ತುಬಚಿ–ಬಬಲೇಶ್ವರ ಏತ ನೀರಾವರಿ ಮುಖ್ಯ ಪೈಪ್ ಲೈನ್ ಒಡೆದು ಭಾರೀ ಅವಘಡ; ಆಕಾಶದೆತ್ತರಕ್ಕೆ ಚಿಮ್ಮಿದ ನೀರು, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರೈತರ ಆಕ್ರೋಶ
ಬಾಗಲಕೋಟೆ, 17 ಜುಲೈ (ಹಿ.ಸ.) ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕವಟಗಿ ಗ್ರಾಮದ ಸಮೀಪ ತುಬಚಿ–ಬಬಲೇಶ್ವರ ಏತ ನೀರಾವರಿ ಯೋಜನೆಯ ಮುಖ್ಯ ಪೈಪ್ ಲೈನ್ ಒಡೆದು ಭಾರೀ ಪ್ರಮಾಣದಲ್ಲಿ ನೀರು ಸೋರಿಕೆಯಾಗಿರುವ ಘಟನೆ ಶುಕ್ರವಾರ ಸಂಭವಿಸಿದೆ. ಪೈಪ್ಲೈನ್ ಒಡೆದ ಪರಿಣಾಮ ನೀರು ಆಕಾಶದ ಎತ್ತರಕ್ಕೆ ಚಿ
ನೀರು


ಬಾಗಲಕೋಟೆ, 17 ಜುಲೈ (ಹಿ.ಸ.)

ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕವಟಗಿ ಗ್ರಾಮದ ಸಮೀಪ ತುಬಚಿ–ಬಬಲೇಶ್ವರ ಏತ ನೀರಾವರಿ ಯೋಜನೆಯ ಮುಖ್ಯ ಪೈಪ್ ಲೈನ್ ಒಡೆದು ಭಾರೀ ಪ್ರಮಾಣದಲ್ಲಿ ನೀರು ಸೋರಿಕೆಯಾಗಿರುವ ಘಟನೆ ಶುಕ್ರವಾರ ಸಂಭವಿಸಿದೆ. ಪೈಪ್ಲೈನ್ ಒಡೆದ ಪರಿಣಾಮ ನೀರು ಆಕಾಶದ ಎತ್ತರಕ್ಕೆ ಚಿಮ್ಮಿ ಹರಿದ ದೃಶ್ಯ ಸ್ಥಳೀಯರನ್ನು ಬೆಚ್ಚಿಬೀಳುವಂತೆ ಮಾಡಿತು.

ಘಟನೆಯಿಂದ ಲಕ್ಷಾಂತರ ಲೀಟರ್ ನೀರು ವ್ಯರ್ಥವಾಗಿ ಹರಿದು ಹೋಗುತ್ತಿದ್ದು, ಈಗಾಗಲೇ ಬರಗಾಲದ ಸಂಕಷ್ಟ ಎದುರಿಸುತ್ತಿರುವ ಪ್ರದೇಶದಲ್ಲಿ ಅಮೂಲ್ಯ ನೀರು ಹೀಗೆ ಪೋಲಾಗುತ್ತಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ. ನೀರಾವರಿಗಾಗಿ ಕಾಯುತ್ತಿರುವ ರೈತರು, ಇಂತಹ ಸಮಯದಲ್ಲಿ ನೀರನ್ನು ಸಂರಕ್ಷಿಸುವ ಬದಲು ನಿರ್ಲಕ್ಷ್ಯದಿಂದ ಪೋಲಾಗಲು ಬಿಡುತ್ತಿರುವುದು ಅಧಿಕಾರಿಗಳ ಬೇಜವಾಬ್ದಾರಿತನ ಎಂದು ಆರೋಪಿಸಿದ್ದಾರೆ.

ಸ್ಥಳಕ್ಕೆ ಆಗಮಿಸಿದ ರೈತರು ಮತ್ತು ಗ್ರಾಮಸ್ಥರು ತಕ್ಷಣ ಪೈಪ್ಲೈನ್ ದುರಸ್ತಿ ಮಾಡಿ ನೀರಿನ ಸೋರಿಕೆಯನ್ನು ನಿಯಂತ್ರಿಸುವಂತೆ ಒತ್ತಾಯಿಸಿದರು. ಇಷ್ಟೊಂದು ಪ್ರಮಾಣದಲ್ಲಿ ನೀರು ವ್ಯರ್ಥವಾಗುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಕ್ರಮ ಕೈಗೊಳ್ಳದಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ರೈತರು, ಏತ ನೀರಾವರಿ ಯೋಜನೆಗಳ ನಿರ್ವಹಣೆಯಲ್ಲಿ ಅಧಿಕಾರಿಗಳು ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಇಲ್ಲವಾದರೆ ನೀರಿನ ಕೊರತೆಯಿಂದ ಕೃಷಿ ಸಂಪೂರ್ಣ ಹಾನಿಯಾಗುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಎಚ್ಚರಿಕೆ ನೀಡಿದರು.

ಸ್ಥಳೀಯರು ಪೈಪ್ಲೈನ್ ಸೋರಿಕೆಯನ್ನು ತಕ್ಷಣ ದುರಸ್ತಿಪಡಿಸಿ, ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಶಾಶ್ವತ ಕ್ರಮ ಕೈಗೊಳ್ಳುವಂತೆ ಸರ್ಕಾರ ಹಾಗೂ ಸಂಬಂಧಪಟ್ಟ ಇಲಾಖೆಗಳಿಗೆ ಆಗ್ರಹಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande