
ಬೆಂಗಳೂರು, 17 ಜುಲೈ (ಹಿ.ಸ.):
ಆ್ಯಂಕರ್:
ಬಿಡದಿ ಟೌನ್ ಶಿಪ್ ಯೋಜನೆ ಹೆಸರಿನಲ್ಲಿ ರಾಜ್ಯ ಸರ್ಕಾರ ರೈತರ ಫಲವತ್ತಾದ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಮುಂದಾಗಿದೆ ಎಂದು ಆರೋಪಿಸಿ, ಬಿಜೆಪಿ ರಾಜ್ಯ ಘಟಕವು ಶುಕ್ರವಾರ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ ನಡೆಸಿತು. ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ವಿಧಾನಸಭೆ ಪ್ರತಿ ಪಕ್ಷದ ನಾಯಕ ಆರ್. ಅಶೋಕ್, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಚಲವಾದಿ ನಾರಾಯಣಸ್ವಾಮಿ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಂಸದರು, ಶಾಸಕರು ಹಾಗೂ ಪಕ್ಷದ ಮುಖಂಡರು ಮತ್ತು ಸಾವಿರಾರು ಕಾರ್ಯಕರ್ತರು ಭಾಗವಹಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಬಿ.ವೈ. ವಿಜಯೇಂದ್ರ, ಬಿಡದಿ ಟೌನ್‌ಶಿಪ್ ನೆಪದಲ್ಲಿ ಕಾಂಗ್ರೆಸ್ ಸರ್ಕಾರ ರಿಯಲ್ ಎಸ್ಟೇಟ್ ದಂಧೆ ನಡೆಸುತ್ತಿದ್ದು, ಅನ್ನದಾತ ರೈತರ ಭೂಮಿಯನ್ನು ಕಸಿದುಕೊಳ್ಳಲು ಮುಂದಾಗಿದೆ ಎಂದು ಆರೋಪಿಸಿದರು. ರೈತರ ಅಹವಾಲುಗಳಿಗೆ ಧ್ವನಿಯಾಗುವ ಉದ್ದೇಶದಿಂದ ಪಕ್ಷದ ವತಿಯಿಂದ ಈ ಜನಾಕ್ರೋಶ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಹೇಳಿದರು.
ರೈತರ ಪರವಾಗಿ ಬಿಜೆಪಿ ಸದಾ ನಿಂತಿದ್ದು, ಮುಂದೆಯೂ ನಿಲ್ಲಲಿದೆ ಎಂದು ತಿಳಿಸಿದ ಅವರು, ಪ್ರತಿಭಟನೆ ನಡೆಸಿದ ರೈತರ ವಿರುದ್ಧ ದಾಖಲಾಗಿರುವ ಸುಳ್ಳು ಮೊಕದ್ದಮೆಗಳನ್ನು ರಾಜ್ಯ ಸರ್ಕಾರ ತಕ್ಷಣವೇ ಹಿಂತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು. ಸರ್ಕಾರ ತನ್ನ ಹಠಮಾರಿ ಧೋರಣೆಯನ್ನು ಮುಂದುವರಿಸಿದರೆ ರಾಜ್ಯಾದ್ಯಂತ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ತಮ್ಮ ದೆಹಲಿ ಹೈಕಮಾಂಡ್‌ನ್ನು ಮೆಚ್ಚಿಸಲು ಹಾಗೂ ಭೂ ವ್ಯವಹಾರಗಳಿಗೆ ಅನುಕೂಲ ಕಲ್ಪಿಸಲು ರೈತರ ಫಲವತ್ತಾದ ಭೂಮಿಯನ್ನು ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದ ವಿಜಯೇಂದ್ರ, ರೈತರನ್ನು ಬೆದರಿಸುವ ಹಾಗೂ ಅವರ ವಿರುದ್ಧ ಪ್ರಕರಣ ದಾಖಲಿಸುವ ಕ್ರಮವನ್ನು ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ ಎಂದು ಹೇಳಿದರು.
ಬಿಡದಿ ಭಾಗದ ರೈತರಿಗೆ ನ್ಯಾಯ ಸಿಗುವವರೆಗೆ ವಿಧಾನಸಭೆಯ ಒಳಗೂ ಹೊರಗೂ ಹೋರಾಟ ಮುಂದುವರಿಯಲಿದೆ ಎಂದು ಅವರು ಸ್ಪಷ್ಟಪಡಿಸಿದರು. ರೈತರ ಹಿತಾಸಕ್ತಿಗೆ ವಿರುದ್ಧವಾದ ಯಾವುದೇ ಯೋಜನೆಯನ್ನು ಬಿಜೆಪಿ ಒಪ್ಪುವುದಿಲ್ಲ ಎಂದು ತಿಳಿಸಿದರು.
ರೈತರ ಶಾಪಕ್ಕೆ ಒಳಗಾದ ಯಾವುದೇ ಸರ್ಕಾರ ಇತಿಹಾಸದಲ್ಲಿ ಉಳಿದಿಲ್ಲ ಎಂದು ಹೇಳಿದ ವಿಜಯೇಂದ್ರ, ಬಿಡದಿ ಟೌನ್‌ಶಿಪ್ ಯೋಜನೆಯಿಂದ ರಾಜ್ಯ ಸರ್ಕಾರ ಕೂಡಲೇ ಹಿಂದೆ ಸರಿದು, ರೈತರ ಭೂಮಿಯನ್ನು ರಕ್ಷಿಸಬೇಕು ಎಂದು ಆಗ್ರಹಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.