
ಕೋಲಾರ,೧೫ ಜುಲೈ (ಹಿ.ಸ):
ಆ್ಯಂಕರ್ :ರಾಜ್ಯದ ಕಾಂಗ್ರೆಸ್ ನೇತೃತ್ವದ ಡಿ.ಕೆ ಶಿವಕುಮಾರ್ ಸರ್ಕಾರದಲ್ಲಿ ವಿವಿಧ ಇಲಾಖೆಗಳಿಂದ ಅನುಮೋದನೆಗೊಂಡಿರುವ ೭೨ ಸಾವಿರ ಸರ್ಕಾರಿ ಹುದ್ದೆಗಳನ್ನು ಏಕಕಾಲದಲ್ಲಿ ಭರ್ತಿ ಮಾಡಬೇಕು ಎಂದು ಜೆಡಿಯು ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ಹಾಗೂ ಜನತಾದಳ (ಸಂಯುಕ್ತ) ಪಕ್ಷದ ಆಗ್ನೇಯ ಪದವೀಧರ ಕ್ಷೇತ್ರದ ಅಧಿಕೃತ ಅಭ್ಯರ್ಥಿ ಕಲ್ಲಂಡೂರು ಡಾ. ಕೆ. ನಾಗರಾಜ್ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ ಅವರು ರಾಜ್ಯದಲ್ಲಿ ಪ್ರಸ್ತುತ ಸುಮಾರು ೨ ಲಕ್ಷಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳು ಖಾಲಿ ಇದ್ದು, ಇವುಗಳನ್ನು ಹಂತ ಹಂತವಾಗಿ ಭರ್ತಿ ಮಾಡುವ ಮೂಲಕ ನಿರುದ್ಯೋಗಿ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಈ ಹಿಂದೆ ನಮ್ಮ ಜನತಾದಳ ಸರ್ಕಾರದ ಮುಖ್ಯಮಂತ್ರಿಯಾಗಿದ್ದ ಜೆಹೆಚ್ ಪಟೇಲ್ ಅವಧಿಯಲ್ಲಿ ಶಿಕ್ಷಣ ಸಚಿವರಾಗಿದ್ದ ಗೋವಿಂದೇಗೌಡ ಅವರ ನೇತೃತ್ವದಲ್ಲಿ ಸುಮಾರು ಒಂದು ಲಕ್ಷ ಶಿಕ್ಷಕರನ್ನು ಪಾರದರ್ಶಕವಾಗಿ ಹಾಗೂ ಭ್ರಷ್ಟಾಚಾರಕ್ಕೆ ಅವಕಾಶವಿಲ್ಲದ ರೀತಿಯಲ್ಲಿ ನೇಮಕ ಮಾಡಲಾಗಿತ್ತು. ಅದೇ ಮಾದರಿಯನ್ನು ಅನುಸರಿಸಿ ಪ್ರಸ್ತುತ ಕಾಂಗ್ರೆಸ್ ಸರ್ಕಾರವೂ ಪಾರದರ್ಶಕ, ನ್ಯಾಯಸಮ್ಮತ ಮತ್ತು ಏಕಕಾಲದಲ್ಲಿ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ನಿರುದ್ಯೋಗ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಖಾಲಿ ಸರ್ಕಾರಿ ಹುದ್ದೆಗಳ ಭರ್ತಿಗೆ ಸರ್ಕಾರ ಆದ್ಯತೆ ನೀಡಿ ಅರ್ಹ ಅಭ್ಯರ್ಥಿಗಳಿಗೆ ಉದ್ಯೋಗ ಕಲ್ಪಿಸಬೇಕು. ಇದರಿಂದ ಆಡಳಿತ ವ್ಯವಸ್ಥೆ ಬಲಗೊಳ್ಳುವುದರ ಜೊತೆಗೆ ಯುವಕರ ಭವಿಷ್ಯಕ್ಕೂ ಭದ್ರತೆ ಸಿಗಲಿದೆ ಎಂದು ಕಲ್ಲಂಡೂರು ಡಾ. ಕೆ. ನಾಗರಾಜ್ ಅಭಿಪ್ರಾಯಪಟ್ಟರು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್