಯೇ ಎಂಬ ಎಲ್ಲಾ ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮರಣೋತ್ತರ ಪರೀಕ್ಷೆಯ ವರದಿ ಮತ್ತು ವೈಜ್ಞಾನಿಕ ತನಿಖೆಯ ಬಳಿಕ ಸಾವಿನ ನಿಖರ ಕಾರಣ ತಿಳಿಯಲಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande