ಶಾಲೆ-ಕಾಲೇಜು ಸಮೀಪ ಭವನ ಬೇಡ: ಕಾಮಗಾರಿ ಸ್ಥಗಿತಕ್ಕೆ ಸಂಗಮೇಶ ಡಿಗ್ಗಿ ಮನವಿ
ವಿಜಯಪುರ, 17 ಜುಲೈ (ಹಿ.ಸ.) ಆ್ಯಂಕರ್ : ವಿಜಯಪುರ ಜಿಲ್ಲೆಯ ಸಿಂದಗಿ, ಪಟ್ಟಣದ ಆದರ್ಶ ಶಾಲೆ ಹಾಗೂ ಶಿಕ್ಷಣ ಸಂಸ್ಥೆಗಳ ಸಮೀಪ ಸುಮಾರು ₹50 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ತಳವಾರ ಸಮುದಾಯ ಭವನದ ಕಾಮಗಾರಿಯನ್ನು ತಕ್ಷಣ ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿ ಸಾಮಾಜಿಕ ಹೋರಾಟಗಾರ ಸಂಗಮೇಶ ಡಿಗ್
ಸ್ಕೂಲ್


ವಿಜಯಪುರ, 17 ಜುಲೈ (ಹಿ.ಸ.)

ಆ್ಯಂಕರ್ : ವಿಜಯಪುರ ಜಿಲ್ಲೆಯ ಸಿಂದಗಿ, ಪಟ್ಟಣದ ಆದರ್ಶ ಶಾಲೆ ಹಾಗೂ ಶಿಕ್ಷಣ ಸಂಸ್ಥೆಗಳ ಸಮೀಪ ಸುಮಾರು ₹50 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ತಳವಾರ ಸಮುದಾಯ ಭವನದ ಕಾಮಗಾರಿಯನ್ನು ತಕ್ಷಣ ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿ ಸಾಮಾಜಿಕ ಹೋರಾಟಗಾರ ಸಂಗಮೇಶ ಡಿಗ್ಗಿ ಅವರು ತಾಲೂಕು ದಂಡಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಮನವಿಯಲ್ಲಿ ಅವರು, ಶಾಲೆ ಮತ್ತು ಕಾಲೇಜುಗಳ ಸಮೀಪ ಸಮುದಾಯ ಭವನ ನಿರ್ಮಾಣ ಮಾಡುವುದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ವಾತಾವರಣಕ್ಕೆ ಧಕ್ಕೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ. ಸಮುದಾಯ ಭವನಗಳಲ್ಲಿ ನಡೆಯುವ ಮದುವೆ, ಸಭೆ-ಸಮಾರಂಭ, ಸಾಮಾಜಿಕ ಕಾರ್ಯಕ್ರಮಗಳು ಹಾಗೂ ಇತರ ಸಾರ್ವಜನಿಕ ಚಟುವಟಿಕೆಗಳ ವೇಳೆ ಧ್ವನಿವರ್ಧಕಗಳ ಬಳಕೆ, ವಾಹನಗಳ ಸಂಚಾರ ಮತ್ತು ಜನಸಂದಣಿ ಹೆಚ್ಚಾಗುವುದರಿಂದ ವಿದ್ಯಾರ್ಥಿಗಳ ಅಧ್ಯಯನಕ್ಕೆ ಅಡಚಣೆ ಉಂಟಾಗಲಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ವಿದ್ಯಾರ್ಥಿಗಳ ಏಕಾಗ್ರತೆಗೆ ಶಾಂತ ವಾತಾವರಣ ಅಗತ್ಯವಾಗಿದ್ದು, ಶಿಕ್ಷಣ ಸಂಸ್ಥೆಗಳ ಸಮೀಪ ಇಂತಹ ಸಮುದಾಯ ಭವನಗಳ ನಿರ್ಮಾಣವು ಶಿಕ್ಷಣದ ಗುಣಮಟ್ಟದ ಮೇಲೂ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಈ ಹಿನ್ನೆಲೆಯಲ್ಲಿ, ಸಮುದಾಯ ಭವನ ನಿರ್ಮಾಣದ ಬದಲಾಗಿ ವಿದ್ಯಾರ್ಥಿಗಳ ಜ್ಞಾನ ವೃದ್ಧಿಗೆ ಪೂರಕವಾಗುವ ಸಾರ್ವಜನಿಕ ಗ್ರಂಥಾಲಯ ಹಾಗೂ ಆಧುನಿಕ ವಿಜ್ಞಾನ ಕೇಂದ್ರವನ್ನು ಸ್ಥಾಪಿಸಬೇಕು ಎಂದು ಸರ್ಕಾರ ಹಾಗೂ ಸಂಬಂಧಿತ ಅಧಿಕಾರಿಗಳನ್ನು ಸಂಗಮೇಶ ಡಿಗ್ಗಿ ಒತ್ತಾಯಿಸಿದ್ದಾರೆ.

ಇಂತಹ ಮೂಲಸೌಕರ್ಯಗಳಿಂದ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆ, ಸಂಶೋಧನಾ ಮನೋಭಾವ ಬೆಳೆಸಿಕೊಳ್ಳುವುದು ಹಾಗೂ ಜ್ಞಾನ ವಿಸ್ತರಣೆಗೆ ಹೆಚ್ಚಿನ ಅವಕಾಶಗಳು ದೊರೆಯಲಿವೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ವಿದ್ಯಾರ್ಥಿಗಳ ಭವಿಷ್ಯ ಮತ್ತು ಶಿಕ್ಷಣದ ಹಿತದೃಷ್ಟಿಯಿಂದ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ತಳವಾರ ಸಮುದಾಯ ಭವನದ ಕಾಮಗಾರಿಯನ್ನು ತಕ್ಷಣ ಸ್ಥಗಿತಗೊಳಿಸಿ ಸ್ಥಳದ ಮರುಪರಿಶೀಲನೆ ನಡೆಸಬೇಕು. ಜೊತೆಗೆ ಶಿಕ್ಷಣಕ್ಕೆ ಪೂರಕವಾದ ಗ್ರಂಥಾಲಯ ಮತ್ತು ವಿಜ್ಞಾನ ಕೇಂದ್ರ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ತಾಲೂಕು ದಂಡಾಧಿಕಾರಿಗಳು ಮನವಿ ಸ್ವೀಕರಿಸಿ, ಸಂಬಂಧಿತ ಇಲಾಖೆಯೊಂದಿಗೆ ಚರ್ಚಿಸಿ ನಿಯಮಾನುಸಾರ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು ಎಂದು ತಿಳಿದುಬಂದಿದೆ

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande