
ಬಾಗಲಕೋಟೆ, 17 ಜುಲೈ (ಹಿ.ಸ.)
ಆ್ಯಂಕರ್ : ತುಂಗಳ–ಸಾವಳಗಿ ಹಾಗೂ ಕರಿಮಸೂತಿ ಏತ ನೀರಾವರಿ ಯೋಜನೆಯ ಕಾಲುವೆಗಳಿಗೆ ಸಮಾನವಾಗಿ ನೀರು ಹರಿಸಿ ರೈತರ ಬೆಳೆಗಳನ್ನು ರಕ್ಷಿಸಬೇಕು ಎಂದು ಆಗ್ರಹಿಸಿ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಾವಳಗಿ ಗ್ರಾಮದಲ್ಲಿ ರೈತರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.
ಸಾವಳಗಿ ಗ್ರಾಮದಲ್ಲಿ ನೂರಾರು ರೈತರು ಸೇರಿ ಜಂಬಗಿ, ಆಡಿಹುಡಿ ಹಾಗೂ ತೆಲಸಂಗ ಸಂಪರ್ಕ ರಸ್ತೆಗಳಲ್ಲಿ ವಾಹನ ಸಂಚಾರವನ್ನು ತಡೆದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಕಳೆದ ಹಲವು ದಿನಗಳಿಂದ ಕಾಲುವೆಗಳಿಗೆ ಸಮರ್ಪಕ ಪ್ರಮಾಣದಲ್ಲಿ ನೀರು ಹರಿಯುತ್ತಿಲ್ಲ. ಇದರಿಂದ ಬೆಳೆಗಳು ಒಣಗುವ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ತುಂಗಳ–ಸಾವಳಗಿ ಹಾಗೂ ಕರಿಮಸೂತಿ ಏತ ನೀರಾವರಿ ಯೋಜನೆಗಳ ಅಡಿಯಲ್ಲಿ ಬರುವ ಎಲ್ಲಾ ಕಾಲುವೆಗಳಿಗೆ ಸಮಾನ ಪ್ರಮಾಣದಲ್ಲಿ ನೀರು ಹರಿಸುವ ಜವಾಬ್ದಾರಿ ಅಧಿಕಾರಿಗಳದ್ದಾಗಿದೆ. ಆದರೆ ಕೆಲ ಪ್ರದೇಶಗಳಿಗೆ ಮಾತ್ರ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಸಲಾಗುತ್ತಿದ್ದು, ಉಳಿದ ಭಾಗಗಳ ರೈತರಿಗೆ ಅನ್ಯಾಯವಾಗುತ್ತಿದೆ ಎಂದು ರೈತರು ದೂರಿದರು.
ಪ್ರತಿಭಟನೆಯ ವೇಳೆ ಮಾತನಾಡಿದ ರೈತ ಮುಖಂಡರು, ಕೃಷಿಯೇ ಜೀವನಾಧಾರವಾಗಿರುವ ಈ ಭಾಗದ ರೈತರು ನೀರಿನ ಕೊರತೆಯಿಂದ ಸಂಕಷ್ಟ ಅನುಭವಿಸುತ್ತಿದ್ದಾರೆ. ಮುಂಗಾರು ಹಂಗಾಮಿನ ಬೆಳೆಗಳು ನೀರಿನ ಅಭಾವದಿಂದ ಹಾನಿಗೊಳಗಾಗುವ ಭೀತಿ ಎದುರಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಕೂಡಲೇ ಮಧ್ಯಪ್ರವೇಶಿಸಿ ಕಾಲುವೆಗಳಿಗೆ ಸಮರ್ಪಕವಾಗಿ ನೀರು ಹರಿಸುವ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದರು.
ರಸ್ತೆ ತಡೆ ಹಿನ್ನೆಲೆಯಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು. ಸ್ಥಳಕ್ಕೆ ಆಗಮಿಸಿದ ಪೊಲೀಸ್ ಅಧಿಕಾರಿಗಳು ಹಾಗೂ ನೀರಾವರಿ ಇಲಾಖೆ ಸಿಬ್ಬಂದಿ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿ ಸಮಸ್ಯೆಯನ್ನು ಮೇಲಾಧಿಕಾರಿಗಳ ಗಮನಕ್ಕೆ ತರುವ ಭರವಸೆ ನೀಡಿದರು.
ಆದರೆ ಕೇವಲ ಭರವಸೆಗಳಿಂದ ಸಮಸ್ಯೆ ಬಗೆಹರಿಯುವುದಿಲ್ಲ. ಕಾಲುವೆಗಳಿಗೆ ನೀರು ಹರಿಸುವ ಬಗ್ಗೆ ಸ್ಪಷ್ಟ ಆದೇಶ ಹೊರಡಿಸಿ ಅನುಷ್ಠಾನಗೊಳಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ರೈತರು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಸಾವಳಗಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ರೈತರು, ರೈತ ಸಂಘಟನೆಗಳ ಮುಖಂಡರು ಹಾಗೂ ವಿವಿಧ ಗ್ರಾಮಗಳ ಕೃಷಿಕರು ಭಾಗವಹಿಸಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande