
ಬಾಗಲಕೋಟೆ, 17 ಜುಲೈ (ಹಿ.ಸ.)
ಆ್ಯಂಕರ್ : ಅಮೃತ ಭಾರತ ಯೋಜನೆಯಡಿ ₹15.01 ಕೋಟಿ ವೆಚ್ಚದಲ್ಲಿ ಸಮಗ್ರವಾಗಿ ಅಭಿವೃದ್ಧಿಗೊಳ್ಳಲಿರುವ ಬಾಗಲಕೋಟೆ ಜಿಲ್ಲೆಯ ಬಾದಾಮಿ ರೈಲ್ವೆ ನಿಲ್ದಾಣದ ಅಭಿವೃದ್ಧಿ ಕಾಮಗಾರಿಗೆ ಶುಕ್ರವಾರ ಅಧಿಕೃತ ಚಾಲನೆ ದೊರೆಯಿತು. ರೈಲ್ವೆ ಖಾತೆ ರಾಜ್ಯ ಸಚಿವರಾದ ವಿ. ಸೋಮಣ್ಣ ಹಾಗೂ ಸಂಸದ ಪಿ.ಸಿ. ಗಡ್ಡಿಗೌಡ ಅವರು ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮಕ್ಕೆ ವಿಧ್ಯುಕ್ತ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಗಣ್ಯರು, ಅಮೃತ ಭಾರತ ಯೋಜನೆಯಡಿ ದೇಶದ ಪ್ರಮುಖ ರೈಲ್ವೆ ನಿಲ್ದಾಣಗಳನ್ನು ಆಧುನಿಕ ಸೌಲಭ್ಯಗಳೊಂದಿಗೆ ಅಭಿವೃದ್ಧಿಪಡಿಸಲಾಗುತ್ತಿದ್ದು, ಬಾದಾಮಿ ರೈಲು ನಿಲ್ದಾಣವೂ ಅದರಲ್ಲಿ ಪ್ರಮುಖ ಸ್ಥಾನ ಪಡೆದಿದೆ ಎಂದು ತಿಳಿಸಿದರು. ಈ ಯೋಜನೆಯಿಂದ ಪ್ರಯಾಣಿಕರಿಗೆ ಗುಣಮಟ್ಟದ ಸೇವೆ, ಸುಧಾರಿತ ಮೂಲಸೌಕರ್ಯ ಹಾಗೂ ಸುರಕ್ಷಿತ ಸಂಚಾರ ವ್ಯವಸ್ಥೆ ಕಲ್ಪಿಸುವ ಉದ್ದೇಶ ಹೊಂದಲಾಗಿದೆ ಎಂದು ಹೇಳಿದರು.
₹15.01 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿರುವ ಅಭಿವೃದ್ಧಿ ಕಾಮಗಾರಿಗಳಡಿ ನಿಲ್ದಾಣ ಕಟ್ಟಡದ ಆಧುನೀಕರಣ, ಪ್ರಯಾಣಿಕರ ನಿರೀಕ್ಷಣಾ ಕೊಠಡಿಗಳ ಸುಧಾರಣೆ, ವಿಶಾಲ ಪ್ರವೇಶ ದ್ವಾರ, ಸುಸಜ್ಜಿತ ಪ್ಲಾಟ್ಫಾರ್ಮ್, ಡಿಜಿಟಲ್ ಮಾಹಿತಿ ಫಲಕಗಳು, ಕುಡಿಯುವ ನೀರಿನ ವ್ಯವಸ್ಥೆ, ಸ್ವಚ್ಛ ಶೌಚಾಲಯಗಳು, ದಿವ್ಯಾಂಗರಿಗೆ ಅನುಕೂಲಕರ ಸೌಲಭ್ಯಗಳು, ಉತ್ತಮ ಬೆಳಕಿನ ವ್ಯವಸ್ಥೆ, ವಾಹನ ನಿಲುಗಡೆ ಸೇರಿದಂತೆ ಹಲವು ಮೂಲಭೂತ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಬಾದಾಮಿ ವಿಶ್ವವಿಖ್ಯಾತ ಪ್ರವಾಸಿ ತಾಣವಾಗಿರುವ ಹಿನ್ನೆಲೆಯಲ್ಲಿ ರೈಲು ನಿಲ್ದಾಣದ ಅಭಿವೃದ್ಧಿಯಿಂದ ಪ್ರವಾಸೋದ್ಯಮಕ್ಕೂ ಹೊಸ ಉತ್ತೇಜನ ದೊರೆಯಲಿದ್ದು, ಸ್ಥಳೀಯ ವ್ಯಾಪಾರ, ಉದ್ಯೋಗ ಮತ್ತು ಆರ್ಥಿಕ ಚಟುವಟಿಕೆಗಳಿಗೂ ಸಹಕಾರಿಯಾಗಲಿದೆ ಎಂದು ಅಭಿಪ್ರಾಯ ವ್ಯಕ್ತವಾಯಿತು.
ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು, ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು, ಸ್ಥಳೀಯ ಮುಖಂಡರು, ಸಾರ್ವಜನಿಕರು ಹಾಗೂ ರೈಲ್ವೆ ಪ್ರಯಾಣಿಕರು ಉಪಸ್ಥಿತರಿದ್ದರು. ಅಭಿವೃದ್ಧಿ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಗುಣಮಟ್ಟದೊಂದಿಗೆ ಪೂರ್ಣಗೊಳಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande