
ತುಮಕೂರು, 17 ಜುಲೈ (ಹಿ.ಸ.):
ಆ್ಯಂಕರ್:
ಉಪ ಮುಖ್ಯಮಂತ್ರಿ ಹಾಗೂ ಕಂದಾಯ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ. ಜಿ. ಪರಮೇಶ್ವರ್ ಅವರ ಅಧ್ಯಕ್ಷತೆಯಲ್ಲಿ ತುಮಕೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಬರ ಪರಿವೀಕ್ಷಣೆ ಹಾಗೂ ಮುಂಗಾರು ಹಂಗಾಮಿನ ಪರಿಸ್ಥಿತಿ ಕುರಿತ ಪರಿಶೀಲನಾ ಸಭೆ ನಡೆಯಿತು.
ಸಭೆಯಲ್ಲಿ ಜಿಲ್ಲೆಯ ಮಳೆಯ ಸ್ಥಿತಿ, ಬಿತ್ತನೆ ಪ್ರಗತಿ, ರೈತರಿಗೆ ಅಗತ್ಯ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳ ಲಭ್ಯತೆ ಸೇರಿದಂತೆ ಕೃಷಿ ಚಟುವಟಿಕೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಸವಿಸ್ತಾರವಾಗಿ ಚರ್ಚಿಸಲಾಯಿತು. ರೈತರಿಗೆ ಯಾವುದೇ ಕೊರತೆ ಉಂಟಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಡಿಸಿಎಂ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಆಂಧ್ರಪ್ರದೇಶದಲ್ಲಿ ಕೋವಿಡ್ ಸೋಂಕಿನಿಂದ ಸಂಭವಿಸಿರುವ ಸಾವುಗಳ ಹಿನ್ನೆಲೆಯಲ್ಲಿ ಗಡಿಭಾಗದ ಪಾವಗಡ ತಾಲ್ಲೂಕಿನಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ವಿಶೇಷ ಪರಿಶೀಲನೆ ನಡೆಸಲಾಯಿತು. ಆರೋಗ್ಯ ಇಲಾಖೆ ಅಗತ್ಯ ಸಿದ್ಧತೆ ಮಾಡಿಕೊಂಡು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದರ ಜೊತೆಗೆ ಗಡಿಭಾಗಗಳಲ್ಲಿ ನಿಗಾವಹಿಸುವಂತೆ ಸೂಚಿಸಲಾಯಿತು.
ಮಳೆಯಿಂದ ಉಂಟಾದ ಹಾನಿಗೆ ಪರಿಹಾರ ವಿತರಣೆ, ಗ್ರಾಮೀಣ ಹಾಗೂ ನಗರ ಪ್ರದೇಶಗಳ ಕುಡಿಯುವ ನೀರಿನ ವ್ಯವಸ್ಥೆ, ಜಾನುವಾರುಗಳಿಗೆ ಮೇವು ಲಭ್ಯತೆ, ಕೆರೆಗಳ ಒತ್ತುವರಿ ತೆರವು ಹಾಗೂ ಸಂರಕ್ಷಣೆ ಸೇರಿದಂತೆ ವಿವಿಧ ವಿಷಯಗಳ ಪ್ರಗತಿಯನ್ನೂ ಸಭೆಯಲ್ಲಿ ಪರಿಶೀಲಿಸಲಾಯಿತು. ಸಾರ್ವಜನಿಕರಿಗೆ ಅಗತ್ಯ ಸೇವೆಗಳು ನಿರಂತರವಾಗಿ ದೊರೆಯುವಂತೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಡಾ. ಪರಮೇಶ್ವರ್ ನಿರ್ದೇಶನ ನೀಡಿದರು.
ಸಭೆಯಲ್ಲಿ ಶಾಸಕರು, ವಿಧಾನ ಪರಿಷತ್ ಸದಸ್ಯರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ದೀಪಾ ಚೋಳನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ., ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.